
CHITRADURGA NEWS | 19 DECEMBER 2025
ಚಿತ್ರದುರ್ಗ: ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಚಿತ್ರದುರ್ಗದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದ್ದಾರೆ.
ಈಗಾಗಲೇ ಚಿತ್ರದುರ್ಗ ನಗರ ಸಮೀಪದ ಕುಂಚಿಗನಾಳ್ ಕಣಿವೆ ಬಳಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಜಿಲ್ಲಾಧಿಕಾರಿಗಳ ಕಚೇರಿಯನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ನೀಡುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಅನುಮೋದನೆ ನೀಡುವ ಹಂತದಲ್ಲಿದೆ ಎಂದರು.
ಇದನ್ನೂ ಓದಿ: ಚಿತ್ರದುರ್ಗ ಹೃದಯ ಭಾಗದಲ್ಲೇ ಹೊಸ ನ್ಯಾಯಾಲಯ ನಿರ್ಮಿಸಿ | ಕೆ.ಎಸ್.ವಿಜಯ
ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿವಾಸ ಮತ್ತು ಸುತ್ತಮುತ್ತಲಿನ ಸ್ಥಳದಲ್ಲಿ ಹೊಸದಾಗಿ ಜಿಲ್ಲಾಡಳಿತ ಭವನ ನಿರ್ಮಿಸಲು ಯೋಜಿಸಲಾಗಿದೆ ಎಂದು ವಿವರಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ ಕಾಮಗಾರಿಗೆ ಚಿತ್ರದುರ್ಗ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಹೊಂದಿಕೊಂಡಿರುವ ತೋಟಗಾರಿಕೆ ಇಲಾಖೆಯ ಸ್ಥಳ ನೀಡುವ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: ಸ್ಥಗಿತವಾದ ಸಹಕಾರಿ ಸೊಸೈಟಿಗಳ ಸ್ಥಗಿತ | ಆಕ್ಷೇಪಣೆಗೆ ಅವಕಾಶ
ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಯೋಜನೆಯಲ್ಲಿ ಜಿಲ್ಲಾಧಿಕಾರಿಗಳ ನಿವಾಸ ಮತ್ತು ಹೊಂದಿಕೊಂಡಿರುವ ತೋಟಗಾರಿಕೆ ಇಲಾಖೆ ಸ್ಥಳವನ್ನು ಸಹ ಬಳಸಿಕೊಳ್ಳಲು ಯೋಜಿಸಲಾಗಿರುತ್ತದೆ. ಆದ್ದರಿಂದ ತೋಟಗಾರಿಕೆ ಇಲಾಖೆಯ 6 ಎಕರೆ ಸ್ಥಳವನ್ನು ಹೊಸ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ನೀಡಿದಲ್ಲಿ, ಈ ಸ್ಥಳದ ಬದಲಾಗಿ ಬೇರೆ ಜಾಗದಲ್ಲಿ ಜಮೀನು ನೀಡಿ ತೋಟಗಾರಿಕೆ ಇಲಾಖೆಗೆ ಅವಶ್ಯಕತೆ ಇರುವ ಮೂಲಭೂತ ಸೌಕರ್ಯ ಮತ್ತು ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೋಟಗಾರಿಕೆ ಇಲಾಖೆ ಕಚೇರಿಗೆ ಸ್ಥಳಾವಕಾಶವನ್ನು ನೀಡಲಾಗುವುದು ಎಂದು ತಿಳಿಸಿದರು.
ಇದಕ್ಕೆ ಉತ್ತರಿಸಿದ ತೋಟಗಾರಿಕೆ ಇಲಾಖೆ ನಿರ್ದೇಶಕ ಡಾ.ಗಿರೀಶ್, ಇಲಾಖೆಗೆ ಸೇರಿದ ಸ್ಥಳವನ್ನು ನೀಡುವ ಬಗ್ಗೆ ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗುವುದು ಹಾಗೂ ಸರ್ಕಾರಕ್ಕೆ ಸೇರಿದ ಸ್ಥಳವನ್ನು ನೀಡುವ ಅಧಿಕಾರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಸಮಿತಿಗೆ ಇರುವುದರಿಂದ ಸೂಕ್ತ ಪ್ರಸ್ತಾವನೆ ಜಿಲ್ಲಾಧಿಕಾರಿಗಳಿಂದ ಸಲ್ಲಿಸಿದಲ್ಲಿ ಸಾರ್ವಜನಿಕ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಮಾರುಕಟ್ಟೆ ಧಾರಣೆ | ಡಿಸೆಂಬರ್ 19 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಈ ಸಂಬಂಧ ಜಿಲ್ಲಾಡಳಿತದ ಹಂತದಲ್ಲಿ ಸಭೆ ನಡೆಸಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಕಂದಾಯ ಇಲಾಖೆಯ ಮುಖಾಂತರ ತೋಟಗಾರಿಕೆ ಇಲಾಖೆಗೆ ಸಲ್ಲಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಆಕಾಶ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತ ಮತ್ತು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
