ಚಿತ್ರದುರ್ಗ ನ್ಯೂಸ್:
‘ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂಬ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾತನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹೇಳಿದರು.
ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಆರ್ಯ ಈಡಿಗರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಮಾತನಾಡಿದರು.
ಕೇರಳದ ಬಸವಣ್ಣ ಎಂದೇ ಪ್ರಖ್ಯಾತಿಯಾಗಿರುವ ಬ್ರಹ್ಮಶ್ರೀ ನಾರಾಯಣ ಗುರುಗಳು ತಮ್ಮ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟವರು. ನಾರಾಯಣ ಗುರುಗಳು ಅಂದಿನ ಕಾಲದಲ್ಲಿ ಕೆಳಜಾತಿಯವರ ಮೇಲೆ ಆಗುತ್ತಿರುವ ದೌರ್ಜನ್ಯಗಳು, ಹೆಣ್ಣು ಮಕ್ಕಳ ಮೇಲೆ ವಿಧಿಸಿರುವ ನಿಬಂಧನೆಗಳನ್ನು ಅಹಿಂಸಾತ್ಮಕವಾಗಿ ವಿರೋಧಿಸಿ, ಮಾನವಕುಲ ಒಂದೇ ಎಂಬ ಸಿದ್ದಾಂತವನ್ನು ಸಮಾಜಕ್ಕೆ ನೀಡಿದರು ಎಂದು ಸ್ಮರಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅನಿಬೆಸೆಂಟ್ ಹೇಳುವಂತೆ, ಬ್ರಹ್ಮಶ್ರೀ ನಾರಾಯಣಗುರುಗಳು ಯೋಗದಲ್ಲಿ ಪತಂಜಲಿ ಮಹರ್ಷಿಗೆ ಸರಿಸಮಾನರು, ಜ್ಞಾನದಲ್ಲಿ ಶಂಕರಾಚಾರ್ಯರಿಗೆ ಸರಿಸಮಾನರು, ಮಾನವೀಯತೆಯಲ್ಲಿ ಏಸುಕ್ರಿಸ್ತರಿಗೆ ಸಮಾನರು. ಅಷ್ಟೋಂದು ದೀರ್ಘಜ್ಞಾನ ಹೊಂದಿದ ಮಹಾನ್ ವ್ಯಕ್ತಿ, ಸಾಮಾನ್ಯ ಮನುಷ್ಯರಾಗಿ ಜನ್ಮವೆತ್ತಿ, ಸಂತ ಪದವಿಗೇರಿದವರು ಎಂದು ಬಣ್ಣಿಸಿದರು.
ಮಹನೀಯರ ಜಯಂತಿಗಳನ್ನು ಕೇವಲ ಒಂದು ಜಾತಿಗೆ ಸೀಮಿತಗೊಳಿಸಬಾರದು. ನಾರಾಯಣ ಗುರುಗಳ ವಿಚಾರಧಾರೆಗಳಿಗೆ ಪ್ರತಿಯೊಬ್ಬರು ಆಕರ್ಷಿತರಾಗುತ್ತಾರೆ. ಅವರು ಮೌನಕ್ರಾಂತಿಯ ಮೂಲಕ ಸಮಾಜದ ಅರಿವು ಮತ್ತು ಉತ್ತಮ ಸಂದೇಶಗಳನ್ನು ನೀಡಿ, ಸಮಾಜವನ್ನು ಪರಿವರ್ತನೆಗೆ ತಂದವರು ಎಂದರು.
ಎಸ್ಆರ್ಎಸ್ ಪಿಯು ಕಾಲೇಜಿನ ಪ್ರಾಚಾರ್ಯ ಈ.ಗಂಗಾಧರ್ ಉಪನ್ಯಾಸ ನೀಡಿ, ನಾರಾಯಣ ಗುರುಗಳು ಸಾಮಾಜಿಕ ಕಾಳಜಿ ಹೊಂದಿದ್ದರು. ಸಮಾಜದ ಅನಿಷ್ಠ ಪದ್ಧತಿ, ತಾರತಮ್ಯ, ಮೂಢನಂಬಿಕೆ, ಅಸಮಾನತೆಯ ವಿರುದ್ಧ ಧ್ವನಿ ಎತ್ತಿದ್ದರು. ಶೋಷಣೆಯ ವಿರುದ್ಧ ಹಲವಾರು ಹೋರಾಟಗಳನ್ನು ನಡೆಸಿದರು. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಆರ್.ದಿಶಾ ವಿದ್ಯಾರ್ಥಿನಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿಕಾರ್ಜುನ್, ಆರ್ಯ ಈಡಿಗರ ಸಮಾಜದ ಜಿಲ್ಲಾ ಅಧ್ಯಕ್ಷ ಹೆಚ್.ಜೀವನ್, ಕಾರ್ಯದರ್ಶಿ ಟಿ.ಮಂಜುನಾಥ್, ನಗರಸಭೆ ಸದಸ್ಯೆ ಅನುರಾಧ ರವಿಕುಮಾರ್, ಚಿತ್ರದುರ್ಗ ತಾಲ್ಲೂಕು ಆರ್ಯ ಈಡಿಗರ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್, ಚಳ್ಳಕೆರೆ ತಾಲ್ಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಸಮಾಜದ ಮುಖಂಡರು ಇದ್ದರು.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
