CHITRADURGA NEWS | 10 SEPTEMBER 2026
ಚಿತ್ರದುರ್ಗ: ಮುಂಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಮೆರವಣಿಗೆಗಳ ವೇಳೆ ಕಾನೂನು ಪಾಲನೆ ಕಡ್ಡಾಯವಾಗಿದ್ದು, ಆಯೋಜಕರು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ರಾಸಾಯನಿಕ ಬಣ್ಣ ಹಾಗೂ ಪ್ಲ್ಯಾಸ್ಟರ್ ಆಫ್ ಪ್ಯಾರಿಸ್ ಮುಕ್ತ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಬಳಸಲು ಜಾಗೃತಿ ಮೂಡಿಸಬೇಕು ಎಂದರು.
ಕೇಂದ್ರಸ್ಥಾನದಲ್ಲಿ ಇರಲು ಸೂಚನೆ:
ಜನರ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಯು ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಜವಾಬ್ದಾರಿಯಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮಗಳ ಯಶಸ್ಸಿಗೆ ಗಂಭೀರವಾಗಿ ಶ್ರಮಿಸಬೇಕು. ಸಣ್ಣ ಪುಟ್ಟ ಲೋಪದೋಷಗಳಿಗೂ ಆಸ್ಪದ ನೀಡದೆ ಪರಿಶೀಲನಾ ಪಟ್ಟಿ ಆಧಾರದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಬೇಕು.
ಇದನ್ನೂ ಓದಿ: ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಗಣೇಶ ವಿಸರ್ಜನೆ ಹಾಗೂ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ನಗರಸಭೆ ಕಮಿಷನರ್, ತಹಶೀಲ್ದಾರ್, ಎಸಿ, ವೈದ್ಯಾಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ. ತುರ್ತು ಸಂದರ್ಭ ಎದುರಾದರೆ ಮೇಲಾಧಿಕಾರಿಗಳ ಹಂತದಲ್ಲಿ ಸಾಕು ಎನ್ನದೆ, ನೇರವಾಗಿ ಜಿಲ್ಲಾಧಿಕಾರಿಗಳಿಂದಲೇ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಗಣೇಶೋತ್ಸವ – ಬಿಗಿ ಪೊಲೀಸ್ ಬಂದೋಬಸ್ತ್ :
ಜಿಲ್ಲಾದ್ಯಂತ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನೆರವೇರಿಸಲು ಪೊಲೀಸ್ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,783 ಕಡೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. 3ನೇ ದಿನದಂದು ಸುಮಾರು 927, 5ನೇ ದಿನದಂದು 453 ಗಣಪತಿ ಮೂರ್ತಿಗಳ ವಿಸರ್ಜನೆ ಮೆರವಣಿಗೆಗಳು ನಡೆಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು ಸಭೆಯಲ್ಲಿ ತಿಳಿಸಿದರು.
ನಗರದ ಹಿಂದೂ ಮಹಾಗಣಪತಿ ಅತಿ ದೊಡ್ಡ ಹಾಗೂ ಅತಿ ಸೂಕ್ಷ್ಮ ಮೆರವಣಿಗೆಯಾಗಿದ್ದು, ಶೋಭಾಯಾತ್ರೆ ಅಕ್ಟೋಬರ್ 3 ರಂದು ನಿಗದಿಯಾಗಿದೆ. ಸುಮಾರು 3.5 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದು ರಾಜ್ಯದಲ್ಲೇ ಅತಿ ದೊಡ್ಡ ಹಾಗೂ ದೇಶದಲ್ಲೇ ಎರಡನೇ ಜನಸಂದಣಿಯ ಮೆರವಣಿಯಾಗಿದೆ. ಇದರ ಜೊತೆಗೆ ಜಿಲ್ಲೆಯ 6 ಕಡೆ ಹಿಂದು ಮಹಾಗಣಪತಿ ವಿಸರ್ಜನೆ ಮೆರವಣಿಗೆ ನಡೆಯಲಿದೆ. 5000 ಕ್ಕೂ ಹೆಚ್ಚು ಜನ ಸೇರುವ ಎಲ್ಲಾ ಮೆರವಣಿಗೆಗಳನ್ನೂ ಸೂಕ್ಷ್ಮ ಎಂದು ಪರಿಗಣಿಸಿ ಸೂಕ್ತ ಬಂದೋಬಸ್ತ್ ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರ ಭದ್ರತೆಗೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
ಶೋಭಾ ಯಾತ್ರ ನಗರದ ಮರುಘರಾಜೇಂದ್ರ ಕ್ರೀಡಾಂಗಣದಿಂದ ಪ್ರಾರಂಭಗೊಂಡು ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಮದಕರಿ ಹಾಗೂ ನೆಹರೂ ವೃತ್ತದಂತಹ ಪ್ರಮುಖ ಜಂಕ್ಷನ್‍ಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗುವುದು. ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಮಸೀದಿಗಳ ಮುಂಭಾಗ ಸೂಕ್ತ ಭದ್ರತಾ ಹಾಗೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ. ಗಣೇಶೋತ್ಸವ ಬಂದೋಬಸ್ತ್ ಕಾರ್ಯವು ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ, ಇದಕ್ಕಾಗಿ ಜಿಲ್ಲೆಯ ಎಲ್ಲಾ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಹಿಂದೂ ಮಹಾಗಣಪತಿ ಶೋಭಾಯಾತ್ರೆಯನ್ನು ವಿಪತ್ತು ನಿರ್ವಹಣೆ ಮಾದರಿಯಲ್ಲಿ ಕೈಗೊಳ್ಳಲು ಅನುಮತಿ ಕೋರಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.
ಮಾರ್ಗಸೂಚಿಗಳ ಪಾಲನೆ ಕಡ್ಡಾಯ
ಜನಸಂದಣಿ ಹಾಗೂ ಕಾಲ್ತುಳಿತ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ನೂತನ ಪ್ರಮಾಣಿತ ಕಾರ್ಯಾಚರಣೆ ವಿಧಾನ ಮತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಗಣೇಶೋತ್ಸವ ಹಾಗೂ ಶೋಭಾಯಾತ್ರೆ ಆಯೋಜಕರು ಕಡ್ಡಾಯವಾಗಿ ಇವುಗಳನ್ನು ಪಾಲನೆ ಮಾಡಬೆಕು. ಸಂಬಂಧ ಪಟ್ಟ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆಯಬೇಕು.
ಫ್ಲೆಕ್ಸ್ ಹಾಗೂ ಬ್ಯಾನರ್ ಅಳವಡಿಕೆ ಮಾರ್ಗಸೂಚಿ:
ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಮತ್ತು ಕಟೌಟ್‍ಗಳನ್ನು ಅಳವಡಿಸುವುದಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಬಿಗಿಯಾದ ಮಾರ್ಗಸೂಚಿಗಳನ್ನು ಹೊರಡಿಸುವ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ತಿಳಿಸಿದರು.
ಇದನ್ನೂ ಓದಿ: ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ
ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಕೆಗೆ ಅನುಮತಿ ನೀಡುವಾಗ ‘ಎಲ್ಲಿ ಅಳವಡಿಸಬೇಕು, ಎಷ್ಟು ಪ್ರಮಾಣದಲ್ಲಿರಬೇಕು ಹಾಗೂ ಎಷ್ಟು ದಿನಗಳ ಕಾಲ ಇರಬೇಕು’ ಎಂಬುದರ ಕುರಿತು ಸ್ಪಷ್ಟ ಮತ್ತು ಕಟ್ಟುನಿಟ್ಟಾದ ಆದೇಶ ಹೊರಡಿಸಬೇಕು. ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳು, ಸರ್ಕಾರಿ ಕಚೇರಿಗಳ ಆವರಣ ಹಾಗೂ ಗೊಂದಲಗಳಿಗೆ ಕಾರಣವಾಗುವ ಸ್ಥಳಗಳಲ್ಲಿ ಫ್ಲೆಕ್ಸ್ ಅಳವಡಿಸುವುದನ್ನು ನಿಯಂತ್ರಿಸಬೇಕು. ಫ್ಲೆಕ್ಸ್ ಹಾಗೂ ಬ್ಯಾನರ್ ಮುದ್ರಣ ಮಾಡುವವರ (ಪ್ರಿಂಟಿಂಗ್ ಪ್ರೆಸ್) ಮಾಹಿತಿ ಹಾಗೂ ಅನುಮತಿ ಸಂಖ್ಯೆಯನ್ನು ಫ್ಲೆಕ್ಸ್ ಮೇಲೆ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಬೇಕು.
ನಿಗದಿತ ಸಮಯ ಮುಗಿದ ತಕ್ಷಣ ಸಂಬಂಧಪಟ್ಟವರೇ ಅದನ್ನು ತೆರವುಗೊಳಿಸಬೇಕು, ಇಲ್ಲವೇ ನಗರಾಡಳಿತ ಕ್ರಮ ಕೈಗೊಳ್ಳಬೇಕು. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ನಗರದಲ್ಲಿ ಅನೇಕ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಮನಬಂದಂತೆ ಬ್ಯಾನರ್ ಹಾಕುತ್ತಾರೆ. ಇದು ಸ್ಥಳೀಯವಾಗಿ ಅನಗತ್ಯ ಗೊಂದಲ ಹಾಗೂ ಕಾನೂನು ಸುವ್ಯವಸ್ಥೆ ಸಮಸ್ಯೆಗೆ ದಾರಿಯಾಗುತ್ತದೆ. ಸ್ಥಳೀಯ ನಗರಾಡಳಿತ ಸಂಸ್ಥೆಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಇದನ್ನೂ ಓದಿ: ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್ ರವಿಶಂಕರ್ ಉತ್ತರ ಏನು ?
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕಾಂತರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಸಿ.ಸುನೀಲ್ ಕುಮಾರ್, ನಗರಸಭೆ ಆಯುಕ್ತೆ ಲಕ್ಷ್ಮಿ, ಪರಿಸರಾಧಿಕಾರಿ ಪಲ್ಲವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

