CHITRADURGA NEWS | 05 AUGUST 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಾಗಿದ್ದು, ಕೇವಲ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಅಭಾವ ಹಾಗೂ ಬರ ಪರಿಸ್ಥಿತಿ ಎದುರಿಸಲು ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ರೈತ ಜಯರಾಮಯ್ಯ ಅವರ ಜಮೀನಿಗೆ ಬುಧವಾರ ಭೇಟಿ ನೀಡಿ, ಬರ ಪರಿಸ್ಥಿತಿ ಪರಿಶೀಲಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದ ಹಲವೆಡೆ ಭೀಕರ ಬರಗಾಲ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಸಭೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಬರ ಪರಿಸ್ಥಿತಿ ಕುರಿತು ಪರಿಶೀಲಿಸಲು ಪ್ರವಾಸ ಕೈಗೊಳ್ಳುತ್ತಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಗೆ ಬರ ನಿರ್ವಹಣೆ ಜವಾಬ್ದಾರಿ ಹಂಚಿದ್ದಾರೆ. ಅಧಿಕಾರಿಗಳು ಸಿದ್ಧಪಡಿಸಿದ ವರದಿಗಳ ಪರಿಶೀಲಿಸುವುದಲ್ಲದೆ, ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನೈಜ ಪರಿಸ್ಥಿತಿಯ ವರದಿ ತಯಾರಿಸಲಾಗುವುದು.
ಇದನ್ನೂ ಓದಿ: ನವೋದಯ 6ನೇ ತರಗತಿ ಪ್ರವೇಶದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು. ಜವಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಬಿತ್ತನೆಯಾಗದ ಪ್ರದೇಶಗಳನ್ನು ವೀಕ್ಷಿಸಲಾಗಿದೆ ಎಂದರು.
‘ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ ಅಡಿಯಲ್ಲಿ ಪರಿಹಾರ ದೊರೆಯಲಿದೆ. ಬಿತ್ತನೆ ಮಾಡದಿದ್ದರೂ ಶೇ.25ರಷ್ಟು ಬಿತ್ತನೆ ವೈಫಲ್ಯ ನಷ್ಟ ಪರಿಹಾರ ಸಿಗಲಿದೆ. ಬೆಳೆ ಹಾನಿಯಾದ ರೈತರಿಗೂ ವಿಮೆ ಮೂಲಕ ನೆರವು ಸಿಗಲಿದೆ’ ಎಂದರು.
‘ಫಸಲ್ ಭೀಮಾ ಯೋಜನೆಯ ನೋಂದಣಿ ಗಡುವನ್ನು ಮುಂದುವರಿಸಲು ಮುಖ್ಯಮಂತ್ರಿಗಳು ಕೇಂದ್ರ ಕೃಷಿ ಸಚಿವರಿಗೆ ಈಗಾಗಲೇ ಪತ್ರ ಬರೆದಿದ್ದಾರೆ. ಅಲ್ಲದೆ, ರಾಗಿ ಬಿತ್ತನೆಗೆ ಇನ್ನು ಕಾಲಾವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಸಚಿವ ರಘುಮೂರ್ತಿ ಸ್ಪಷ್ಟಪಡಿಸಿದರು.
2.30 ಲಕ್ಷ ರೈತರಿಂದ ವಿಮೆ ನೋಂದಣಿ:
ಜಿಲ್ಲೆಯಲ್ಲಿ ಒಟ್ಟು 3 ಲಕ್ಷಕ್ಕೂ ಹೆಚ್ಚು ರೈತರಿದ್ದು ಬೆಳೆ ವಿಮೆ ನೊಂದಣಿಗೆ ಅಭಿಯಾನ ನಡೆಸಿ ಜಾಗೃತಿ ಮೂಡಿಸಲಾಗಿದೆ. ಇದರ ಪರಿಣಾಮವಾಗಿ ಜಿಲ್ಲೆಯಲ್ಲಿ ಸುಮಾರು 2.30 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಿಂದ ಬರ ಎದುರಿಸಲು ರೈತರಿಗೆ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ | ಪುಸ್ತಕಗಳಿಗೆ ಶೇ.50 ರಿಯಾಯಿತಿ
ಹಿರಿಯೂರು ತಾಲ್ಲೂಕಿನಲ್ಲಿ ಶೇ. 11ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ ಶೇ.80ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡದಿರುವ ರೈತರಿಗೆ ಶೇ.25ರಷ್ಟು ಬಿತ್ತನೆ ವೈಫಲ್ಯ ಹಾಗೂ ಬಿತ್ತನೆ ಮಾಡಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಫಸಲ್ ಭೀಮಾ ಯೋಜನೆಯಡಿ ಪರಿಹಾರ ಕೊಡಿಸಲು ಸರ್ಕಾರ ಬದ್ಧವಾಗಿದೆ. ಭೀಮಾ ಯೋಜನೆಗೆ ಅರ್ಜಿ ಸಲ್ಲಿಸುವ ಗಡುವು ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದರು.
ಆಗಸ್ಟ್ ಅಂತ್ಯಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯ ಗೋನೂರು ಕೆರೆಗೆ ನೀರು ಹರಿಸಲಾಗುವುದು. ಮುಂದಿನ ವರ್ಷದ ಅಂತ್ಯಕ್ಕೆ ಅಕ್ವಾಡೆಕ್ಟ್ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು. ಜೆ.ಜಿ.ಹಳ್ಳಿ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ರೂ.244 ಕೋಟಿ ಬಿಡುಗಡೆ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖೆ ಮೂಲಕ 16 ಕೆರೆಗಳಿಗೆ ನೀರು ತುಂಬಿಸಲು ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಸಚಿವ ಟಿ.ರಘುಮೂರ್ತಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ನಂತರ ಸಚಿವ ಟಿ.ರಘುಮೂರ್ತಿ ಅವರು ಕೆ.ಆರ್.ಹಳ್ಳಿ, ಬಾಲೇನಹಳ್ಳಿ, ಮಲ್ಲಪ್ಪನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಈ ಸಂದರ್ಭದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

