
CHITRADURGA NEWS | 27 AUGUST 2026
ಚಿತ್ರದುರ್ಗ: ಜಿಲ್ಲೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಚಿತ್ರದುರ್ಗ ನಗರ ಹಾಗೂ ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ನಿರ್ಮಾಣ ಕಾಮಗಾರಿಗೆ ಆಗಸ್ಟ್ 30 ಭಾನುವಾರ ಭೂಮಿಪೂಜೆ ನೆರವೇರಲಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
ಇದನ್ನೂ ಓದಿ: ಕಸಾಪ ಅಧ್ಯಕ್ಷ ಸ್ಥಾನಕ್ಕೆ ಜಾಣಗೆರೆ ವೆಂಕಟರಾಮಯ್ಯ ಸ್ಪರ್ಧೆ
ಚಿತ್ರದುರ್ಗ ನಗರದಿಂದ ದಾವಣಗೆರೆಗೆ ತೆರಳುವ ಮಾರ್ಗದ ರೈಲ್ವೆ ಲೆವೆಲ್ ಕ್ರಾಸಿಂಗ್-22ರಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವಾಲಯದಿಂದ ₹32.51 ಕೋಟಿ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಬಳಿಯ ರೈಲ್ವೆ ಗೇಟ್-01ರಲ್ಲಿ ಮೇಲುಸೇತುವೆ ನಿರ್ಮಾಣಕ್ಕೆ ₹25.15 ಕೋಟಿ ಅನುದಾನ ಮಂಜೂರಾಗಿದೆ. ಎರಡೂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಸಂಸದರ ಸತತ ಪ್ರಯತ್ನದ ಫಲವಾಗಿ ಈ ಅನುದಾನ ದೊರೆತಿದ್ದು, ಭಾನುವಾರ (ಆ.30) ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ನಗರಕ್ಕೆ ಆಗಮಿಸಿ ಎರಡೂ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ಭಾನುವಾರ ಬೆಳಗ್ಗೆ 11.15ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸುವ ಸಚಿವರು, ರೈಲ್ವೆ ನಿಲ್ದಾಣದ ಬಳಿಯ ಮೇಲುಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮಧ್ಯಾಹ್ನ 2 ಗಂಟೆಗೆ ಚಿಕ್ಕಜಾಜೂರು ನಗರಕ್ಕೆ ಹೊಂದಿಕೊಂಡಿರುವ ರೈಲ್ವೆ ಮೇಲುಸೇತುವೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ: ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಇನ್ನು ಹಳಿಯೂರು ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್-15ರಲ್ಲಿ ಮೇಲುಸೇತುವೆ ನಿರ್ಮಾಣಕ್ಕೂ ಬಹುವರ್ಷಗಳ ಬೇಡಿಕೆಯಿದ್ದು, ಕಾಮಗಾರಿಗೆ ಭೂಸ್ವಾಧೀನದ ಅಗತ್ಯವಿದೆ. ಈ ಸಂಬಂಧದ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

