ಮುಖ್ಯ ಸುದ್ದಿ
Mallapur Lake: ಮಲ್ಲಾಪುರ ಕೆರೆ ದಂಡೆ ಮರು ಸಮೀಕ್ಷೆ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ
CHITRADURGA NEWS | 12 SEPTEMBER 2024
ಚಿತ್ರದುರ್ಗ: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿನ ಚಿತ್ರದುರ್ಗ ನಗರಕ್ಕೆ ಹೊಂದಿಕೊಂಡಿರುವ ಮಲ್ಲಾಪುರ ಕೆರೆ ದಂಡೆ ಮರು ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ ಭೂಮಾಪನ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ಕುಡಿಯುವ ನೀರು ಸರಬರಾಜು ಮತ್ತು ಒಳ ಚರಂಡಿ ಕಾಮಗಾರಿಗಳ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಮಟ್ಟದ ಸಲಹಾ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಲ್ಲಾಪುರ ಕೆರೆ ಏರಿಯನ್ನು ಎತ್ತರಿಸಲಾಗಿದೆ. ಇದರಿಂದ ಕೆರೆಯಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಾಗಿ ಜನವಸತಿ ಪ್ರದೇಶಗಳಿಗೆ ತೊಂದರೆಯಾಗಿದೆ. ತಾತ್ಕಾಲಿಕವಾಗಿ ಕೆರೆಯಿಂದ 2 ಅಡಿ ನೀರು ಹೊರ ಹರಿಸಲು ಸಭೆಯಲ್ಲಿ ಅನುಮತಿಸಲಾಯಿತು.
ಕ್ಲಿಕ್ ಮಾಡಿ ಓದಿ: ನಿರ್ಲಕ್ಷ್ಯ ತೋರಿದರೆ ಎಫ್‌ಐಆರ್ | ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ
ಸಿರಿಗೆರೆ, ಭರಮಸಾಗರ ನೀರು ಸರಬರಾಜು ನಿರ್ವಹಣೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಸ್ತಾಂತರಿಸಿಕೊಳ್ಳುವಂತೆ ಹಾಗೂ ಬಾಕಿ ಉಳಿಸಿಕೊಂಡಿರುವ ನಿರ್ವಹಣೆ ವೆಚ್ಚವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕುಡಿಯುವ ನೀರು ಸರಬಾರಾಜು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡುವ ಕುರಿತು ಪ್ರತ್ಯೇಕವಾಗಿ ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳ ಸಭೆಯನ್ನು ಶುಕ್ರವಾರ ಕರೆಯುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಘು, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಟಿ.ಮಂಜುಳ ಶ್ರೀಕಾಂತ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಅನಿಲ್ ಕುಮಾರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೇಮಂತ ಕುಮಾರ್, ಚಿತ್ರದುರ್ಗ ನಗರ ಸಭೆ ಆಯುಕ್ತೆ ರೇಣುಕಾ.ಎಂ ಸೇರಿದಂತೆ ಇತರೆ ನಗರಸಭೆಗಳ ಪೌರಾಯುಕ್ತರು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.