CHITRADURGA NEWS | 29 OCTOBER 2026
ಚಿತ್ರದುರ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಿ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಜಿ.ಸಿ. ಸುರೇಶ್ಬಾಬು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಜ್ಞಾನೇಶ್ ಕುಮಾರ್ ಅವರಿಗೆ ಬೆಂಬಲ ನೀಡುವ ಮೂಲಕ ಎಸ್ಐಆರ್ ಪ್ರಕ್ರಿಯೆ ಮೂಲಕ ನೈಜ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಕಾರಣರಾಗಿದ್ದಾರೆ ಎಂದು ಆರೋಪಿಸಿದರು. ಮತದಾನದ ಹಕ್ಕನ್ನೇ ಕಳೆದುಕೊಂಡರೆ ದಲಿತರು, ಬಡವರು, ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಗಳ ಜನರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.
ಸಹ ಕಾರ್ಯದರ್ಶಿ ಜಾಫರ್ ಮಾತನಾಡಿ, ಎಸ್ಐಆರ್ ಮೂಲಕ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುತ್ತಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಇದರಿಂದ ದೇಶದ ಮೂಲನಿವಾಸಿಗಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಬಡವರು, ಅಲೆಮಾರಿಗಳು, ಬುಡಕಟ್ಟು ಸಮುದಾಯದವರು, ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ ಎಂದು ಹೇಳಿದರು.
ರಾಜ್ಯದಲ್ಲಿ 99 ಲಕ್ಷದ 8 ಸಾವಿರ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ ಎಂದು ಆರೋಪಿಸಿದ ಅವರು, ಮುಂದಿನ ದಿನಗಳಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಗಳನ್ನೂ ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಇದರಿಂದ ಜನರು ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದನ್ನೂ ಓದಿ: ವಿಧಾನ ಪರಿಷತ್ನ ನಾಲ್ಕೂ ಸ್ಥಾನಗಳಲ್ಲಿ ಎನ್ಡಿಎಗೆ ಭರ್ಜರಿ ಜಯ | ಚಿತ್ರದುರ್ಗದಲ್ಲಿ ಬಿಜೆಪಿ ವಿಜಯೋತ್ಸವ
ಸಿಪಿಐ ತಾಲೂಕು ಕಾರ್ಯದರ್ಶಿ ಟಿ.ಆರ್. ಉಮಾಪತಿ ಮಾತನಾಡಿ, ಫಾರಂ ನಂ. 7ರ ಮೂಲಕ ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕುವ ಪ್ರಯತ್ನಗಳು ನಡೆಯುತ್ತಿವೆ. ಇದರಿಂದ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮತದಾರರು ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಎಸ್ಐಆರ್ ಪ್ರಕ್ರಿಯೆಯ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಖಂಡಿಸಿ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕಾಂ. ಹನುಮಂತಪ್ಪ, ಕಾಂ. ಈ. ಸತ್ಯಕೀರ್ತಿ, ಕಾಂ. ಬಿ. ಬಸವರಾಜಪ್ಪ, ಕಾಂ. ಎನ್.ಸಿ. ಕುಮಾರಸ್ವಾಮಿ, ಕಾಂ. ಪೆನ್ನಯ್ಯ, ಕಾಂ. ಗಿರೀಶ್, ಕಾಂ. ಜಮುನಾಬಾಯಿ ಸೇರಿದಂತೆ ನೂರಾರು ಮಹಿಳೆಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

