CHITRADURGA NEWS | 25 NOVEMBER 2026
ಚಿತ್ರದುರ್ಗ: ಕಾನೂನು ವಿದ್ಯಾರ್ಥಿಗಳು ಹಾಗೂ ಭವಿಷ್ಯದ ವಕೀಲರು ಹಣಕ್ಕಾಗಿ ಕೆಲಸ ಮಾಡುವುದಕ್ಕಿಂತ ನ್ಯಾಯಕ್ಕಾಗಿ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಮೂಲಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಕನ್ನಡ ಚಲನಚಿತ್ರ ನಟ ಅಭಿಜಿತ್ ರಾವ್ ಹೇಳಿದರು.
ಇದನ್ನೂ ಓದಿ: ಡಿಸೆಂಬರ್ 15ರೊಳಗೆ ಜಿಲ್ಲೆಯ ರಸ್ತೆ ಗುಂಡಿ ಮುಚ್ಚದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ | ಸಚಿವ ರಘುಮೂರ್ತಿ ಎಚ್ಚರಿಕೆ
ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ‘ನ್ಯಾಯೋತ್ಸವ’ ಕಾನೂನು ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ತಮ್ಮ ಜೀವನದ ಹಾಗೂ ಚಲನಚಿತ್ರ ಪಯಣದ ಅನುಭವಗಳನ್ನು ಹಂಚಿಕೊಂಡರು.
ಚಿತ್ರದುರ್ಗದವರೇ ಆದ ಅಭಿಜಿತ್ ರಾವ್ ಅವರು ಚಳ್ಳಕೆರೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಮೆಲುಕು ಹಾಕಿದರು. ಚಿತ್ರದುರ್ಗದ ಪ್ರತಿಯೊಂದು ರಸ್ತೆಯೂ ತಮಗೆ ಪರಿಚಿತವಾಗಿದ್ದು, ಈ ಊರಿನೊಂದಿಗೆ ಆತ್ಮೀಯ ನಂಟಿದೆ ಎಂದು ಸ್ಮರಿಸಿದರು. ತಮ್ಮ ನಿಜಜೀವನದ ಕೆಲವು ಘಟನೆಗಳು ತಾವು ಅಭಿನಯಿಸಿದ ‘ರಾಮಾಚಾರಿ’ ಪಾತ್ರವನ್ನು ಹೋಲುತ್ತವೆ ಎಂದು ತಿಳಿಸಿದರು.
ಕನ್ನಡ ಚಿತ್ರರಂಗದ ಮೇರು ನಟ ಡಾ.ವಿಷ್ಣುವರ್ಧನ್ ಅವರೊಂದಿಗಿನ ಒಡನಾಟ ಹಾಗೂ ಅವರೊಂದಿಗೆ ಕಳೆದ ಅಮೂಲ್ಯ ಕ್ಷಣಗಳನ್ನು ನೆನಪಿಸಿಕೊಂಡರು. ತಮ್ಮ ಪ್ರಸಿದ್ಧ ಚಿತ್ರಗಳ ಸಂಭಾಷಣೆ ಮತ್ತು ಹಾಡುಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬಿದರು. ಭವಿಷ್ಯದ ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 25 | ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ರೇಟ್…..
ನಟ ಅಭಿಜಿತ್ ರಾವ್ ಅವರ ಪತ್ನಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಸಮಾಜದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು. ಹಣಕ್ಕಿಂತ ನ್ಯಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್.ಸುಧಾದೇವಿ ಮಾತನಾಡಿ, ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ. ಜೀವನದಲ್ಲಿ ಸಾಧನೆ ಮಾಡಲು ಸ್ಪಷ್ಟ ಗುರಿ ಹೊಂದಿರಬೇಕು. ಆ ಗುರಿ ತಲುಪಲು ಗುರುಗಳ ಮಾರ್ಗದರ್ಶನವೂ ಅಗತ್ಯ ಎಂದರು.
ವಿದ್ಯಾರ್ಥಿಗಳಲ್ಲಿರುವ ಕಲೆ, ಪ್ರತಿಭೆ ಹಾಗೂ ಕೌಶಲ್ಯಗಳನ್ನು ಬೆಳೆಸಲು ಕಾಲೇಜು ಸದಾ ಬೆಂಬಲವಾಗಿ ನಿಲ್ಲಲಿದೆ. ವಿದ್ಯಾರ್ಥಿಗಳು ಉತ್ಸವದ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇಂತಹ ಉತ್ಸವಗಳು ಪ್ರತಿಭೆ ಅನಾವರಣಗೊಳಿಸುವುದರ ಜೊತೆಗೆ ಜ್ಞಾನ ಮತ್ತು ಅನುಭವ ವೃದ್ಧಿಗೂ ಉತ್ತಮ ವೇದಿಕೆಯಾಗಿವೆ ಎಂದು ತಿಳಿಸಿದರು.
ಇದನ್ನೂ ಓದಿ: ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಫಾತ್ಯರಾಜನ್ ವಹಿಸಿದ್ದರು. ಉಪಾಧ್ಯಕ್ಷ ಟಿ.ಎಚ್.ಬಸವರಾಜ್, ಕಾರ್ಯದರ್ಶಿ ಡಿ.ಕೆ.ಶೀಲಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೂರ್ಣ ಚಂದ್ರ ತೇಜಸ್ವಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕಾನೂನು ವೇದಿಕೆಯ ಗೌರವ ಅಧ್ಯಕ್ಷ ಹಾಗೂ ಸಹ ಪ್ರಾಧ್ಯಾಪಕ ಡಾ.ಕೆ.ಎಸ್.ಕರಿಯಣ್ಣ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಹಾಗೂ ಐಕ್ಯೂಎಸಿ ಸಂಯೋಜಕ ಡಾ.ಎನ್.ಡಿ.ಗೌಡ, ವಿದ್ಯಾರ್ಥಿ ಕಾನೂನು ವೇದಿಕೆಯ ಅಧ್ಯಕ್ಷ ವಿಶ್ವಸಾಗರ ಜಿ.ಪಿ., ಪ್ರಧಾನ ಕಾರ್ಯದರ್ಶಿ ವಿನುತಾ ಎಚ್.ಜಿ. ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯದರ್ಶಿ ಗಿರೀಶ್ ವಂದಿಸಿದರು. ಮಂಜುನಾಥ್ ನಿರೂಪಿಸಿದರು.
