CHITRADURGA NEWS | 17 November 2026
ಚಿತ್ರದುರ್ಗ: ತಾಯಿ ಮತ್ತು ಮಗುವಿನ ಉತ್ತಮ ಆರೋಗ್ಯಕ್ಕಾಗಿ ಸಹಜ ಹೆರಿಗೆಯ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಡಿ.ಎಂ. ಅಭಿನವ್ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಇಲಾಖೆ, ಸೇಂಟ್ ಜಾನ್ಸ್, ಕೆಎಚ್ಪಿಟಿ ಹಾಗೂ ಐಸಿಎಂಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೂರನೇ ಕೋ-ಡಿಸೈನ್ ವರ್ಕ್ಶಾಪ್ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಿಸೇರಿಯನ್ ಹೆರಿಗೆಗಳ ಪ್ರಮಾಣ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.79 ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.58ರಷ್ಟು ಸಿಸೇರಿಯನ್ ಹೆರಿಗೆಗಳು ದಾಖಲಾಗುತ್ತಿವೆ. ಸಹಜ ಹೆರಿಗೆಯಿಂದ ಮಗುವಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ಉಸಿರಾಟದ ತೊಂದರೆಗಳು ನಿವಾರಣೆಯಾಗುತ್ತವೆ. ಈ ಕುರಿತು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ಸೇವಾ ಸಂಸ್ಥೆಗಳು ಗರ್ಭಿಣಿಯರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಡಳಿತ, ವೈದ್ಯರು ಹಾಗೂ ಸಿಬ್ಬಂದಿಯ ಸಂಘಟಿತ ಪ್ರಯತ್ನದಿಂದಾಗಿ ಆರೋಗ್ಯ ಕ್ಷೇತ್ರದ ಹಲವು ಸೂಚ್ಯಂಕಗಳಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ನವಜಾತ ಶಿಶುಗಳ ಆರೈಕೆ ಕೇಂದ್ರದ ಯಶಸ್ವಿ ಚಿಕಿತ್ಸೆ ಮತ್ತು ಬಿಡುಗಡೆ ಪ್ರಮಾಣದಲ್ಲಿ ಜಿಲ್ಲೆ ರಾಜ್ಯಕ್ಕೆ 3ನೇ ಸ್ಥಾನ ಪಡೆದಿದೆ. ಅಲ್ಲದೆ, ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರ ದಾಖಲಾತಿ, ಗರ್ಭಿಣಿಯರ ಆರಂಭಿಕ ನೋಂದಣಿ ಹಾಗೂ ಎಚ್ಆರ್ಪಿ ಗುರುತಿಸುವಿಕೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ. ಶಿಶು ಮರಣ ಪ್ರಮಾಣವನ್ನು 9.23ಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಇದನ್ನೂ ಓದಿ: ಪರಿಶಿಷ್ಟ ಪಂಗಡದ ಯುವಕರಿಗೆ ಉಚಿತ ಸೋಲಾರ್ ತರಬೇತಿ | ಅರ್ಜಿ ಅಹ್ವಾನ
ಸರ್ಕಾರದ ಆರೋಗ್ಯ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಶೇ.80ರಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಉಳಿದ ಶೇ 20ರಷ್ಟು ಸವಾಲುಗಳನ್ನು ವೈದ್ಯರು ಮತ್ತು ಸಿಬ್ಬಂದಿ ತಮ್ಮ ಬುದ್ಧಿವಂತಿಕೆ ಹಾಗೂ ವೈಜ್ಞಾನಿಕ ದೃಷ್ಟಿಕೋನದಿಂದ ಬಗೆಹರಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಅಧೀಕ್ಷಕಿ ಡಾ.ಮೇಘನಾ, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ್, ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವಿಭಾಗದ ಮುಖ್ಯಸ್ಥರಾದ ಡಾ.ಸುಮನ್ ರಾವ್, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ನ ಹಿರಿಯ ವ್ಯವಸ್ಥಾಪಕ ಡಾ.ಅಯೇಷಾ ಹಾಗೂ ಜಿಲ್ಲೆಯ ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರ್ಬಿಎಸ್ಕೆ ವೈದ್ಯಾಧಿಕಾರಿಗಳು, ಐಸಿಎಂಆರ್ ಹಾಗೂ ಕೆಹೆಚ್ಪಿಟಿ ಸಿಬ್ಬಂದಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

