
CHITRADURGA NEWS | 17 JUNE 2026
ಚಿತ್ರದುರ್ಗ: ಜಿಲ್ಲೆಯ ಶಾಲಾ-ಕಾಲೇಜು, ದೇವಸ್ಥಾನ ಹಾಗೂ ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ವಲಯ ಎಂದು ಘೋಷಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬದ್ದ | ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದನ್ವಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಉತ್ಪನ್ನಗಳ ನಿಯಂತ್ರಣ ಮತ್ತು ಕೋಟ್ಪಾ ಕಾಯ್ದೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್, ಆರೋಗ್ಯ, ಶಿಕ್ಷಣ ಮತ್ತು ಸ್ಥಳೀಯ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ ಅವರು, ಶಿಕ್ಷಣ ಇಲಾಖೆಯು ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಕಾಲೇಜುಗಳ ಆವರಣವನ್ನು ಕಡ್ಡಾಯವಾಗಿ ‘ತಂಬಾಕು ಮುಕ್ತ ವಲಯ’ ಎಂದು ಘೋಷಿಸಬೇಕು. ವಿಶೇಷವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ಆವರಣದಲ್ಲಿ ಯಾವುದೇ ರೀತಿಯ ತಂಬಾಕು ಬಳಕೆಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ಮುಜರಾಯಿ ದೇವಸ್ಥಾನಗಳನ್ನು ತಂಬಾಕು ಮುಕ್ತ ಕ್ಷೇತ್ರಗಳನ್ನಾಗಿ ಮಾಡಲು ಮೊದಲು ಸೂಕ್ತ ನಿರ್ದೇಶನ ನೀಡಿ, ಬಳಿಕ ಅಧಿಕೃತವಾಗಿ ಘೋಷಿಸಬೇಕು. ಪ್ರತಿಯೊಂದು ಸರ್ಕಾರಿ ಕಚೇರಿಯೂ ತಂಬಾಕು ಮುಕ್ತವಾಗಿರಬೇಕು ಮತ್ತು ಕಚೇರಿಗಳಲ್ಲಿ ತಂಬಾಕು ನಿಷೇಧದ ಕುರಿತು ಸಾರ್ವಜನಿಕರಿಗೆ ಕಾಣಿಸುವಂತೆ ಫಲಕಗಳನ್ನು ಪ್ರದರ್ಶಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ತಂಬಾಕು ಪದಾರ್ಥಗಳನ್ನು ಬಳಸುವುದು ಕಂಡುಬಂದರೆ ಕ್ರಮ ಕೈಗೊಳ್ಳಬೇಕು ಹಾಗೂ ನಿರಂತರ ಮಾನಿಟರಿಂಗ್ ಮೂಲಕ ಜಾಗೃತಿ ಮೂಡಿಸಬೇಕು. ಕೋಟ್ಪಾ ಕಾಯ್ದೆಯಡಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆ ಮೂಲಕ ದಾಳಿಗಳನ್ನು ನಡೆಸಲಾಗುತ್ತಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ನಿಯಮ ಬಾಹಿರವಾಗಿ ತಂಬಾಕು ಮಾರಾಟ ಮಾಡುವವರಿಗೆ ದಂಡ ವಿಧಿಸಲಾಗುತ್ತಿದ್ದು, ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರಪತ್ರಗಳು ಮತ್ತು ಪೋಸ್ಟರ್‍ಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಂತೇಶ್ ಉಳ್ಳಾಗಡ್ಡಿ ಮಾತನಾಡಿ, ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ತಂಬಾಕು ಮುಕ್ತ ವಾತಾವರಣ ನಿರ್ಮಿಸಲು ಹಲವು ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುತ್ತಿವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ವಿವಿಧ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಅಹ್ವಾನ
ಕರ್ನಾಟಕ ಕೋಟ್ಪಾ ತಿದ್ದುಪಡಿ ಕಾಯ್ದೆಯನ್ವಯ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡಿದರೆ ವಿಧಿಸಲಾಗುತ್ತಿದ್ದ ದಂಡದ ಮೊತ್ತವನ್ನು ರೂ.200 ರಿಂದ ರೂ.1,000 ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾತ್ರವಲ್ಲದೆ ಯಾವುದೇ ತಂಬಾಕು ಉತ್ಪನ್ನಗಳ ಬಳಕೆಯನ್ನೂ ನಿಷೇಧಿಸಲಾಗಿದೆ ಎಂದರು.
ತಂಬಾಕು ಉತ್ಪನ್ನಗಳ ಖರೀದಿಯ ವಯೋಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಹುಕ್ಕಾ ಬಾರ್‍ಗಳ ಕಾರ್ಯಾಚರಣೆ, ಮಾರಾಟ ಹಾಗೂ ಪ್ರದರ್ಶನವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಬಾರ್ ಕೌಂಟರ್‍ಗಳ ಬಳಿ ಧೂಮಪಾನ ನಿಷೇಧದ ಫಲಕಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 30ಕ್ಕಿಂತ ಹೆಚ್ಚು ಆಸನ ಸಾಮಥ್ರ್ಯವಿರುವ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ನಗರಸಭೆ ಅಥವಾ ಪಿಡಿಒ ಅವರಿಂದ ಅನುಮತಿ ಪಡೆದ ನಂತರವೇ ಪ್ರತ್ಯೇಕ ಧೂಮಪಾನ ವಲಯ ಗುರುತಿಸಲು ಅವಕಾಶ ನೀಡಲಾಗುವುದು.
ಇದನ್ನೂ ಓದಿ: ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ
ಧೂಮಪಾನ ವಲಯಗಳಲ್ಲಿ ಯಾವುದೇ ರೀತಿಯ ಆಶ್ ಟ್ರೇ ಇಡಲು ಅವಕಾಶವಿಲ್ಲ. ಎಲ್ಲಾ ಪರವಾನಗಿ ಪಡೆದ ಮಳಿಗೆಗಳಲ್ಲಿ 21 ವರ್ಷದೊಳಗಿನವರಿಗೆ ತಂಬಾಕು ಮತ್ತು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂಬ ಬೋರ್ಡ್‍ಗಳನ್ನು ಕಡ್ಡಾಯವಾಗಿ ಹಾಕಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ಸಭೆಗೆ ಮಾಹಿತಿ ನೀಡಿದರು.
ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ ಮಾತನಾಡಿ, ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಡಿಮೆ ಮನೆಗಳಿರುವ 30 ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಆಯಾ ತಾಲೂಕುಗಳಿಗೆ ಜವಾಬ್ದಾರಿ ನೀಡಲಾಗಿದೆ. ಕಳೆದ ಬಾರಿ ಚಿತ್ರದುರ್ಗ ತಾಲೂಕಿನಲ್ಲಿ ನಾಲ್ಕು ಗ್ರಾಮಗಳನ್ನು ಯಶಸ್ವಿಯಾಗಿ ತಂಬಾಕು ಮುಕ್ತಗೊಳಿಸಲಾಗಿತ್ತು.
ಅದೇ ರೀತಿ, ಜಿಲ್ಲೆಯ ಪ್ರಮುಖ ದೇವಸ್ಥಾನಗಳು ಮತ್ತು ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ಪ್ರದೇಶಗಳನ್ನಾಗಿ ಘೋಷಿಸಲಾಗುತ್ತಿದೆ. ಈಗಾಗಲೇ ನಾಲ್ಕು ಪ್ರಮುಖ ದೇವಸ್ಥಾನಗಳ ವರದಿಯನ್ನು ಸಲ್ಲಿಸಲಾಗಿದ್ದು, ಉಳಿದ ದೇವಸ್ಥಾನಗಳಲ್ಲೂ ನಿಯಮ ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಹಿರಿಯೂರು, ಹೊಸದುರ್ಗ, ಚಳ್ಳಕೆರೆ ಸೇರಿದಂತೆ ವಿವಿಧ ತಾಲ್ಲೂಕುಗಳಲ್ಲಿ ನಿರಂತರ ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ವಿಶ್ವ ರಹಿತ ದಿನದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.
ಇದನ್ನೂ ಓದಿ: ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಾಶೀ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮ ಹಾನಗಲ್, ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

