
CHITRADURGA NEWS | 15 AUGUST 2024
ಚಿತ್ರದುರ್ಗ: ಬೆಳೆ ಸಮೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪೂರ್ವ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 1,30,694 ರೈತರ ತಾಕುಗಳ ಪೈಕಿ 1,28,375 ತಾಕುಗಳ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆ. 2023 ರ ಮುಂಗಾರು ಹಂಗಾಮಿನಲ್ಲಿ 81501 ರೈತರು ರೂ.284.22 ಕೋಟಿ ಬೆಳೆ ವಿಮೆ ಪಡೆದಿದ್ದಾರೆ ಎಂದರು.
2024 ರ ಮುಂಗಾರು ಹಂಗಾಮಿನಲ್ಲಿ 1,12,101 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು, ಜಿಲ್ಲೆಯು ರಾಜ್ಯದಲ್ಲಿ 8ನೇ ಸ್ಥಾನದಲ್ಲಿರುತ್ತದೆ. 2023 ರ ಮುಂಗಾರು ಹಂಗಾಮಿನಲ್ಲಿ 1,44,166 ರೈತರಿಗೆ ರೂ. 125.75 ಕೋಟಿಗಳನ್ನು ಪಾರದರ್ಶಕವಾಗಿ ಫ್ರೂಟ್ಸ್, ಪರಿಹಾರ್ ತಂತ್ರಾಂಶಗಳ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಿರುವುದು ನಮ್ಮ ಸರ್ಕಾರದ ಹೆಮ್ಮೆಯಾಗಿರುತ್ತದೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: ಬೆಂಗಳೂರಿನ ಒಡಲು ಸೇರಲಿದೆ ವಾಣಿ ವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಡಿ.ಸುಧಾಕರ್
ರಾಜ್ಯದ ಸಮಗ್ರ ಅಭಿವೃದ್ಧಿ, ಅದರಲ್ಲೂ ಗ್ರಾಮೀಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರ ಇತ್ತೀಚಿಗೆ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದು ತಿಳಿಸಿದರು.
ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಮಾಶಾಸನ ನೀಡುತ್ತಿರುವುದಲ್ಲದೇ, ಮಾತೃಪೂರ್ಣ ಯೋಜನೆ, ಪೋಷಣ್ ಅಭಿಯಾನ ಯೋಜನೆ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಸ್ತ್ರೀಶಕ್ತಿ ಯೋಜನೆ, ಭಾಗ್ಯಲಕ್ಷ್ಮೀ ಯೋಜನೆ- ಸುಕನ್ಯಾ ಸಮೃದ್ಧಿ ಯೋಜನೆ, ಸ್ವಾಧಾರ ಶಕ್ತಿಸದನ ಯೋಜನೆ, ಸಾಂತ್ವಾನ ಯೋಜನೆಗಳ ಮುಖಾಂತರ ಮಹಿಳೆಯರು, ಆರ್ಥಿಕ ದುರ್ಬಲರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗೆ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ಕ್ಲಿಕ್ ಮಾಡಿ ಓದಿ: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ
ಜಿಲ್ಲೆಯಲ್ಲಿ ಕೃಷಿ, ನೀರಾವರಿ, ಶಿಕ್ಷಣ, ಸಾರಿಗೆ-ಸಂಪರ್ಕ,ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ, ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರು, ಮಹಿಳೆಯರು, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಆಕರ್ಷಕ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ: ನಾಗರಿಕ ಪೊಲೀಸ್, ಸಶಸ್ತ್ರ ಪೊಲೀಸ್, ಅರಣ್ಯ, ಗೃಹ ರಕ್ಷಕ ಎನ್ಸಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಹಲವು ಶಾಲಾ ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಡಿಎಆರ್ ಆರ್ಪಿಐ ಎಚ್.ಡಿ.ರುದ್ರೇಶ್ ಪರೇಡ್ ಕಮಾಂಡರ್ ಆಗಿ ಪಥ ಸಂಚಲನ ನೆರವೇರಿಸಿದರು. ಪೊಲೀಸ್ ವಾದ್ಯ ವೃಂದ ಕವಾಯತಿನಲ್ಲಿ ಸುಶ್ರಾವ್ಯವಾಗಿ ವಾದ್ಯ ನುಡಿಸಿದರು.
ಕ್ಲಿಕ್ ಮಾಡಿ ಓದಿ: ಡಿಎಆರ್ ಡಿವೈಎಸ್ಪಿ ಎಸ್.ಎಸ್.ಗಣೇಶ್ಗೆ ಮುಖ್ಯಮಂತ್ರಿ ಪದಕ
ಕೋಟೆ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಸಂಗೊಳ್ಳಿ ರಾಯಣ್ಣನ ಕುರಿತು ಹಾಗೂ ಪಿಳ್ಳೇಕೆರನಹಳ್ಳಿ ಬಾಪೂಜಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಸುರಪುರ ವೆಂಕಟಪ್ಪ ನಾಯಕ ಜೀವನ ವೃತ್ತಾಂತದ ನೃತ್ಯ ರೂಪಕ ಪ್ರದರ್ಶಿಸಿದರು. ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ವೈವಿಧ್ಯತೆ ಬಿಂಬಿಸುವ ನೃತ್ಯ ಪ್ರದರ್ಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸಿದ್ದರು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
