CHITRADURGA NEWS | 13 AUGUST 2026
ಚಿತ್ರದುರ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಹಾಗೂ ಸಮೃದ್ಧಿ ಕರುನಾಡು ರಕ್ಷಣಾ ವೇದಿಕೆ ವತಿಯಿಂದ ಗುರುವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ
ಪ್ರತಿಭಟನಾಕಾರರು ಖಾಲಿ ಕೊಡ, ಖಾಲಿ ಚೆಂಬುಗಳನ್ನು ತಲೆ ಮೇಲೆ ಹೊತ್ತು ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ಪ್ರತಿ ವರ್ಷ ಇದೇ ರೀತಿಯಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಶಾಸಕರ ನಿವಾಸಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್ ಮಾತನಾಡಿ, ವಾಡಿಕೆಗಿಂತ ಕಡಿಮೆ ಮಳೆಯಾಗಿ ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ಇದುವರೆಗೆ ರಾಜ್ಯದಲ್ಲಿ ಆಡಳಿತ ನಡೆಸಿದ ಸರ್ಕಾರಗಳು ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರಕ್ಕೆ ನೀರು ಬಿಡುವುದಿಲ್ಲ ಎಂಬ ಖಡಕ್ ಸಂದೇಶ ನೀಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು. ಅಧಿಕಾರಕ್ಕಾಗಿ ಹಾತೊರೆಯುವ ಬದಲು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು ರಾಜೀನಾಮೆ ನೀಡಿ ಕನ್ನಡ ನಾಡು, ನುಡಿ, ನೆಲ ಹಾಗೂ ಜಲದ ಬಗ್ಗೆ ಅಭಿಮಾನ ತೋರಿಸಬೇಕು ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಾಗೌರಣ್ಣ, ನಗರಾಧ್ಯಕ್ಷ ಅವಿನಾಶ್, ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷ ಮುಜಾಹಿದ್, ಸಮೃದ್ಧಿ ಕರುನಾಡು ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೆ. ರಂಗಸ್ವಾಮಿ, ರಾಜ್ಯ ಉಪಾಧ್ಯಕ್ಷ ದೇವರಾಜ್ ಎಸ್., ಗೌರವಾಧ್ಯಕ್ಷ ಆರ್. ಮಂಜುನಾಥ್ ಸೇರಿದಂತೆ ಚಂದ್ರಮ್ಮ, ಅಭಿಷೇಕ್, ಆಕಾಶ್, ಕೃತಿಕ್ ರಂಗಸ್ವಾಮಿ, ಗಿರೀಶ್, ಮದನ್, ಲಿಖಿತ್, ಸುದೀಪ್, ದೇವರಾಜ, ಸ್ವಾಮಿ, ಲಿಂಗರಾಜ್, ಕೆ. ಸಿದ್ದಪ್ಪ, ಧನುಷ್, ರಾಕೇಶ್ ಹಾಗೂ ಜಿಲ್ಲಾ ನೀರಾವರಿ ಹೋರಾಟ ಸಮಿತಿಯ ಸಂಚಾಲಕರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

