ಮುಖ್ಯ ಸುದ್ದಿ
ಕುಡಿಯುವ ನೀರಿನ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಶಿಸ್ತುಕ್ರಮ | ಸಚಿವ ಡಿ.ಸುಧಾಕರ್ ಎಚ್ಚರಿಕೆ
CHITRADURGA NEWS | 20 FEBRUARY 2024
ಚಿತ್ರದುರ್ಗ: ಬೇಸಿಗೆ ಹತ್ತಿರವಾದಂತೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಆನ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವಲ್ಲಿ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬರಪರಿಹಾರ ಕಾರ್ಯಕ್ರಮಗಳ ಪ್ರಗತಿ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದನ್ನೂ ಓದಿ: ಫೆಬ್ರವರಿ 20 ರಿಂದ 1 ತಿಂಗಳ ಕಾಲ ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನೀರು
ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗುವ ಸಂಭವವಿದೆ ಹಾಗಾಗಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಕುಡಿಯುವ ನೀರು ಸಮಸ್ಯೆಗೆ ಸ್ಪಂದಿಸದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಒ, ತಾಲ್ಲೂಕು ಪಂಚಾಯಿತಿ ಇಒ ಹಾಗೂ ತಹಶೀಲ್ದಾರ್‍ಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು ತಕ್ಷಣವೇ ಸಮಸ್ಯೆ ಬಗೆಹರಿಸಲು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಗಂಭೀರವಾದರೆ ತಕ್ಷಣವೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿ 367 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳನ್ನಾಗಿ ಗುರುತಿಸಲಾಗಿದೆ, ಈ ಸಂಖ್ಯೆ ದಿನದಿಂದ ದಿನಕ್ಕೆ ಪರಿಷ್ಕøತಗೊಳ್ಳುತ್ತಿದೆ. ಬರನಿರ್ವಹಣೆಗೆ ಸಂಬಂಧಪಟ್ಟಂತೆ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗಿದ್ದು, ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿ ಸಭೆ ನಡೆಸಿ, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಸಭೆಯ ನಡಾವಳಿಯನ್ನು ಜಿಲ್ಲಾ ಮಟ್ಟಕ್ಕೆ ಸಲ್ಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಸರ್ಕಾರಿ ಮೆಡಿಕಲ್ ಕಾಲೇಜಿಗೆ 500 ಕೋಟಿ ರೂ. ಕೊಟ್ಟಿದ್ದು ಬೊಮ್ಮಾಯಿ ಬಜೆಟ್‍ನಲ್ಲಿ
ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿಗಳಿಗಾಗಿ ಈಗಾಗಲೇ ಜಿಲ್ಲೆಯ ಆರು ತಾಲ್ಲೂಕುಗಳಿಗೂ ರೂ.40 ಲಕ್ಷ ಅನುದಾನ ಒದಗಿಸಲಾಗಿದೆ. ಇದರ ಜೊತೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದಲೂ ಪ್ರತಿ ತಾಲ್ಲೂಕಿಗೂ ರೂ.25 ಲಕ್ಷ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ.9 ಕೋಟಿ ಹಣವಿದೆ.
ಬೋರ್‍ವೆಲ್‍ಗಳಲ್ಲಿ ಇಳುವರಿ ಕಡಿಮೆಯಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಟೆಂಡರ್ ಕರೆಯಲಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಸಂಬಂಧಪಟ್ಟಂತೆ ಅನುದಾನದ ಕೊರತೆ ಇಲ್ಲ ಎಂದು ತಿಳಿಸಿದರು.
ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ವಿಪತ್ತು ಪರಿಹಾರ ನಿಧಿಯನ್ನು ಪಂಚಾಯತಿಗಳಿಗೆ ನೇರವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಪಿಡಿಒಗಳು ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ನೀರಿನ ಸಮಸ್ಯೆ ಗಂಭೀರವಾದರೆ ಟ್ಯಾಂಕರ್ ನೀರು ಕೊಡಬೇಕು. ನಂತರ ಕುಡಿಯುವ ನೀರಿನ ಮೊತ್ತ ಪಾವತಿಗೆ ತಹಶೀಲ್ದಾರ್ ಅಧ್ಯಕ್ಷತೆಯ ಸಮಿತಿಗೆ ನಿಯಮಾನುಸಾರ ಬಿಲ್ ಸಲ್ಲಿಸಿದಲ್ಲಿ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವುದು ಹೇಗೆ ಗೊತ್ತಾ
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ತಹಶೀಲ್ದಾರ್‍ಗಳು, ತಾಲ್ಲೂಕು ಪಂಚಾಯಿತಿ ಇಒಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಗ್ರಾಮ ಪಂಚಾಯಿತಿ ಪಿಡಿಒಗಳು ನಮ್ಮ ಬಳಿ ಅನುದಾನವಿಲ್ಲ ಎಂದು ಸಬೂಬು ಹೇಳುವಂತಿಲ್ಲ. ಈ ರೀತಿಯ ಸಬೂಬು ಹೇಳಿ ನೀರಿನ ಸಮಸ್ಯೆಯನ್ನು ಪರಿಹರಿಸದ ಪಿಡಿಒಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
| ವೆಂಕಟೇಶ್.ಟಿ, ಜಿಲ್ಲಾಧಿಕಾರಿಗಳು.