ಮುಖ್ಯ ಸುದ್ದಿ
ಮುರುಘಾ ಮಠದ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವ ಎಚ್.ಏಕಾಂತಯ್ಯ
ಚಿತ್ರದುರ್ಗ ನ್ಯೂಸ್.ಕಾಂ: ಐತಿಹಾಸಿಕ ಮುರುಘಾ ಮಠದಲ್ಲಿ ಇಂದಿನಿಂದ ಶರಣ ಸಂಸ್ಕøತಿ ಉತ್ಸವಕ್ಕೆ ಸಜ್ಜಾಗುತ್ತಿರುವಾಗಲೇ, ಮಠದ ಆಡಳಿತ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅ.19 ರಂದು ಎಚ್.ಏಕಾಂತಯ್ಯ ಅವರ ವಿಶೇಷ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್‍ನಾಥ್ ಹಾಗೂ ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಚಾರಣೆಗೆ ಅಂಗೀಕರಿಸಿದೆ. ಈ ಸಂಬಂಧ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಾಗುತ್ತಿದ್ದಂತೆ, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅಡಿಯಲ್ಲಿ ಮಠ ಹಾಗೂ ವಿದ್ಯಾ ಸಂಸ್ಥೆಗಳಲ್ಲಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಮತ್ತೊಂದು ಪ್ರಕರಣ ದಾಖಲಿಸಲಾಗಿತ್ತು. ಸದರಿ ಪ್ರಕರಣದ ವಿಚಾರಣೆ ನಡೆಸಿದ್ದ ಚಿತ್ರದುರ್ಗ ಸೆಷನ್ಸ್ ಕೋರ್ಟ್ ಮುರುಘಾ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿತ್ತು.
ಇದನ್ನೂ ಓದಿ: ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೋ ಕೇಸ್; ಮಂಜೂರಾಯ್ತು ಜಾಮೀನು
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿತ್ತು.
ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಹಾಗೂ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಮುರುಘಾ ಮಠದ ಉಸ್ತುವಾರಿಗಳಾಗಿರುವ ಶ್ರೀ ಬಸವಪ್ರಭು ಸ್ವಾಮೀಜಿ ಹಾಗು ಭಕ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿದ್ದ ಹೈಕೋರ್ಟ್ ಮಠ ಮಾನ್ಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು ಎಂದು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿ, ಸರ್ಕಾರದ ನಿರ್ಧಾರವನ್ನು ಖಂಡಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮೇ 22 ರಂದು ರದ್ದುಪಡಿಸಿತ್ತು. ಮುರುಘಾ ಶರಣರ ಅಧಿಕಾರ ಚಲಾವಣೆಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಆದೇಶವನ್ನೂ ಇದೇ ವೇಳೆ ವಜಾಗೊಳಿಸಲಾಗಿತ್ತು.
ಈಗ ಇದೇ ವಿಚಾರವನ್ನು ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡಿದ್ದು, ಮುಂದೇನಾಗಲಿದೆ ಎನ್ನುವ ಕುತೂಹಲ ಮನೆ ಮಾಡಿದೆ.