ತಾಲೂಕು
ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಇನ್ನೆರಡು ದಿನ ಬಾಕಿ | ಸಿಎಂ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

ಚಿತ್ರದುರ್ಗ ನ್ಯೂಸ್.ಕಾಂ: ಎರಡನೇ ಅವಧಿಗೆ ಮುಖ್ಯಮಂತ್ರಿಯಾದ ನಂತರ ಮೊಟ್ಟ ಮೊದಲ ಬಾರಿಗೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ.
ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗ ಜಿಲ್ಲೆಗೆ ಭೇಟಿ..
ಅಕ್ಟೋಬರ್ 6 ಶುಕ್ರವಾರ ಬೆಳಗ್ಗೆ ಚಿತ್ರದುರ್ಗ ಜಿಲ್ಲೆಗೆ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸುತ್ತಿದ್ದು, ಈ ವೇಳೆ ಹಲವು ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡುವ ಸಾಧ್ಯತೆ ಇದೆ.
ಹಿರಿಯೂರು ತಾಲೂಕಿನ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಸಂಶೋಧನಾ ಕೇಂದ್ರದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸುತ್ತಿದ್ದು, ಇದೇ ವೇಳೆ ಚಿತ್ರದುರ್ಗ ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಾಧ್ಯತೆಗಳೂ ಇವೆ. ಈ ಬಗ್ಗೆ ಅಧಿಕೃತವಾಗಿ ಮುಖ್ಯಮಂತ್ರಿಗಳ ಪ್ರವಾಸದ ಪಟ್ಟಿ ಬಿಡುಗಡೆಯಾಗಬೇಕಿದೆ.

ಬಬ್ಬೂರು ಕೆವಿಕೆ ಆವರಣದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದ ಪೆಂಡಾಲ್ ಸಿದ್ಧತೆ
ಸದ್ಯ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅ.3 ರಂದು ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಹಲವು ಸಭೆಗಳಲ್ಲಿ ಭಾಗವಹಿಸಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಬಬ್ಬೂರು ರಸ್ತೆಗೆ ಡಾಂಬರೀಕರಣ ಕಾಮಗಾರಿಗೆ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ಸಿದ್ದರಾಮಯ್ಯ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರಕ್ಕೆ ತೆರಳುವ ಹಿನ್ನೆಲೆಯಲ್ಲಿ ಹಿರಿಯೂರು-ಬಬ್ಬೂರಿನ ನಡುವೆ ಇರುವ ರಸ್ತೆಗೆ ಡಾಂಬಾರ್ ಹಾಕುವುದು ಸೇರಿದಂತೆ ಹಲವು ಕಾರ್ಯಕ್ರಮಗಳು ಭರದಿಂದ ಸಾಗುತ್ತಿವೆ.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ನಡೆಯುವ ಶತಮಾನೋತ್ಸವ ಕಾರ್ಯಕ್ರಮಕ್ಕೆ ವೇದಿಕೆ ಕೂಡಾ ಸಿದ್ಧವಾಗುತ್ತಿದ್ದು, ಹಿರಿಯೂರು ಶಾಸಕರು, ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಡಿ.ಸುಧಾಕರ್ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
