CHITRADURGA NEWS | 26 OCTOBER 2026
ಚಿತ್ರದುರ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಂಘದ ಆಸ್ತಿಗಳನ್ನು ಅಭಿವೃದ್ಧಿಪಡಿಸಿ, ಆದಾಯವನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲಾ ರೆಡ್ಡಿ ಜನಸಂಘವನ್ನು ಮತ್ತಷ್ಟು ಸದೃಢಗೊಳಿಸಲಾಗುವುದು ಎಂದು ಮಾಜಿ ಶಾಸಕರು ಹಾಗೂ, ಸಂಘದ ಅಧ್ಯಕ್ಷ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.
ಇದನ್ನೂ ಓದಿ: ಮತದಾನದ ಹಕ್ಕಿನ ರಕ್ಷಣೆಗೆ ಕಾಂಗ್ರೆಸ್ನಿಂದ ತೀವ್ರ ಹೋರಾಟ | ದೀಪ್ತಿ ಮೇರಿ ವರ್ಗೀಸ್
ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಭಾನುವಾರ ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಸರ್ಕಾರಿ ನೌಕರರು ಮತ್ತು ಸಮುದಾಯದ ಸಾಧಕರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂಘದ ವತಿಯಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಸಂತಸದ ಸಂಗತಿ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರದೊಂದಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ತಲಾ ₹15,000 ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ₹10,000ದವರೆಗೆ ಪ್ರೋತ್ಸಾಹಧನ ನೀಡಲು ಸುಮಾರು ₹45ರಿಂದ ₹50 ಲಕ್ಷ ವೆಚ್ಚವಾಗುತ್ತಿದೆ ಎಂದರು.
ಟೈಕ್ವಾಂಡೋ, ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಕ್ರೀಡಾಕೂಟಗಳಲ್ಲಿ ಚಿನ್ನ ಮತ್ತು ಕಂಚಿನ ಪದಕ ಪಡೆದವರು ಹಾಗೂ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಘದ ವತಿಯಿಂದ ಗುರುತಿಸಿ ಗೌರವಿಸಲಾಗುತ್ತಿದೆ. ದಾವಣಗೆರೆಯ ಇಂಜಿನಿಯರಿಂಗ್ ಕಾಲೇಜು ಸಮೀಪದ ಸಂಘದ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ಅಥವಾ ಹಾಸ್ಟೆಲ್ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದೆ. ಚಳ್ಳಕೆರೆಯಲ್ಲಿರುವ ಸಂಘದ ಜಾಗದಲ್ಲಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡುವ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ನೀರಾವರಿ ಹೋರಾಟವೇ ನನ್ನನ್ನು ಪತ್ರಿಕೋದ್ಯಮಕ್ಕೆ ಕರೆತಂದಿತು | ಶಿವಾನಂದ ತಗಡೂರು
ಸಂಘದ ಆಸ್ತಿಗಳು ಮತ್ತು ಜಮೀನುಗಳಿಂದ ಬರುವ ಬಾಡಿಗೆ ಹಾಗೂ ಇತರ ಆದಾಯವನ್ನು ಕ್ರೋಢೀಕರಿಸಿ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ. ಆದಾಯ ತೆರಿಗೆ ಇಲಾಖೆಯಿಂದ ಬಂದಿದ್ದ ನೋಟಿಸ್ಗಳಿಗೆ ಕಾನೂನುಬದ್ಧವಾಗಿ ಸ್ಪಷ್ಟನೆ ನೀಡಿ ಪರಿಹರಿಸಲಾಗಿದೆ. ಚಳ್ಳಕೆರೆ ಮತ್ತು ಜಗಳೂರು ಭಾಗದ ಜಾಗಗಳಿಗೆ ಸಂಬಂಧಿಸಿದ ಕೆಲವು ಕಾನೂನು ತೊಡಕುಗಳನ್ನು ನಿವಾರಿಸಿ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಂಘದ ಕಾರ್ಯದರ್ಶಿ ಡಿ.ಕೆ.ಶೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ಶಿಕ್ಷಣವನ್ನು ಆಯ್ಕೆ ಮಾಡಿಕೊಳ್ಳಬೇಕು. ಭವಿಷ್ಯದ ಗುರಿಯನ್ನು ಈಗಿನಿಂದಲೇ ನಿರ್ಧರಿಸಿ, ಪೋಷಕರು, ಹಿರಿಯರು ಹಾಗೂ ಆಯಾ ಕ್ಷೇತ್ರದ ಸಾಧಕರ ಮಾರ್ಗದರ್ಶನ ಪಡೆಯಬೇಕು ಎಂದು ಸಲಹೆ ನೀಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಮುಖ್ಯ. ಕಠಿಣ ಪರಿಶ್ರಮ ಮತ್ತು ಸೂಕ್ತ ಮಾರ್ಗದರ್ಶನದಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು.
ಇದನ್ನೂ ಓದಿ: ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಎಂ.ಕೆ.ಅನಂತ ರೆಡ್ಡಿ, ಕಾರ್ಯದರ್ಶಿ ಪರಶುರಾಮ ಜೆ., ಖಜಾಂಚಿ ಜಿ.ವೈ.ಸುರೇಶ್ ಕುಮಾರ್, ಡಾ.ಎಸ್.ಸದಾಶಿವರೆಡ್ಡಿ, ಕೆ.ವಿ.ರಾಮಕೃಷ್ಣ, ವಿ.ಆರ್.ಮಂಜುನಾಥ್, ಕೆ.ಹೆಚ್.ಸುದರ್ಶನರೆಡ್ಡಿ, ಪಿ.ಚಂದ್ರರೆಡ್ಡಿ, ಡಾ.ಪಿ.ಟಿ.ಚಂದ್ರಹಾಸ್, ಡಾ.ಕೆ.ಜಿ.ರಾಘವರೆಡ್ಡಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಎಂ.ಕೆ.ಅನಂತ ರೆಡ್ಡಿ ಪ್ರಾರ್ಥಿಸಿ ಸ್ವಾಗತಿಸಿದರು. ಪರಶುರಾಮ ಜೆ. ವಂದಿಸಿದರು. ತಿಮ್ಮಾರೆಡ್ಡಿ ಮತ್ತು ಸಾಯಿ ನಿಖಿತ ಕಾರ್ಯಕ್ರಮ ನಿರೂಪಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

