CHITRADURGA NEWS | 27 JANUARY 2026
ಚಿತ್ರದುರ್ಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರಕ್ಕೆ ಐದು ದಿನಗಳ ಕೆಲಸ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ಕಾರ್ಮಿಕ ಸಂಘನೆಗಳ ಸಂಯುಕ್ತ ವೇದಿಕೆಯ ಕರೆಯ ಮೇರೆಗೆ ಚಿತ್ರದುರ್ಗದ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಮುಂಭಾಗದಲ್ಲಿ ಮುಷ್ಕರ ನಡೆಸಲಾಯಿತು.
ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಂಧ್ಯಾರೆಡ್ಡಿ ಆಯ್ಕೆ | ಕಸಾಪ ಘೋಷಣೆ
ಮುಷ್ಕರದ ಅಂಗವಾಗಿ ಎಸ್.ಬಿ.ಎಂ. ವೃತ್ತದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆವರಣದಲ್ಲಿ ಪ್ರತಿಭಟನಾ ಮತಪ್ರದರ್ಶನ ನಡೆಸಿ, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ, ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ ಮೆರವಣಿಗೆ ನಡೆಸಿದರು.
ಬ್ಯಾಂಕ್ ಉದ್ಯೋಗಿಗಳು 5 ದಿನಗಳ ಬ್ಯಾಂಕಿಂಗ್ ಪದ್ಧತಿ ಜಾರಿಗೆ ಬರಬೇಕು ಎನ್ನುವ ಬೇಡಿಕೆಯ ಕುರಿತಾಗಿ ಈಗಾಗಲೇ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಬ್ಯಾಂಕ್ ಕಾರ್ಮಿಕ ಸಂಘಗಳ ನಡುವೆ ದಿನಾಂಕ 08.03.2024 ರಂದು ಒಪ್ಪಂದವಾಗಿ ಅದರ ಅನುಮೋದನೆಗಾಗಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆಗೆ ಕಳುಹಿಸಲಾಗಿತ್ತು.
ಆದರೆ ಒಪ್ಪಂದವಾಗಿ 2 ವರ್ಷಗಳು ಕಳೆದರೂ, ಈ ಕುರಿತಾಗಿ ಹತ್ತಾರು ಸಭೆಗಳು ನಡೆದರೂ, ಬೇಡಿಕೆ ಈಡೇರಿಸಬೇಕು ಎಂದು ಹಲವಾರು ಪ್ರತಿಭಟನೆಗಳು ನಡೆದಿದ್ದರೂ ಸಹ ಅನಗತ್ಯವಾಗಿ ವಿಳಂಬ ಧೋರಣೆಯನ್ನು ಅನುಸರಿಸಲಾಗುತ್ತಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಬೇಡಿಕೆಯ ಈಡೇರಿಕೆಗಾಗಿ ಈ ಹಿಂದೆ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ಕೊಟ್ಟಂತಹ ಸಂದರ್ಭದಲ್ಲಿ ಕೇಂದ್ರ ಕಾರ್ಮಿಕ ಆಯುಕ್ತರ ಸಮ್ಮುಖದಲ್ಲಿ ಕೇಂದ್ರ ಹಣಕಾಸು ಸೇವೆಗಳ ಇಲಾಖೆಯ ಉನ್ನತಾಧಿಕಾರಿಗಳು ಅತೀ ಶೀಘ್ರವಾಗಿ ಬ್ಯಾಂಕ್ ಉದ್ಯೋಗಿಗಳ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಅದಾಗಿ ಒಂದು ವರ್ಷವೇ ಕಳೆದಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ. ಈಗ ಬ್ಯಾಂಕ್ ಉದ್ಯೋಗಿಗಳ ಸಹನೆಯ ಕಟ್ಟೆ ಒಡೆದಿದೆ. ಮುಷ್ಕರದ ಹಾದಿ ಅನಿವಾರ್ಯವಾಗಿದೆ ಎಂದಿದ್ದಾರೆ.
ಪ್ರಸ್ತುತ ಬ್ಯಾಂಕ್ ಉದ್ಯೋಗಿಗಳು ಅತೀ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವ್ಯವಹಾರಕ್ಕೆ ತಕ್ಕನಾಗಿ ನೇಮಕಾತಿ ಉದ್ಯೋಗಿಗಳ ಆಗುತ್ತಿಲ್ಲ. ವಾರದ ದಿನಗಳಲ್ಲಿ ನೌಕರರು ರಾತ್ರಿ ಹತ್ತಾದರೂ ಮನೆಗೆ ಹಿಂತಿರುಗಲು ಸಾಧ್ಯವಾಗುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬಂದರೆ ನೌಕರರ ಕಾರ್ಯಕ್ಷಮತೆ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.
ಕೇಂದ್ರ ಸರಕಾರದ ಅಧೀನದಲ್ಲಿ ಇರುವ ಹಲವಾರು ಇಲಾಖೆಗಳು, ಜೀವ ವಿಮೆ, ಸಾಮಾನ್ಯ ವಿಮೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಸೆಬಿ, ನಬಾರ್ಡ್ ಮೊದಲಾದ ಇಲಾಖೆಗಳು ವಾರಕ್ಕೆ ಐದು ದಿನ ಮಾತ್ರವೇ ಕೆಲಸ ಮಾಡುತ್ತಿವೆ. ಜಾಗತಿಕ ಮಟ್ಟದಲ್ಲೂ ಬ್ಯಾಂಕುಗಳು 5 ದಿನ ಕೆಲಸ ಮಾಡುವ ವ್ಯವಸ್ಥೆ ಇದೆ. ಹೀಗಿದ್ದರೂ ಸಹ ಕೇಂದ್ರ ಹಣಕಾಸು ಇಲಾಖೆ ಅನಗತ್ಯವಾಗಿ ಕಾಲಹರಣ ಮಾಡಿ ಬ್ಯಾಂಕ್ ಉದ್ಯೋಗಿಗಳ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸೋತಿದೆ. ಆದ್ದರಿಂದ ಅನಿವಾರ್ಯವಾಗಿ ಇಂದು ದೇಶದಾದ್ಯಂತ ಬ್ಯಾಂಕ್ ಮುಷ್ಕರ ನಡೆಸಲಾಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೆ ಮಹಿಳಾ ಸಾಹಿತಿಗಳು ಅಧ್ಯಕ್ಷರಾಗಲಿ | ನೇಮಿಚಂದ್ರ, ಸಂಧ್ಯಾರೆಡ್ಡಿ ಪರಿಗಣನೆಗೆ ಒತ್ತಾಯ
ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡು, ಬೀದಿಗಿಳಿದು ಸರಕಾರದ ವಿಳಂಬ ಧೋರಣೆಯ ವಿರುದ್ಧ ಪ್ರತಿಭಟಿಸಲಿದ್ದಾರೆ. ಜ.27ರ ಬ್ಯಾಂಕ್ ಮುಷ್ಕರವು ಸಾರ್ವಜನಿಕರಿಗೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದರೆ ಈ ಸಮಸ್ಯೆಗೆ ಕೇಂದ್ರ ಸರಕಾರ, ಕೇಂದ್ರ ಹಣಕಾಸು ಸಚಿವಾಲಯ, ಕೇಂದ್ರ ಹಣಕಾಸು ಸೇವೆಗಳ ಇಲಾಖೆಯೇ ನೇರವಾಗಿ ಹೊಣೆ ಹೊತ್ತುಕೊಳ್ಳಬೇಕು ಎಂದು ಬ್ಯಾಂಕ್‍ನ ಯುಎಫ್‍ಬಿಯು ಕಾರ್ಮಿಕ ಮುಖಂಡ ಟಿಸಿಪಿ ವೀರೇಶ್ ಹೇಳಿದರು.
ಪ್ರತಿಭಟನೆಯಲ್ಲಿ ವೀರೇಶ್, ಶ್ರೀಧರ್ ನಾಯಕ ಪಿಓ, ದಾದ ಪೀರ್, ಮತ್ತು ಪ್ರಶಾಂತ್ ಮಹೇಶ್ವರಪ್ಪ, ಶಶಿಧರ್,ಅರುಣ್ ಕುಮಾರ್, ಶ್ರೀನಿವಾಸ್,ಕೋಕಿಲ, ಸುಧಾ ಸೇರಿದಂತೆ ಇತರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
