CHITRADURGA NEWS | 28 NOVEMBER 2026
ಹಿರಿಯೂರು: ಕಾಂಗ್ರೆಸ್ ಸರ್ಕಾರ ಬಡವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದಲಿತರ ₹52 ಸಾವಿರ ಕೋಟಿ ಅನುದಾನವನ್ನು ದುರುಪಯೋಗಪಡಿಸಿಕೊಂಡಿದೆ. ರಾಜ್ಯದಲ್ಲಿ ಭ್ರಷ್ಟಾಚಾರ, ದುರಾಡಳಿತ ಮತ್ತು ಬೆಲೆ ಏರಿಕೆ ಮಿತಿ ಮೀರಿದ್ದು, ಸರ್ಕಾರದ ವಿರುದ್ಧ ವಿಧಾನಸೌಧದಿಂದ ಕಾಂಗ್ರೆಸ್ ಅನ್ನು ಖಾಲಿ ಮಾಡಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ನಗರದಲ್ಲಿ ಶನಿವಾರ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
2023ರ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕಳೆದ ಮೂರೂವರೆ ವರ್ಷಗಳಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಭ್ರಷ್ಟಾಚಾರದಲ್ಲಿ ತೊಡಗಿದೆ. ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಕಡಿತಗೊಳಿಸಿರುವುದಲ್ಲದೆ, ಒಳಮೀಸಲಾತಿ ವಿಚಾರದಲ್ಲಿಯೂ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕುರಿ ಸಾಕಾಣಿಕೆಯಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಕುರಿಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಜನನ ಮತ್ತು ಮರಣ ಪ್ರಮಾಣಪತ್ರಗಳ ಶುಲ್ಕವನ್ನೂ ಹೆಚ್ಚಿಸುವ ಮೂಲಕ ಸರ್ಕಾರ ಜನಸಾಮಾನ್ಯರ ಮೇಲೆ ಹೆಚ್ಚುವರಿ ಹೊರೆ ಹಾಕಿದೆ ಎಂದು ಟೀಕಿಸಿದರು.
ಇದನ್ನೂ ಓದಿ: ಮಠಗಳ ಆಸ್ತಿ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ | ಡಾ. ಬಸವಕುಮಾರ ಸ್ವಾಮೀಜಿ
ಹಿರಿಯೂರು ಕ್ಷೇತ್ರಕ್ಕೆ ₹2,200 ಕೋಟಿ ಅನುದಾನ ನೀಡುವುದಾಗಿ ಉಪಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ ನಾಯಕರು, ಈವರೆಗೆ ಏಕೆ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಎಂದು ಪ್ರಶ್ನಿಸಿದರು. ಹಾಲು, ತರಕಾರಿ, ಅಕ್ಕಿ, ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಜೀವನ ನಡೆಸುವುದು ಕಷ್ಟವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗಿಂತ ಕಾಂಗ್ರೆಸ್ ಸಚಿವರೇ ಹೆಚ್ಚು ಉದ್ಧಾರವಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಹಾಗೂ ದಾವಣಗೆರೆ ವಿಭಾಗದ ಸಹಪ್ರಭಾರಿ ಎ. ಮುರಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಜನರು ಜಾಗೃತರಾಗಬೇಕು. ಹಿರಿಯೂರು ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಬೇಕು. ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಹೋರಾಟ ಮುಂದುವರಿಯಲಿದೆ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗಿರೀಶ್ ಮಾತನಾಡಿ, ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಹಾಲಿನಿಂದ ಹಿಡಿದು ಅಬಕಾರಿ ವಸ್ತುಗಳವರೆಗೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯರಿಗೆ ತೊಂದರೆ ನೀಡಲಾಗುತ್ತಿದೆ. ಸರ್ಕಾರದ ವೈಫಲ್ಯಗಳನ್ನು ಗ್ರಾಮ ಪಂಚಾಯಿತಿ ಮಟ್ಟದವರೆಗೆ ಜನರಿಗೆ ತಿಳಿಸುವ ಮೂಲಕ ಹೋರಾಟವನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಹೊಳಲ್ಕೆರೆ ತಾಲೂಕಿನಲ್ಲಿ ಕೈಬಿಟ್ಟಿರುವ 30 ಕೆರೆಗಳಿಗೆ ಭದ್ರಾ ನೀರು | ಹನುಮಲಿ ಷಣ್ಮುಖಪ್ಪ ಭರವಸೆ
ಪ್ರತಿಭಟನೆಯಲ್ಲಿ ಕಾಡುಗೊಲ್ಲ ಸಮಾಜದ ರಾಜಣ್ಣ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಅಭಿನಂದನ್, ಮುಖಂಡರಾದ ಲಕ್ಷ್ಮೀಕಾಂತ್, ಮೀಸೆ ಮಹಾಲಿಂಗಪ್ಪ, ಎಸ್‌ಟಿ ಮೋರ್ಚಾ ಅಧ್ಯಕ್ಷ ಸಿ.ಬಿ. ರಾಜು, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ನೌಷಾದ್, ನಗರಸಭೆ ಮಾಜಿ ಅಧ್ಯಕ್ಷೆ ಮಂಜುಳ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ನಗರದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
