CHITRADURGA NEWS | 02 FEBRUARY 2026
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಕಳೆದ ಒಂದು ದಶಕದಿಂದ ಅನುಸರಿಸಿಕೊಂಡು ಬಂದಿರುವ ಸ್ಥಿರ ಆರ್ಥಿಕ ನೀತಿಗಳ ಮುಂದುವರಿಕೆ 2026-27ನೇ ಸಾಲಿನ ಕೇಂದ್ರ ಬಜೆಟ್‍ನಲ್ಲಿ ಎದ್ದು ಕಾಣುತ್ತಿದ್ದು, ಇದು 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವ ಭದ್ರ ಬುನಾದಿಯಾಗಿದೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ತಿಳಿಸಿದರು.
ಇದನ್ನೂ ಓದಿ: BJP ಜಿಲ್ಲಾ ಕಾರ್ಯದರ್ಶಿ ರೇಖಾಗೆ ಮಹಿಳಾ ರತ್ನ ಪ್ರಶಸ್ತಿ
ಬಜೆಟ್ ಬಗ್ಗೆ ಹೇಳಿಕೆ ನೀಡಿರುವ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದೇಶದ ಆರ್ಥಿಕ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಈ ಬಾರಿಯ ಆಯ-ವ್ಯಯವು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ.
ವಿಶೇಷವಾಗಿ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಉನ್ನತ ಮೌಲ್ಯದ ಬೆಳೆಗಳ ಕೃಷಿಗೆ ಬಜೆಟ್‍ನಲ್ಲಿ ಒತ್ತು ನೀಡಲಾಗಿದೆ. ಅದರಲ್ಲೂ ತೋಟಗಾರಿಕಾ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟಿರುವುದು ನಮ್ಮ ಭಾಗದ ರೈತರ ಪಾಲಿಗೆ ಆಶಾದಾಯಕವಾಗಿದೆ.
ಕೃಷಿ ಕ್ಷೇತ್ರದಲ್ಲಿ ಉತ್ಪಾದಕತೆ ಹೆಚ್ಚಳ ಮತ್ತು ಉದ್ಯಮಶೀಲತೆಯ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಗುರಿ ಶ್ಲಾಘನೀಯ. ಇದರೊಂದಿಗೆ ಪಶು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಆದ್ಯತೆ ಮತ್ತು ಕೃಷಿ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಪೂರಕವಾಗಿ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ಯ ಯೋಜನೆ’ಯನ್ನು ಜಾರಿಗೆ ತಂದಿರುವುದು ಗ್ರಾಮೀಣ ಭಾರತದ ಆರ್ಥಿಕ ಚಿತ್ರಣವನ್ನೇ ಬದಲಿಸಲಿದೆ ಎಂದಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 02 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಬಜೆಟ್‍ನಲ್ಲಿ ಯುವಶಕ್ತಿಯ ಸಬಲೀಕರಣಕ್ಕೆ ವಿಶೇಷ ಮನ್ನಣೆ ನೀಡಲಾಗಿದ್ದು, ಇಂದಿನ ಯುವ ಸಮುದಾಯದ ಅಗತ್ಯಕ್ಕೆ ತಕ್ಕಂತೆ ಆಧುನಿಕ ಉದ್ಯೋಗ ಸೃಷ್ಟಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ. ಸಣ್ಣ ನಗರಗಳ ಸುಸ್ಥಿರ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಅಮೃತ ಯೋಜನೆಯು ಪ್ರಾದೇಶಿಕ ಸಮತೋಲನಕ್ಕೆ ಹೆಚ್ಚಿನ ಶಕ್ತಿ ನೀಡಲಿದೆ.
ನಮ್ಮ ಕರಾವಳಿ ಭಾಗದ ಮತ್ಸ್ಯ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಿರುವುದು ಹಾಗೂ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಘೋಷಿಸಲಾದ ಆಮೆ ಕಾರಿಡಾರ್ ಯೋಜನೆಯು ಕರಾವಳಿಯ ನಿಸರ್ಗದತ್ತ ಸಂಪತ್ತಿನ ರಕ್ಷಣೆಗೆ ಪೂರಕವಾಗಿದೆ.
ಕ್ರೀಡಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಯುವಜನರ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಲಿದೆ.ಹೊಸ ಆದಾಯ ತೆರಿಗೆ ನೀತಿಯು ಮಧ್ಯಮ ವರ್ಗದವರಿಗೆ ನೆಮ್ಮದಿ ನೀಡಿದ್ದರೆ, ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಸೇರಿದಂತೆ ಏಳು ಪ್ರಮುಖ ರೋಗಗಳ ಔಷಧಿಗಳನ್ನು ಅಗ್ಗಗೊಳಿಸಿರುವುದು ಶ್ಲಾಘನೀಯ.
ಅಪಘಾತ ವಿಮೆ ಮೊತ್ತಕ್ಕೆ ತೆರಿಗೆ ವಿನಾಯಿತಿ ನೀಡುವ ಮೂಲಕ ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ.
ಇದನ್ನೂ ಓದಿ: ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು
ವಿಶೇಷವಾಗಿ ಮಹಿಳಾ ಸಬಲೀಕರಣಕ್ಕೆ ಬಜೆಟ್‍ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಇದಕ್ಕಾಗಿ ಘೋಷಿಸಲಾದ ವಿಶೇಷ ಯೋಜನೆಗಳು ಹಾಗೂ ಪ್ರತಿ ಜಿಲ್ಲೆಯಲ್ಲೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯಗಳ ನಿರ್ಮಾಣದ ನಿರ್ಧಾರವು ಸ್ತ್ರೀ ಶಿಕ್ಷಣ ಮತ್ತು ಪ್ರಗತಿಗೆ ದೊಡ್ಡ ಬಲ ತುಂಬಲಿದೆ. ಮೆಡಿಕಲ್ ಟೂರಿಸಂ, ಆಯುರ್ವೇದ, ಸಾಂಸ್ಕೃತಿಕ ಪ್ರವಾಸೋದ್ಯಮ ಮತ್ತು ಕರ್ನಾಟಕದ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ನೀಡಿರುವ ವಿಶೇಷ ಒತ್ತು ನಮ್ಮ ರಾಜ್ಯದ ಪ್ರಗತಿಗೆ ವೇಗ ನೀಡಲಿದೆ.
ದಿವ್ಯಾಂಗರಿಗಾಗಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಈ ಬಜೆಟ್‍ನ ಮಾನವೀಯ ಮುಖವನ್ನು ಪರಿಚಯಿಸಿವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಈ ಬಜೆಟ್ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
