CHITRADURGA NEWS | 22 SEPTEMBER 2026
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಮೀರಾಸಾಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಭಾರತ್ ಜೋಡೋ ಯುವ ಸಂಘಗಳ ರಚನೆಗೆ ವೇಗ ನೀಡಲು ADC ಸೂಚನೆ
ಗ್ರಾಮದಲ್ಲಿ ಸುಮಾರು ಹತ್ತು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಗ್ರಾಮದಲ್ಲಿ ಶಾಂತಿಯ ವಾತಾವರಣ ಹದಗೆಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು.
ಹಗಲು-ರಾತ್ರಿ ಎನ್ನದೆ ಮದ್ಯ ಸೇವಿಸಿ ಮನೆಗೆ ಬರುವ ಪುರುಷರು ಪತ್ನಿ ಹಾಗೂ ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ತೆರಳುವ ಯುವಕರು ಕೂಡ ಮದ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಕೂಲಿ ಕೆಲಸ ಮಾಡಿ ಸಂಪಾದಿಸುವ ಹಣವನ್ನು ಮದ್ಯ ಸೇವನೆಗೆ ವ್ಯಯಿಸುತ್ತಿರುವುದರಿಂದ ಹಲವು ಕುಟುಂಬಗಳು ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಹಿಳೆಯರು ಅಳಲು ತೋಡಿಕೊಂಡರು.
ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಇದರಿಂದ ಗ್ರಾಮದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಯನ್ನು ಮನವಿ ಮೂಲಕ ಒತ್ತಾಯಿಸಿದರು.
ಇದನ್ನೂ ಓದಿ: ಅಥ್ಲೆಟಿಕ್ಸ್ನಲ್ಲಿ ಬಿಂಧು ಟಿ. ಸಾಧನೆ | ಜಿಲ್ಲಾ ಮಟ್ಟಕ್ಕೆ ಆಯ್ಕೆ
ಚಿದಾನಂದೇಶ್ವರ, ಒನಕೆ ಓಬವ್ವ, ಶಾರದಾಂಬ, ಕನಕ, ಮಾಯಮ್ಮದೇವಿ ಸೇರಿದಂತೆ ಒಟ್ಟು 12 ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಾದ ಅಶ್ವಿನಿ, ರತ್ನಮ್ಮ, ಸುಬ್ಬಮ್ಮ, ಪಾರ್ವತಮ್ಮ, ಅನುಸೂಯಮ್ಮ, ಗಂಗಮ್ಮ, ಲಕ್ಷ್ಮಿ, ಅನಿತಾ, ಲಕ್ಷ್ಮಿದೇವಿ, ಮಂಜಮ್ಮ, ಓಂಕಾರಮ್ಮ, ಜಯಲಕ್ಷ್ಮಿ, ಮಾರಕ್ಕ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

