CHITRADURGA NEWS | 12 SEPTEMBER 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಗೋನೂರು ಕೆರೆಗೆ ತಲುಪಿರುವ ಹಿನ್ನೆಲೆಯಲ್ಲಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗೋನೂರು ಕೆರೆಯಲ್ಲಿ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಚಿತ್ರದುರ್ಗ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ತಿಳಿಸಿದರು.
ಇದನ್ನೂ ಓದಿ: 13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಸಚಿವರು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಲು ಸೆಪ್ಟೆಂಬರ್ 20ರಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲೆಗೆ ಭೇಟಿ ನೀಡಲಿದ್ದು, ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ವಿವರ ಹಂಚಿಕೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.
ಬಹು ದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಪೂರಕವಾಗಿ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ. ವೈ-ಜಂಕ್ಷನ್ನಿಂದ 114 ಕಿ.ಮೀ ಉದ್ದದ ಕಾಲುವೆಗೆ 3 ಟಿಸಿಎಂಸಿ ನೀರನ್ನು ಹರಿಸಲು ಮುಖ್ಯಮಂತ್ರಿಗಳು ಆದೇಶಿಸಿದ್ದು, ಈಗಾಗಲೇ ಗೋನೂರು ಕೆರೆಗೆ ನೀರು ತಲುಪಿದೆ.
ಈ ಯೋಜನೆಯಿಂದ ಹಿರಿಯೂರು, ಹೊಸದುರ್ಗ, ಚಿತ್ರದುರ್ಗ, ಚಳ್ಳಕೆರೆ, ಕಡೂರು ಹಾಗೂ ತರೀಕೆರೆ ತಾಲೂಕುಗಳ ಸುಮಾರು 80 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗಿದೆ. ಈ ಯೋಜನೆ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿರದೆ, ಪಕ್ಷಾತೀತವಾಗಿ ಎಲ್ಲರ ಶ್ರಮ ಮತ್ತು ಹೋರಾಟದ ಫಲವಾಗಿದೆ ಎಂದು ಟಿ.ರಘೂಮೂರ್ತಿ ಹೇಳಿದರು.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಕಾಲುವೆಗೆ ಈಜಲು ತೆರಳಿದ್ದ ಬಾಲಕ ಸಾವು
ಭದ್ರಾ ಮೇಲ್ದಂಡೆ ಯೋಜನೆ: 2028ಕ್ಕೆ ಪೂರ್ಣಗೊಳಿಸಲು ಆದ್ಯತೆ:
ಭದ್ರಾ ಮೇಲ್ದಂಡೆ ಯೋಜನೆಯನ್ನು 2028ರ ವೇಳೆಗೆ ಸಂಪೂರ್ಣವಾಗಿ ಪೂರ್ಣಗೊಳಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ. ಕೇಂದ್ರ ಸರ್ಕಾರವು ಈ ಯೋಜನೆಗೆ ಘೋಷಿಸಿರುವ ರೂ.5,300 ಕೋಟಿ ಅನುದಾನದ ನಿರೀಕ್ಷೆಯೊಂದಿಗೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಲು ಯೋಜನೆ ರೂಪಿಸಲಾಗಿದೆ. ಕೇಂದ್ರದಿಂದ ಎಷ್ಟರ ಮಟ್ಟಿಗೆ ಸಹಕಾರ ಸಿಗುತ್ತದೆಯೋ ಅದರ ಆಧಾರದ ಮೇಲೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.
ಭದ್ರಾ ಯೋಜನೆಯಡಿ 367 ಕೆರೆಗಳನ್ನು ತುಂಬಿಸುವ ಕೆಲಸಕ್ಕೆ ಆದ್ಯತೆ ನೀಡಿದೆ. ಚಿತ್ರದುರ್ಗ ಜಿಲ್ಲೆಯ ಗೋನೂರು ಕೆರೆವರೆಗಿನ ಅಕ್ವಾಡಕ್ಟ್ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಮುಂದಿನ ಮಳೆಗಾಲದ ವೇಳೆಗೆ ಚಳ್ಳಕೆರೆ, ಪಾವಗಡ, ಜಗಳೂರು ಹಾಗೂ ಮೊಳಕಾಲ್ಮೂರು ಭಾಗದ ಕೆರೆಗಳಿಗೆ ನೀರು ಹರಿಸುವ ಕೆಲಸ ನಡೆಯಲಿದೆ ಎಂದು ಭರವಸೆ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ಕಡೂರು, ತರೀಕೆರೆ, ಅಜ್ಜಂಪುರ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಳ್ಳಕೆರೆ, ಜಗಳೂರು ಪಾವಗಡ, ಶಿರಾ, ಸೇರಿದಂತೆ ಹಲವು ತಾಲೂಕುಗಳ ಜನರಿಗೆ ಅನುಕೂಲವಾಗಲಿದೆ. ಈ ಸುದೀರ್ಘ ಹೋರಾಟದಲ್ಲಿ ಭಾಗಿಯಾದ ರೈತರು, ಹೋರಾಟಗಾರರು, ಸ್ವಾಮೀಜಿಗಳು ಹಾಗೂ ಪತ್ರಕರ್ತರಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.
ಇದನ್ನೂ ಓದಿ: ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಯಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಅಹ್ವಾನ
ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರ ಆದ್ಯತೆ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಸಚಿವ ಟಿ.ರಘುಮೂರ್ತಿ, ಹಿಂದಿನ ಸಚಿವರು ಹಾಗೂ ಹಿರಿಯೂರು ಕ್ಷೇತ್ರದ ಮಾಜಿ ಶಾಸಕರಾದ ಡಿ.ಸುಧಾಕರ್ ಅವರು ಬಾಕಿ ಉಳಿಸಿದ್ದ ಅಭಿವೃದ್ಧಿ ಕೆಲಸಗಳನ್ನು ಹಾಗೂ ಸರ್ಕಾರದ ಮಟ್ಟದಲ್ಲಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು. ಜಿಲ್ಲೆಯ ಆರೂ ತಾಲೂಕುಗಳಲ್ಲಿ ಪ್ರವಾಸ ಕೈಗೊಂಡು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

