CHITRADURGA NEWS | 19 AUGUST 2026
ಚಿತ್ರದುರ್ಗ: ಭದ್ರಾ ಜಲಾಶಯದ ಕಾಡಾ (CADA) ವ್ಯಾಪ್ತಿಗೆ ಚಿತ್ರದುರ್ಗ ಜಿಲ್ಲೆಯನ್ನು ಕೂಡಲೇ ಸೇರ್ಪಡೆ ಮಾಡಬೇಕು ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
ಈ ಕುರಿತು ಹೇಳಿಕೆ ನೀಡಿರುವ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳನ್ನು ನೀರಾವರಿಗೆ ಒಳಪಡಿಸುವ ಉದ್ದೇಶದಿಂದ ಭದ್ರಾ ಮೇಲ್ದಂಡೆ ಯೋಜನೆ ರೂಪಿಸಲಾಗಿದೆ. ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳ 2,25,515 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ (ಡ್ರಿಪ್) ಸೌಲಭ್ಯ ಕಲ್ಪಿಸಲಾಗುತ್ತಿದ್ದು, 367 ಕೆರೆಗಳನ್ನು ಅರ್ಧದಷ್ಟು ತುಂಬಿಸುವ ಯೋಜನೆಯೂ ಇದೆ ಎಂದು ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿಎಂಸಿ ನೀರು ಹಂಚಿಕೆಯಾಗಿದ್ದು, ಡ್ರಿಪ್ ನೀರಾವರಿಗೆ 21.90 ಟಿಎಂಸಿ, ಕೆರೆಗಳ ತುಂಬಿಸುವಿಕೆಗೆ 6 ಟಿಎಂಸಿ ಹಾಗೂ ವಿವಿ ಸಾಗರ ಜಲಾಶಯಕ್ಕೆ 2 ಟಿಎಂಸಿ ನೀರು ನಿಗದಿಪಡಿಸಲಾಗಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಚಿತ್ರದುರ್ಗ ಜಿಲ್ಲೆ ಒಳಪಟ್ಟಿದ್ದರೂ ಕಾಡಾ ಸಮಿತಿ ಹಾಗೂ ನೀರಾವರಿ ಸಲಹಾ ಸಮಿತಿಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ರೈತ ಮುಖಂಡರಿಗೆ ಸೂಕ್ತ ಪ್ರಾತಿನಿಧ್ಯ ಇಲ್ಲದಿರುವುದು ಜಿಲ್ಲೆಯ ನೀರಿನ ಹಕ್ಕಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಭದ್ರಾ ಅಚ್ಚುಕಟ್ಟು ಪ್ರದೇಶ ಸುಮಾರು 1.05 ಲಕ್ಷ ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು, ಮುಂಗಾರು ಹಂಗಾಮಿನಲ್ಲಿ ಸುಮಾರು 34.62 ಟಿಎಂಸಿ ನೀರು ಅಗತ್ಯವಿದೆ. ದಾವಣಗೆರೆ ಭಾಗದ ರೈತರು ಕಾಲುವೆಗೆ ನೀರು ಹರಿಸುವಂತೆ ಕಾಡಾ ಮೇಲೆ ಒತ್ತಡ ತಂದ ಹಿನ್ನೆಲೆಯಲ್ಲಿ ಆ.18ರಂದು ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಸಚಿವರು, ಶಾಸಕರು ಮತ್ತು ರೈತ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ: ಮಕ್ಕಳಿಗೆ ಉಚಿತ ಲಸಿಕೆ ಸದುಪಯೋಗಪಡಿಸಿಕೊಳ್ಳಿ | ಮೂಗಪ್ಪ
ಸಭೆಯಲ್ಲಿ ಮುಂಗಾರು ಹಂಗಾಮಿಗೆ ಭದ್ರಾ ಜಲಾಶಯದಿಂದ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ 124 ದಿನ ನೀರು ಹರಿಸಲು 32.62 ಟಿಎಂಸಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ 12.40 ಟಿಎಂಸಿ ನೀರು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆದಿದೆ. ನೀರು ಬಿಡುಗಡೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದೆ, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ಅಂಗಳಕ್ಕೆ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಭದ್ರಾ ಜಲಾಶಯದಲ್ಲಿ ಚಿತ್ರದುರ್ಗ ಜಿಲ್ಲೆಯ ಪಾಲು ಇದ್ದರೂ ಕಾಡಾ ಹಾಗೂ ನೀರಾವರಿ ಸಲಹಾ ಸಮಿತಿ ಸಭೆಗಳಲ್ಲಿ ಜಿಲ್ಲೆಯ ಪರವಾಗಿ ರೈತರ ಹಿತ ಕಾಪಾಡಲು ಯಾರೂ ಇಲ್ಲದಂತಾಗಿದೆ. ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಗಮನ ಹರಿಸದಿರುವುದನ್ನು ಸಮಿತಿ ಖಂಡಿಸುತ್ತದೆ ಎಂದು ಲಿಂಗಾರೆಡ್ಡಿ ಹೇಳಿದ್ದಾರೆ.
ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೂ ಈ ವಿಚಾರವನ್ನು ತಂದು, ಕಾಡಾ ವ್ಯಾಪ್ತಿಗೆ ಚಿತ್ರದುರ್ಗ ಜಿಲ್ಲೆಯನ್ನು ಸೇರ್ಪಡೆ ಮಾಡುವಂತೆ ಮನವಿ ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಈಗಾಗಲೇ ವಿವಿ ಸಾಗರಕ್ಕೆ ನೀರು ಹರಿದುಬಂದಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಬಳಿ ಡ್ರಿಪ್ ಯೋಜನೆಯ ಪೈಲಟ್ ಯೋಜನೆ ಜಾರಿಗೊಳಿಸಿ ರೈತರಿಗೆ ನೀರು ಒದಗಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಕಾಡಾದಿಂದ ಹೊರಗಿಡುವುದು ಸೂಕ್ತವಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಜಿಟಿಟಿಸಿಯಲ್ಲಿ ಟೂಲ್ ರೂಮ್ ಮಷಿನಿಸ್ಟ್ ಕೋರ್ಸ್‌ಗೆ ಅರ್ಜಿ ಆಹ್ವಾನ
ಚಿತ್ರದುರ್ಗ ಜಿಲ್ಲೆಯಿಂದ ಸಚಿವ ಟಿ.ರಘುಮೂರ್ತಿ ಸೇರಿದಂತೆ ಐವರು ಶಾಸಕರು ಹಾಗೂ ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದು, ಇವರೆಲ್ಲರೂ ಕಾಡಾ ಸಮಿತಿ ವ್ಯಾಪ್ತಿಗೆ ಒಳಪಡಬೇಕು. ಇದರಿಂದ ನೀರಾವರಿ ಸಲಹಾ ಸಮಿತಿ ಸಭೆಗಳಲ್ಲಿ ಜಿಲ್ಲೆಯ ನೀರಿನ ಹಕ್ಕನ್ನು ಸಮರ್ಥವಾಗಿ ಪ್ರತಿಪಾದಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ವಾರದೊಳಗೆ ಭದ್ರಾ ನೀರು ಹರಿಸಲು ಆಗ್ರಹ
ರಾಜ್ಯ ಸರ್ಕಾರ ಕೂಡಲೇ ಭದ್ರಾ ಕಾಡಾ ವ್ಯಾಪ್ತಿಗೆ ಚಿತ್ರದುರ್ಗ ಜಿಲ್ಲೆಯನ್ನು ಸೇರ್ಪಡೆ ಮಾಡಬೇಕು. ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ವಾರದೊಳಗೆ ಭದ್ರಾ ನೀರು ಹರಿಸಿ ಹೊಳಲ್ಕೆರೆ ತಾಲೂಕಿನ ಎಲ್ಲ ಕೆರೆಗಳು ಹಾಗೂ ಗೋನೂರು ಕೆರೆಯವರೆಗೆ ನೀರು ಪೂರೈಸಬೇಕು ಎಂದು ಸಮಿತಿ ಒತ್ತಾಯಿಸಿದೆ.
ಇದನ್ನೂ ಓದಿ: ಮುರುಘಾಮಠ | ಅಕ್ಟೋಬರ್ 13ರಿಂದ 21ರವರೆಗೆ ಶರಣಸಂಸ್ಕೃತಿ ಉತ್ಸವ | ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನ
ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ಪ್ರಧಾನ ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಹಾಗೂ ಸಿಪಿಐನ ಜಿ.ಸುರೇಶ್ ಬಾಬು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

