
CHITRADURGA NEWS | 18 APRIL 2026
ಚಿತ್ರದುರ್ಗ: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಇದೇ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
ಚಿತ್ರದುರ್ಗ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 6640 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅತ್ಯಂತ ವ್ಯವಸ್ಥಿತ ಹಾಗೂ ಸುಗಮವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿರಬೇಕು. ವಿಶೇಷವಾಗಿ ವಿಕಲಚೇತನ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನೆಲಮಹಡಿಯಲ್ಲೇ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಬೇಕು. ಪ್ರಸ್ತುತ ಬಿಸಿಲಿನ ತಾಪ ಹೆಚ್ಚಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ನೆರಳಿನ ವ್ಯವಸ್ಥೆ ಹಾಗೂ ಅಗತ್ಯವಿದ್ದರೆ ಶಾಮಿಯಾನಗಳನ್ನು ಹಾಕಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೆಇಎ ನಿಯಮದಂತೆ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್‍ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುವುದು. ಪ್ರತಿ ಕಾಲೇಜಿಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದ್ದು, ಅವರು ಪರೀಕ್ಷಾ ಪ್ರಕ್ರಿಯೆಯನ್ನು ಹತ್ತಿರದಿಂದ ಗಮನಿಸಲಿದ್ದಾರೆ. ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ಹಾಗೂ ಸಂಗ್ರಹಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ
ಏಪ್ರಿಲ್ 23 ಮತ್ತು 24ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕೆಂದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತವಾರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದ ಸುತ್ತಲು ನಿಷೇಧಿತ ಪ್ರದೇಶವೆಂದು ಈಗಾಗಲೇ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನುಗಳನ್ನು ತರುವುದು ಹಾಗೂ ಕೈ ಗಡಿಯಾರವನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಹಾಗೂ ಕೈಗಡಿಯಾರ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ ಅವರು, ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ, ಪರೀಕ್ಷಾ ಕಾರ್ಯವನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ಇದೇ ಏಪ್ರಿಲ್ 23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
ಚಿತ್ರದುರ್ಗ ನಗರದ ಎಸ್‍ಆರ್‍ಎಸ್ ಪಿಯು ಕಾಲೇಜು, ಕೆಎಂಎಸ್ ಪಿಯು ಕಾಲೇಜು, ಎಸ್‍ಜೆಎಂ ಪಿಯು ಕಾಲೇಜು, ನಮ್ಮ ಎಕ್ಸ್‍ಫರ್ಟ್ ಪಿಯು ಕಾಲೇಜು, ಎಸ್‍ಜೆಎಂ ಪಿಯು ಕಾಲೇಜು, ಚಿನ್ಮೂಲಾದ್ರಿ ಪಿಯು ಕಾಲೇಜು, ಚೈತನ್ಯ ಪಿಯು ಕಾಲೇಜು, ವಾಸವಿ ಪ್ರೌಢಶಾಲೆ, ವೆಸ್ಟರ್ನ್ ಹಿಲ್ಸ್ ಪಿಯು ಕಾಲೇಜು, ಶ್ರೀ ಕಂಪಳರಂಗ ಪಿಯು ಕಾಲೇಜು, ಸೇಂಟ್ ಜೋಸೆಫ್ ಪಿಯು ಕಾಲೇಜು, ಸರ್ಕಾರಿ ವಿಜ್ಞಾನ ಕಾಲೇಜು, ಬಾಲಕರ ಸರ್ಕಾರಿ ಪಿಯು ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಎಸ್‍ಜೆಎಂಐಟಿ ಹಾಗೂ ಮಹಾರಾಣಿ ಪದವಿಪೂರ್ವ ಕಾಲೇಜು ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 6640 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಏಪ್ರಿಲ್ 23ರಂದು ಬೆಳಿಗ್ಗೆ 10:30 ರಿಂದ 11:50 ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ 3:50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 24ರಂದು ಬೆಳಿಗ್ಗೆ 10:30 ರಿಂದ 11:50 ರವರೆಗೆ ಗಣಿತಶಾಸ್ತ್ರ ಮತ್ತು ಮಧ್ಯಾಹ್ನ 2:30 ರಿಂದ 3:50 ರವರೆಗೆ ಜೀವಶಾಸ್ತ್ರ ಪರೀಕ್ಷೆ ಜರುಗಲಿದೆ. ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರಗಳು ಇರುವುದಿಲ್ಲ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ತುರ್ತು ಚಿಕಿತ್ಸೆಗಾಗಿ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡುವ ಕುರಿತು ಆರೋಗ್ಯ ಇಲಾಖೆ ಅಗತ್ಯ ಕ್ರಮವಹಿಸಬೇಕು. ಪರೀಕ್ಷೆಗೆ ಬರುವ ಅಭ್ಯರ್ಥಿಗಳ Facial Recognitionಮಾಡಲು ಚಿತ್ರದುರ್ಗ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರು ಕ್ರಮವಹಿಸಬೇಕು. ಪರೀಕ್ಷಾ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿ ಅವಧಿ ವಿಸ್ತರಣೆ
ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿಸಿಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಬೇಕು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಪ್ರಕಟಿಸಿದ್ದು, ಅಭ್ಯರ್ಥಿಗಳು ವಸ್ತ್ರಸಂಹಿತೆಯ ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಡ್ರೆಸ್ ಕೋಡ್ ಸಮಸ್ಯೆ ಆಗದ ರೀತಿ ಗಮನಿಸಲು ಹಿರಿಯ ಉಪನ್ಯಾಸಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವಂತೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ವಿಶ್ವಮಾನವ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಬೀಳ್ಕೊಡುಗೆ
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಸೋಮಶೇಖರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮ ಹಾನಗಲ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

