CHITRADURGA NEWS | 26 SEPTEMBER 2026
ಚಿತ್ರದುರ್ಗ: ಕಳೆದ ನಾಲ್ಕೈದು ದಶಕಗಳಿಂದ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದು, ಕಾಂಗ್ರೆಸ್ ಸರ್ಕಾರಗಳು ಈ ವಿಚಾರವನ್ನು ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡು ಸಮುದಾಯಕ್ಕೆ ವಂಚಿಸಿವೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್. ಮೋಹನ್ ಆರೋಪಿಸಿದರು.
ಇದನ್ನೂ ಓದಿ: ಎಸ್ಐಆರ್ ವಿರುದ್ಧ ಸೆ.28ರಂದು ಕಾಂಗ್ರೆಸ್ ಪ್ರತಿಭಟನೆ
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ವ್ಯವಸ್ಥೆ ಅಪೂರ್ಣವಾಗಿದೆ ಎಂದು ದೂರಿದರು. 15 ಹುದ್ದೆಗಳಿಗಿಂತ ಕಡಿಮೆ ಇರುವ ನೇಮಕಾತಿಗಳಲ್ಲಿ ಒಳಮೀಸಲಾತಿ ಅನ್ವಯಿಸದಿರುವುದು ಹಾಗೂ ಬಡ್ತಿ ಹುದ್ದೆಗಳಲ್ಲಿ ಒಳಮೀಸಲಾತಿ ನೀಡದಿರುವುದು ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಸದಾಶಿವ ಆಯೋಗಕ್ಕೆ ಅನುದಾನ ಬಿಡುಗಡೆ ಮಾಡಿದ್ದರು. ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ 2024ರ ಆಗಸ್ಟ್ 1ರಂದು ಪರಿಶಿಷ್ಟ ಜಾತಿಗಳ ಒಳವರ್ಗೀಕರಣವು ಕಾನೂನಿನ ಪ್ರಕಾರ ಸಾಧ್ಯ ಎಂದು ತೀರ್ಪು ನೀಡಿತ್ತು.
ಒಳಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು. ಬಡ್ತಿ ಹುದ್ದೆಗಳು ಹಾಗೂ 15ಕ್ಕಿಂತ ಕಡಿಮೆ ಹುದ್ದೆಗಳ ನೇಮಕಾತಿಗಳಲ್ಲಿಯೂ ಒಳಮೀಸಲಾತಿ ಅನ್ವಯಿಸಬೇಕು. ಎಸ್ಸಿಪಿ/ಟಿಎಸ್ಪಿ ಅನುದಾನವನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ತಡೆಯಬೇಕು. ಮಾದಿಗ ಸಮುದಾಯಕ್ಕೆ ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ಜಯ್ಯಪ್ಪ ಮಾತನಾಡಿ, ಸೆ.30ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದ ಶ್ರೀ ವಾಲ್ಮೀಕಿ ಭವನದಲ್ಲಿ ‘ಮಾದಿಗ ಮುನ್ನಡೆ-2’ ಮಾದಿಗ ಕಾರ್ಯಕರ್ತರ ಜಿಲ್ಲಾ ಸಮಾವೇಶ ಹಾಗೂ ‘ಒಳಮೀಸಲಾತಿ ಕಗ್ಗಂಟು ಬಿಡಿಸಿದ ನರೇಂದ್ರ ಮೋದಿ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಜಿ.ಎಂ. ಸಿದ್ದೇಶ್ವರ್, ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಸ್.ಕೆ. ಬಸವರಾಜನ್, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ನಿವೃತ್ತ ಸಹಾಯಕ ಪ್ರಾಧ್ಯಾಪಕ ಎಲ್ಲ ನಾಗರಾಜಪ್ಪ ಮಾತನಾಡಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ಕೆಂಪೇಗೌಡ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಗೌರವ ಸನ್ಮಾನ ನಡೆಯಲಿದೆ. ಒಳಮೀಸಲಾತಿ ಹೋರಾಟಕ್ಕೆ ಸೇವೆ ಸಲ್ಲಿಸಿದ ಸಮಾಜದ ಪ್ರಮುಖರನ್ನು ಸಹ ಸನ್ಮಾನಿಸಲಾಗುವುದು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರಹ್ಲಾದ್, ಎಸ್ಸಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ಕುಮಾರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಮ್, ದಯಾನಂದ, ರವಿ, ಹನುಮಂತಪ್ಪ, ತಿಪ್ಪಣ್ಣ, ಚಿಕ್ಕಣ್ಣ, ಓಬಳೇಶ್, ಕೃಷ್ಣಮೂರ್ತಿ, ಮಂಜುಳಮ್ಮ, ಲಕ್ಷ್ಮಣಪ್ಪ ಹಾಗೂ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

