CHITRADURGA NEWS | 27 SEPTEMBER 2206
ಚಿತ್ರದುರ್ಗ: ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಿಂದಾಗಿ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಪ್ರತಿಯೊಬ್ಬರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮಾರುತಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್.ಬಿ. ರಾಜಪ್ಪ ಕೆಂಗುಂಟೆ ಹೇಳಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವ | ಅಕ್ಟೋಬರ್ 1ಕ್ಕೆ ಬೃಹತ್ ಬೈಕ್ ರ್ಯಾಲಿ | 3ಕ್ಕೆ ಶೋಭಾಯಾತ್ರೆ
ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆಯ ಶಿವಾಂಜನೇಯ ರಂಗಮಂಟಪದಲ್ಲಿ ಮಾರುತಿ ನಿವೃತ್ತ ನೌಕರರ ಸಂಘ ಹಾಗೂ ಶಿವಮೊಗ್ಗದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಬದಲಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಿಂದ ರಕ್ತದೊತ್ತಡ, ಮಧುಮೇಹ, ಹೃದಯ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲಿಯೂ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು.
ಗ್ರಾಮೀಣ ಭಾಗದ ಜನರು ದೊಡ್ಡ ನಗರಗಳಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟವಾಗಿರುವ ಹಿನ್ನೆಲೆಯಲ್ಲಿ ಕೆಂಗುಂಟೆಯಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿರುವುದು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗಿದೆ. ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹3 ಕೋಟಿ ಅನುದಾನಕ್ಕೆ ಮನವಿ
ಶಿಬಿರದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನುರಿತ ವೈದ್ಯರಾದ ರಶ್ಮಿ, ಸ್ನೇಹ, ಹರೀಶ್ ಹಾಗೂ ತಂಡದವರು ಮಧುಮೇಹ, ಹೃದಯ, ಕೀಲು ಮತ್ತು ಮೂಳೆ, ಕಿವಿ-ಮೂಗು-ಗಂಟಲು, ನೇತ್ರ, ಥೈರಾಯ್ಡ್ ಹಾಗೂ ಉಸಿರಾಟದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಿ, ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ರೋಟರಿ ಕ್ಲಬ್ ಹೊಳಲ್ಕೆರೆ ಅಧ್ಯಕ್ಷ ನಟರಾಜ್ ಬಿ., ಕಾರ್ಯದರ್ಶಿ ರೊ. ಹೆಚ್.ಸಿ. ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ರೊ. ಸುದರ್ಶನ್ ಕುಮಾರ್ ಹೆಚ್.ಪಿ., ರೊ. ಪ್ರಕಾಶ್ ಬಿ., ಮಾರುತಿ ನಿವೃತ್ತ ನೌಕರರ ಸಂಘದ ಗೌರವಾಧ್ಯಕ್ಷ ಎನ್.ಸಿ.ಎನ್. ರಾಜು, ಕಾರ್ಯದರ್ಶಿ ಡಾ. ರವಿ ಎಸ್.ಪಿ. ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

