CHITRADURGA NEWS | 18 NOVEMBER 2026
ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಿರಿಯೂರು ನಗರದ (ಕಡಲೆಕಾಯಿ ಮಂಡಿ) ನೆಹರು ಮೈದಾನದಲ್ಲಿ ಇದೇ ನವೆಂಬರ್ 21ರಂದು ಶನಿವಾರ ಬೆಳಿಗ್ಗೆ 11ಕ್ಕೆ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಬುಧವಾರ ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್. ರಮ್ಯಾ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.
ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
ಸಾರ್ವಜನಿಕರ ಕುಂದುಕೊರತೆಗಳನ್ನು ಮತ್ತು ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯವಾಕ್ಯದೊಂದಿಗೆ ಸರ್ಕಾರ ಪ್ರಜಾಸೇವಾ ಅಭಿಯಾನ ಜಾರಿಗೆ ತಂದಿದೆ. ಪ್ರಜಾ ಸೇವಾ ಆಂದೋಲನದ ಸಭೆ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಸಾರ್ವಜನಿಕರಿಗೆ ತಲುಪಿಸಬೇಕಾದ ಸರ್ಕಾರಿ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಎಸ್. ರಮ್ಯಾ, ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇಳೆ ಪ್ರತಿ ಮಳಿಗೆಗೂ ಭೇಟಿ ನೀಡಿ ಪರಿಶೀಲಿಸುವುದರಿಂದ, ಎಲ್ಲಾ ಇಲಾಖೆಗಳು ತಮ್ಮ ಇತ್ತೀಚಿನ ಯೋಜನೆಗಳು ಮತ್ತು ಸಾಧನೆಗಳನ್ನು ಅರ್ಥಪೂರ್ಣವಾಗಿ ಪ್ರದರ್ಶಿಸಬೇಕು. ಸಾರ್ವಜನಿಕರಿಗೆ ಉಪಯುಕ್ತವಾಗುವಂತಹ ಮಾಹಿತಿ ಮತ್ತು ಪ್ರಾತ್ಯಕ್ಷಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಪ್ರದರ್ಶನಕ್ಕೆ ಮಳಿಗೆಗಳನ್ನು ವ್ಯವಸ್ಥೆ ಮಾಡಬೇಕು. ವಿಶೇಷವಾಗಿ ಸಾವಯವ ಕೃಷಿ, ಜೈವಿಕ ಗೊಬ್ಬರ, ನೂತನ ಕೃಷಿ ತಂತ್ರಜ್ಞಾನ ಹಾಗೂ ಪೌಷ್ಟಿಕಾಂಶ ಅಭಿಯಾನದ ಕುರಿತು ವಿಶೇಷ ಮಳಿಗೆಗಳನ್ನು ತೆರೆಯಲು ಸೂಚಿಸಿದರು.
ಇದನ್ನೂ ಓದಿ: ತುಂಗಾದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಲು ರೈತರ ಆಗ್ರಹ
ಕೃಷಿ ಇಲಾಖೆಯ ಮುಖ್ಯಮಂತ್ರಿಗಳ ನೇಗಿಲ ಯೋಗಿ ಯೋಜನೆ, ರೇಷ್ಮೆ ಇಲಾಖೆಯ ನೂತನ ಕಾರ್ಯಕ್ರಮಗಳು ಹಾಗೂ ಬೆಳೆ ವಿಮೆ ಪರಿಹಾರ ವಿತರಣೆಯ ಪ್ರಗತಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಬೆಳೆ ಕಟಾವು ಪ್ರಯೋಗಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಅರ್ಹ ರೈತರಿಗೆ ಶೀಘ್ರವಾಗಿ ವಿಮಾ ಪರಿಹಾರ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯ ನಂತರ ಜಿಲ್ಲಾಧಿಕಾರಿ ಎಸ್.ರಮ್ಯಾ ಮತ್ತು ವಿವಿಧ ಇಲಾಖಾ ಮುಖ್ಯಸ್ಥರು ಪ್ರಜಾಸೇವಾ ಆಂದೋಲನಾ ಸಭೆ ಕಾರ್ಯಕ್ರಮ ನಡೆಯುವ ಹಿರಿಯೂರು ನಗರದ ನೆಹರು ಮೈದಾನಕ್ಕೆ ಭೇಟಿ ನೀಡಿ, ಮಳಿಗೆಗಳ ನಿರ್ಮಾಣಕ್ಕೆ ಇರುವ ಸ್ಥಳಾವಕಾಶವನ್ನು ಪರಿಶೀಲಿಸಿದರು.
ಸಾರ್ವಜನಿಕರಿಂದ ಈಗಾಗಲೇ ಸ್ವೀಕರಿಸಲಾದ ಹಾಗೂ ಕಾರ್ಯಕ್ರಮದ ದಿನದಂದು ಸ್ವೀಕರಿಸುವ ಅರ್ಜಿಗಳನ್ನು ವ್ಯವಸ್ಥಿತವಾಗಿ ದಾಖಲಿಸಿ, ಶೀಘ್ರವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

