ಚಿತ್ರದುರ್ಗ ನ್ಯೂಸ್.ಕಾಂ: ನಗರದ ತರಾಸು ರಂಗಮಂದಿರ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.
ಚಿತ್ರದುರ್ಗ ಜಿಲ್ಲೆಯ ಜನತೆ ಹಲವು ದಶಕಗಳಿಂದ ಹಂಬಲಿಸುತ್ತಿದ್ದ ಸರ್ಕಾರಿ ಮೆಡಿಕಲ್ ಕಾಲೇಜಿನ (ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ) ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಇಂದು ಅಧಿಕೃತವಾಗಿ ವೈದ್ಯಕೀಯ ವೃತ್ತಿಯನ್ನು ಅಂಗೀಕಾರ ಮಾಡುವ ಸಮಾರಂಭ ವೈಟ್‍ಕೋಟ್ ಸೆರ್ಮನಿ ನಡೆಯಿತು.
ಯಾವುದೇ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿಗಳು ಸೇರಿದಾಗ ಅವರಿಗೆ ವೈದ್ಯರು ಧರಿಸುವ ವೈಟ್ ಕೋಟ್ ನೀಡಿ, ಅದನ್ನು ಧರಿಸಲು ಸಮಾರಂಭ ಆಯೋಜಿಸಿ ಈ ವೇಳೆ ಚರಕ ಶಪಥ ಬೋಧಿಸಲಾಗುತ್ತದೆ. ಅಂಥದ್ದೊಂದು ಸಮಾರಂಭ ನಗರದ ತರಾಸು ರಂಗಮಂದಿರಲ್ಲಿ 2023 ಡಿಸೆಂಬರ್ 22 ರಂದು ನಡೆದಿದೆ.

ಮೊದಲ ಬ್ಯಾಚಿನ 150 ವಿದ್ಯಾರ್ಥಿಗಳು ವೈದ್ಯ ಪದವೀ ಅಂಗೀಕಾರದ ಪ್ರತೀಕವಾಗಿ ಬಿಳಿ ಕೋಟ್ ಧರಿಸಿ ಮಹರ್ಷಿ ಚರಕ ಶಪಥ ಮಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ಹೇಳಿದ್ದೇನು..
ಕೇಂದ್ರ ಸಚಿವರು, ಚಿತ್ರದುರ್ಗ ಸಂಸದರಾದ ಎ.ನಾರಾಯಣಸ್ವಾಮಿ ಈ ಸಮಾರಂಭ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದು, ಭವಿಷ್ಯದಲ್ಲಿ ರಾಜ್ಯ, ರಾಷ್ಟ್ರ, ವಿಶ್ವಕ್ಕೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ವೈದ್ಯರಾಗಿ ಹೊರಹೊಮ್ಮಬೇಕು ಎಂದು ಹಾರೈಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ ಸಾವಿರ ಮಂದಿಗೆ ಒಬ್ಬ ವೈದ್ಯರು ಇರಬೇಕು. ಆದರೆ ದೇಶದಲ್ಲಿ 800 ಮಂದಿಗೆ ಒಬ್ಬ ವೈದ್ಯರು ಇದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ 60 ಸಾವಿರ ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ನಿಯಮಕ್ಕಿಂತಲೂ ನಮ್ಮ ದೇಶದಲ್ಲಿ ವೈದ್ಯರ ಸಂಖ್ಯೆ ಜಾಸ್ತಿ ಇದೆ. ಆದರೆ ಈ ದೇಶದ ಜನರಿಗೆ ವೈದ್ಯಕೀಯ ಸೇವೆಯ ವೆಚ್ಚವೂ ಜಾಸ್ತಿಯಾಗುತ್ತಿದೆ. ಇದಕ್ಕೆ ನಮಲ್ಲಿ ಮೌಲ್ಯಗಳ ಕುಸಿತ, ಸಾಮಾಜಿಕ ಕಳಕಳಿ ಇಲ್ಲದೇ ಇರುವುದೇ ಪ್ರಮುಖ ಕಾರಣವಾಗಿದೆ. ಯಾವುದೇ ವೃತ್ತಿಯಲ್ಲಿ ನೈತಿಕತೆ ಇರಬೇಕು. ನೈತಿಕತೆ ಇಲ್ಲದ ವೃತ್ತಿ ವೃತ್ತಿಯೇ ಅಲ್ಲ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ವೈದ್ಯರಲ್ಲಿ ದೇವರನ್ನು ಕಾಣುವ ಪರಂಪರೆ ಭಾರತೀಯ ಸಂಸ್ಕøತಿಯಲ್ಲಿ ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗುತ್ತಿದೆ. ರೋಗಿಗಳ ಪ್ರಾಣವನ್ನು ಉಳಿಸುವ ನಿಟ್ಟಿನಲ್ಲಿ ಮಾನವೀಯತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಹೆಸರು, ಕೀರ್ತಿ, ಹಣವೂ ಸಿಗಲಿದೆ. ಕೇವಲ ಹಣದ ಹಿಂದೆ ಹೋಗಬಾರದು ಎಂದು ಕಿವಿಮಾತು ಹೇಳಿದರು.
ಜಿಲ್ಲೆಯ ಜನರು ಹಾಗೂ ಜನಪ್ರತಿನಿಧಿಗಳ ಅನೇಕ ವರ್ಷಗಳ ಹೋರಾಟದ ಫಲವಾಗಿ ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ಮಂಜೂರಾಗಿದೆ. ಇಲ್ಲಿ ಪ್ರವೇಶ ಪಡೆದ ವೈದ್ಯಕೀಯ ವಿದ್ಯಾರ್ಥಿಗಳು ವಿಶ್ವದ ಎಲ್ಲ ಕಡೆಗಳಲ್ಲಿಯೂ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ವಿಶೇಷಾಧಿಕಾರಿ ಡಾ.ಬಿ.ವೈ.ಯುವರಾಜ್ ಮಾತನಾಡಿ, ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭವು ವಿದ್ಯಾರ್ಥಿಗಳಿಗೆ ವೈದ್ಯಕೀಯ ವೃತ್ತಿ ಅಂಗೀಕಾರದ ವಿಧಿಯಾಗಿದೆ. ಇದು ವೈದ್ಯಕೀಯ ವಿದ್ಯಾರ್ಥಿಗಳ ವೈದಕೀಯ ವೃತ್ತಿಗೆ ಪ್ರವೇಶ ಸೂಚಿಸುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಭ್ರಷ್ಟ ರಾಜಕಾರಣದ ಬಗ್ಗೆ ಸಚಿವ ಎ.ನಾರಾಯಣಸ್ವಾಮಿ ವೈರಾಗ್ಯ
ವಿಶೇಷಾಧಿಕಾರಿ ಡಾ.ಬಿ.ವೈ.ಯುವರಾಜ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೋಧಿಸಿದರು. ಸಮಾರಂಭದ ಅಂಗವಾಗಿ ಪ್ರತಿ ಎಂಬಿಬಿಎಸ್ ವಿದ್ಯಾರ್ಥಿ ಇದೇ ಸಂದರ್ಭದಲ್ಲಿ ಬಿಳಿ ಕೋಟ್ ಧರಿಸಿದರು.
ಕಾರ್ಯಕ್ರಮದಲ್ಲಿ ಡಿಎಚ್‍ಓ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ, ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ ವಿ.ಮಹೇಶ್, ಉಪನ್ಯಾಸಕರಾದ ಡಾ.ಪ್ರಕಾಶ್, ಡಾ.ಸಾಗರ್, ಡಾ.ಶ್ರೀನಿವಾಸ್ ಸೇರಿದಂತೆ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
