CHITRADURGA NEWS | 26 SEPTEMBER 2026
ಚಿತ್ರದುರ್ಗ: ಎಸ್ಐಆರ್ ಮೂಲಕ ಅರ್ಹ ಮತದಾರರನ್ನು ಮತಪಟ್ಟಿಯಿಂದ ಕೈಬಿಡುತ್ತಿರುವುದನ್ನು ಖಂಡಿಸಿ ಹಾಗೂ ಮತದಾನದ ಹಕ್ಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.28ರಂದು ಬೆಳಿಗ್ಗೆ 11 ಗಂಟೆಗೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ವಕ್ತಾರ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ತಿಳಿಸಿದರು.
ಇದನ್ನೂ ಓದಿ: ಕೆಎಸ್ಒಯು ಪ್ರವೇಶಾತಿ | ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಆರ್ ಮೂಲಕ ಬಿಜೆಪಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸುತ್ತಿದೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಇಡಿ, ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ದೂರಿದ ಅವರು, ಈ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ ಎಂದರು.
ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ಕುಮಾರ್ ಅವರನ್ನು ಪದಚ್ಯುತಿಗೊಳಿಸುವವರೆಗೆ ಹೋರಾಟ ಮುಂದುವರಿಯಲಿದೆ. ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ಈ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಪ್ರತಿಭಟನೆಯ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಮಾತನಾಡಿ, ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದೆ. ಆದರೆ ಎಸ್ಐಆರ್ ಮೂಲಕ ಅರ್ಹ ಮತದಾರರು ತಮ್ಮ ಹೆಸರು ಮತಪಟ್ಟಿಯಲ್ಲಿ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
ಫಾರಂ ನಂ.7ರಲ್ಲಿ ಸಹಿ ಇಲ್ಲದೆ ಅರ್ಜಿಗಳನ್ನು ಸಲ್ಲಿಸಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ದೂರಿದ ಅವರು, ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗದಂತೆ ಜಾಗೃತಿ ಮೂಡಿಸುವುದಕ್ಕಾಗಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದರು.
ಸೆ.28ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಅಂಬೇಡ್ಕರ್ ವೃತ್ತದ ಮೂಲಕ ಒನಕೆ ಓಬವ್ವ ವೃತ್ತಕ್ಕೆ ತಲುಪಲಿದೆ. ಎಲ್ಲಾ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಹಾಗೂ ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಪರವಾಗಿರುವವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಚುನಾವಣಾ ಆಯೋಗದ ಮುಖ್ಯ ಆಯುಕ್ತರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಆಗ್ರಹಿಸಿದರು.
ಕಂಠೀರವ ಸ್ಟುಡಿಯೋ ಅಧ್ಯಕ್ಷ ಮೆಹಬೂಬ್ಪಾಷ ಮಾತನಾಡಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಹೇಳಿದರು.
ಇದನ್ನೂ ಓದಿ: ಜೈನ್, ಬೌದ್ಧ, ಸಿಖ್ ಧಾರ್ಮಿಕ ಸೇವಕರಿಗೆ ಮಾಸಿಕ ಗೌರವಧನ | ಅರ್ಜಿ ಆಹ್ವಾನ
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ಕುಮಾರ್, ಡಿ.ಎನ್. ಮೈಲಾರಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು. ಲಕ್ಷ್ಮಿಕಾಂತ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ, ಸುರೇಶ್ನಾಯ್ಕ, ಹೆಚ್. ಅಂಜಿನಪ್ಪ ಹಾಗೂ ಮುದಾಸಿರ್ ನವಾಜ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

