CHITRADURGA NEWS | 25 JUNE 2024
ಚಿತ್ರದುರ್ಗ: ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಜುಲೈ 9ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದೆ. ಜುಲೈ 9 ರಿಂದ 14 ರವರೆಗೆ ಜಿಲ್ಲೆಯಾದ್ಯಂತ ರಥಯಾತ್ರೆ ಸಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜ್ಯೋತಿ ರಥಯಾತ್ರೆಯನ್ನು ಗೌರವದಿಂದ ಸ್ವಾಗತಿಸಲು ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಕ್ಲಿಕ್ ಮಾಡಿ ಓದಿ: ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ
ಜಿಲ್ಲೆಯ ಆರು ತಾಲ್ಲೂಕುಗಳನ್ನು ಒಳಗೊಂಡಂತೆ ಕರ್ನಾಟಕ ಜ್ಯೋತಿ ರಥಯಾತ್ರೆಯು ಜಿಲ್ಲೆಯಾದ್ಯಂತ ಜುಲೈ 9 ರಿಂದ 14 ರವರೆಗೆ ಸಂಚರಿಸಲಿದೆ. ಸಂಬಂಧಪಟ್ಟ ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಸಮನ್ವಯತೆಯೊಂದಿಗೆ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸಂಭ್ರಮದ ಸ್ವಾಗತ ಸಂಚಾರಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾತನಾಡಿ, ಸುವರ್ಣ ಸಂಭ್ರಮ-50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲಕ ಜುಲೈ 9ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿಗೆ ಆಗಮಿಸಲಿದ್ದು, ರಥಯಾತ್ರೆಯನ್ನು ಸಂಭ್ರಮದಿಂದ ಬರ ಮಾಡಿಕೊಳ್ಳಲಾಗುವುದು. ಜುಲೈ 10ರಂದು ಚಿತ್ರದುರ್ಗ, ಜುಲೈ 11ರಂದು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ನಾಯಕನಹಟ್ಟಿ, ಜುಲೈ 12ರಂದು ಚಳ್ಳಕೆರೆ, ಜುಲೈ 13ರಂದು ಹಿರಿಯೂರು, ಜುಲೈ 14ರಂದು ಹೊಸದುರ್ಗ ತಾಲ್ಲೂಕಿನಲ್ಲಿ ರಥಯಾತ್ರೆ ಸಂಚರಿಸಿ ನಂತರ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತೆರಳಲಿದೆ ಎಂದು ಮಾಹಿತಿ ನೀಡಿದರು.
ಕ್ಲಿಕ್ ಮಾಡಿ ಓದಿ: ಜಿಲ್ಲಾ ಪಂಚಾಯಿತಿ ನೌಕರ ಸಿ.ಎನ್.ನವನೀತ್ ಅಮಾನತು | ಅನಧಿಕೃತ ಗೈರು ಹಾಜರಿ ಹಿನ್ನೆಲೆ ಆದೇಶ
ಕರ್ನಾಟಕ ಜ್ಯೋತಿ ಯಾತ್ರೆ ಸಂದರ್ಭದಲ್ಲಿ ಎರಡು ಕಲಾ ತಂಡಗಳು ಮತ್ತು ಯಾತ್ರೆಗೆ ಸಂಬಂಧಿಸಿದಂತೆ ನಗರದಲ್ಲಿ, ತಾಲ್ಲೂಕುವಾರು ರೂಟ್ ಮ್ಯಾಪ್ ಸಿದ್ಧಪಡಿಸಿ ವಿವಿಧ ಸ್ಥಳಗಳ ಮೂಲಕ ಜ್ಯೋತಿಯಾತ್ರೆ ಹೋಗುವ ಪಟ್ಟಿಯನ್ನು ಸಿದ್ದಪಡಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ ಅವರು, ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಬೆಳಿಗ್ಗೆ 9 ಗಂಟೆಗೆ ಜ್ಯೋತಿ ರಥಯಾತ್ರೆಯು ಪ್ರಾರಂಭವಾಗಲಿದ್ದು, ಒಂದು ದಿನ ಸಂಪೂರ್ಣ ಆಯಾ ತಾಲ್ಲೂಕಿನಲ್ಲಿಯೇ ಸಂಚರಿಸಲಿದೆ. ರಥಯಾತ್ರೆಯು ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಒಳಗೊಂಡು, ವೈಭವಯುತವಾಗಿರಲಿದೆ. ಸಂಚಾರದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಸಾಹಿತಿಗಳು, ಜನಪ್ರತಿನಿಧಿಗಳು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವಂತಾಗಬೇಕು. ಇದೇ ವೇಳೆ ಕನ್ನಡ ಧ್ವಜ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಶಿಕ್ಷಣ ಇಲಾಖೆಯ ಚಿದಾನಂದಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
