
CHITRADURGA NEWS | 26 AUGUST 2026
ಚಿತ್ರದುರ್ಗ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಯಾವುದೇ ಒಂದು ರಾಜಕೀಯ ಪಕ್ಷದ ಮುಖವಾಣಿಯಾಗಬಾರದು. ಪರಿಷತ್ತಿನ ಘನತೆ, ಸ್ವಾಯತ್ತತೆ ಹಾಗೂ ಮೂಲ ಆಶಯಗಳನ್ನು ಉಳಿಸುವ ಉದ್ದೇಶದಿಂದ ಜಾಣಗೆರೆ ವೆಂಕಟರಾಮಯ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಡಲಾಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ಶೀತ, ಕೆಮ್ಮು, ಜ್ವರ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ
ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರ ಅಧಿಕಾರಾವಧಿಯಲ್ಲಿ ಪರಿಷತ್ತಿನ ಮೂಲ ಆಶಯಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿದರು. ಬೈಲಾ ತಿದ್ದುಪಡಿ ಮೂಲಕ ಅಧಿಕಾರಾವಧಿಯನ್ನು ಮೂರು ವರ್ಷದಿಂದ ಆರು ವರ್ಷಕ್ಕೆ ಹೆಚ್ಚಿಸಿಕೊಂಡಿರುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಅಕ್ರಮಗಳು ನಡೆದಿವೆ ಎಂದು ದೂರಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ದ್ವಾರದಲ್ಲಿದ್ದ ಕನ್ನಡದ ಕಮಾನು ತೆರವುಗೊಳಿಸಿರುವುದು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಯನ್ನು ಸ್ಥಳಾಂತರಿಸಿರುವುದು ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ಪರಿಷತ್ತಿನ ಭವಿಷ್ಯವನ್ನು ಉಳಿಸುವ ನಿಟ್ಟಿನಲ್ಲಿ ಜಾಣಗೆರೆ ವೆಂಕಟರಾಮಯ್ಯ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದರು.
ಅಭ್ಯರ್ಥಿ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, 2025ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಉಳಿಸುವ ಹೋರಾಟವನ್ನು ಕೈಗೆತ್ತಿಕೊಂಡಿದ್ದೆವು. ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ನಡೆದಿರುವ ಅಕ್ರಮ, ಅನ್ಯಾಯ ಹಾಗೂ ಹಣದ ದುರುಪಯೋಗದ ಆರೋಪಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿವೆ ಎಂದು ಹೇಳಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಗೋಪೂಜೆ, ಧ್ವಜಪೂಜೆ ಮೂಲಕ ಚಾಲನೆ
ಕನ್ನಡ ಸಾಹಿತ್ಯ ಪರಿಷತ್ತು ನಿವೃತ್ತ ಅಧಿಕಾರಿಗಳ ತಂಗುದಾಣವಾಗಬಾರದು. ಸಾಹಿತ್ಯ ಚಟುವಟಿಕೆಗಳು ಸ್ಥಗಿತಗೊಂಡಿರುವ ಪರಿಸ್ಥಿತಿಯನ್ನು ಬದಲಾಯಿಸಿ, ಪರಿಷತ್ತಿನಲ್ಲಿ ಪಾರದರ್ಶಕ ಆಡಳಿತ ಮತ್ತು ಸಕ್ರಿಯ ಸಾಹಿತ್ಯ ಚಟುವಟಿಕೆಗಳನ್ನು ರೂಪಿಸುವ ಅಗತ್ಯವಿದೆ ಎಂದರು.
ನವೆಂಬರ್‌ನಲ್ಲಿ ಪರಿಷತ್ತಿನ ಹಾಲಿ ಅವಧಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್‌ನಲ್ಲಿ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪರಿಷತ್ತಿನ ಸದಸ್ಯರನ್ನು ಭೇಟಿ ಮಾಡಿ ಬೆಂಬಲ ಕೋರುವುದಾಗಿ ತಿಳಿಸಿದರು.
ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಕನ್ನಡದ ಪ್ರಮುಖ ಕೃತಿಗಳನ್ನು ಪ್ರಕಟಿಸಿ ಕನ್ನಡಿಗರ ಕೈಗೆ ತಲುಪಿಸುವುದರ ಜೊತೆಗೆ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪ್ರತಿ ತಿಂಗಳು ಪುಸ್ತಕ ಸಂತೆ ಆಯೋಜಿಸುವುದಾಗಿ ಜಾಣಗೆರೆ ವೆಂಕಟರಾಮಯ್ಯ ಭರವಸೆ ನೀಡಿದರು.
ಆರ್.ಜಿ.ಹಳ್ಳಿ ನಾಗರಾಜ್ ಮಾತನಾಡಿ, 112 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಮತ್ತು ಗೌರವವನ್ನು ಉಳಿಸಬೇಕಿದೆ. ಜಾಣಗೆರೆ ವೆಂಕಟರಾಮಯ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿ ಪರಿಷತ್ತಿನ ಸದಸ್ಯರ ಮೇಲಿದೆ ಎಂದರು.
ಇದನ್ನೂ ಓದಿ: ವಿಜೃಂಭಣೆಯಿಂದ ನಡೆದ ಈದ್ ಮಿಲಾದ್ ಮೆರವಣಿಗೆ
ಪ್ರೊ. ಸಿ.ಕೆ. ಮಹೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿದ್ದ ಪಂಪನ ವಾಕ್ಯವುಳ್ಳ ಕಮಾನನ್ನು ತೆರವುಗೊಳಿಸಿರುವುದು ಕನ್ನಡಕ್ಕೆ ಅಗೌರವ ತೋರಿದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ನಿವೃತ್ತ ಪ್ರಾಚಾರ್ಯರಾದ ಡಾ. ಕರಿಯಪ್ಪ ಮಾಳಿಗೆ, ಪ್ರೊ. ಹೆಚ್. ಲಿಂಗಪ್ಪ, ಚಿತ್ತಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

