
CHITRADURGA NEWS | 08 SEPTEMBER 2026
ಚಿತ್ರದುರ್ಗ: ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ತಾರತಮ್ಯ ನೀತಿಯನ್ನು ಖಂಡಿಸಿ ಸೆ.8ರಂದು ಕರೆ ನೀಡಿದ್ದ ಚಿತ್ರದುರ್ಗ ಬಂದ್‌ನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 7 ಸೆಪ್ಟಂಬರ್ | ಇಂದಿನ ಅಡಿಕೆ ರೇಟ್
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಹಿರಿಯೂರು, ಚಳ್ಳಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸಿರುವ ಸರ್ಕಾರ, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳನ್ನು ಬರ ಪಟ್ಟಿಯಿಂದ ಹೊರಗಿಟ್ಟಿದೆ. ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಜಿಲ್ಲೆಗೆ ನೀರು ಹರಿಯುತ್ತಿರುವುದನ್ನು ಸಂಭ್ರಮಿಸುವ ಸಂದರ್ಭದಲ್ಲಿ ಬಂದ್ ನಡೆಸುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಬಂದ್‌ನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಆದರೆ ಮೂರ್ನಾಲ್ಕು ದಿನಗಳಲ್ಲಿ ಸಭೆ ನಡೆಸಿ, ಬರ ಪಟ್ಟಿಯಿಂದ ಕೈಬಿಟ್ಟಿರುವ ಮೂರು ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಿಸದಿದ್ದರೆ ಮತ್ತೆ ಚಿತ್ರದುರ್ಗ ಬಂದ್ ನಡೆಸಲಾಗುವುದು ಎಂದು ಎಚ್ಚರಿಸಿದರು.
ಚಿತ್ರದುರ್ಗದಲ್ಲಿ ಮಳೆ ಮಾಪನ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದ ಪರಿಣಾಮ ಅಧಿಕಾರಿಗಳು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇದರಿಂದ ಜಿಲ್ಲೆಯ ಕೆಲವು ತಾಲ್ಲೂಕುಗಳು ಬರ ಪಟ್ಟಿಯಿಂದ ಹೊರಗುಳಿಯುವಂತಾಗಿದೆ ಎಂದು ಮಲ್ಲಿಕಾರ್ಜುನ್ ಆರೋಪಿಸಿದರು.
ಇದನ್ನೂ ಓದಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ಬರಪೀಡಿತ ಜಿಲ್ಲೆಯ ರೈತರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಮೂರು ತಾಲ್ಲೂಕುಗಳನ್ನು ಬರ ಪಟ್ಟಿಯಿಂದ ಹೊರಗಿಟ್ಟಿರುವುದು ಅನ್ಯಾಯ. ಭದ್ರಾ ಮೇಲ್ದಂಡೆ ಯೋಜನೆಯ ನೀರು ಜಿಲ್ಲೆಗೆ ಹರಿಯುತ್ತಿರುವ ಸಂದರ್ಭದಲ್ಲಿ ಬಂದ್ ಮಾಡುವುದು ಬೇಡ ಎಂಬ ಸಚಿವರು ಹಾಗೂ ಶಾಸಕರ ಮನವಿಗೆ ಸ್ಪಂದಿಸಿ ಬಂದ್ ಮುಂದೂಡಲಾಗಿದೆ. ಆದರೆ ಬೇಡಿಕೆ ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಎಂ. ಸಿದ್ದಪ್ಪ ಹಳಿಯೂರು ಮಾತನಾಡಿ, ಮೂರು ತಾಲ್ಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವುದಾಗಿ ಸಚಿವರು ನೀಡಿರುವ ಭರವಸೆಯನ್ನು ಶೀಘ್ರ ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಚಿತ್ರದುರ್ಗ ಬಂದ್ ನಡೆಸಲಾಗುವುದು ಎಂದು ತಿಳಿಸಿದರು.
ರೈತ ಸಂಘದ ರಾಜ್ಯ ಕಾರ್ಯದರ್ಶಿ ಚಿಕ್ಕಬ್ಬಿಗೆರೆ ನಾಗರಾಜ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯ ನೀರು ಜಿಲ್ಲೆಗೆ ಹರಿಯುತ್ತಿರುವ ಸಂದರ್ಭದಲ್ಲಿ ಬಂದ್ ನಡೆಸುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಸಚಿವರ ಮಾತಿಗೆ ಬೆಲೆ ನೀಡಿ ಬಂದ್ ಮುಂದೂಡಲಾಗಿದೆ. ಬೇಡಿಕೆ ಈಡೇರದಿದ್ದರೆ ಮತ್ತೆ ಬಂದ್ ನಡೆಸಲಾಗುವುದು ಎಂದರು.
ಇದನ್ನೂ ಓದಿ: ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ಪ್ರದೀಪ್‌ಕುಮಾರ್ ನಾಯ್ಕ ಮಾತನಾಡಿ, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳನ್ನು ಎಂಟು ದಿನಗಳೊಳಗೆ ಬರ ಪೀಡಿತ ಪಟ್ಟಿಗೆ ಸೇರಿಸಬೇಕು. ಇಲ್ಲವಾದರೆ ಚಿತ್ರದುರ್ಗ ಬಂದ್ ನಡೆಸಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೂರಪ್ಪ, ಸತ್ಯಪ್ಪ ಮಲ್ಲಾಪುರ, ಶಿವಣ್ಣ, ರಾಮರೆಡ್ಡಿ, ಸಿದ್ದರಾಮಣ್ಣ, ನಾಗರಾಜ್, ಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

