CHITRADURGA NEWS | 21 November 2026
ಹಿರಿಯೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ₹2 ಸಾವಿರ ಕೋಟಿಗೂ ಅಧಿಕ ಅನುದಾನ ನೀಡಲಾಗಿದ್ದು, 3 ಸಾವಿರ ಮನೆಗಳನ್ನು ಮಂಜೂರು ಮಾಡಲಾಗಿದೆ. 1,087 ಎಕರೆ ಜಮೀನು ಗುರುತಿಸಿ 17,434 ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
ನಗರದಲ್ಲಿ ಶನಿವಾರ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜನರಿಗಾಗಿ ಯಾವ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಪ್ರಶ್ನಿಸಿದರು. ಇಷ್ಟೊಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರು ಗುರುತಿಸಬೇಕು. ವಿರೋಧ ಪಕ್ಷದವರು ಮನೆ ಬಾಗಿಲಿಗೆ ಬಂದಾಗ ಜನರು ಪ್ರಶ್ನಿಸಬೇಕು ಎಂದು ಹೇಳಿದರು.
ಭದ್ರಾ ಮೇಲ್ದಂಡೆಗೆ ₹5,300 ಕೋಟಿ ಕೊಡಿಸಲಿ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದ ಶಿವಕುಮಾರ್, ಹಿರಿಯೂರು ಭಾಗಕ್ಕೆ ಭದ್ರಾ ನೀರು ಹರಿಸುವ ಮೂಲಕ ಬರದ ಸಮಸ್ಯೆ ದೂರ ಮಾಡುವ ಪ್ರಯತ್ನ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಭೂಮಿ, ನೀರು ಹಾಗೂ ಬದುಕಿನ ಭರವಸೆಯನ್ನೂ ಸರ್ಕಾರ ನೀಡುತ್ತಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಹಿರಿಯೂರು ಜನತೆ ಬೆಂಬಲ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಮಹಿಳೆಯರ ಹೆಸರಿಗೆ 30×40 ನಿವೇಶನ
ಕುಟುಂಬದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿರುವುದರಿಂದ 30×40 ಅಳತೆಯ ನಿವೇಶನಗಳನ್ನು ಕುಟುಂಬದ ಮಹಿಳೆಯರ ಹೆಸರಿಗೆ ನೀಡಲು ನಿರ್ಧರಿಸಲಾಗಿದೆ. ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಇದನ್ನೂ ಓದಿ: ಭದ್ರಾ ಜಲಾಶಯದಿಂದ 2 TMC ನೀರು ಹರಿಸಿ | ಸಚಿವ ಟಿ.ರಘುಮೂರ್ತಿ ಮನವಿ
ಕಳೆದ ಬಾರಿ ಹಿರಿಯೂರಿಗೆ ಬಂದಾಗ ಕನಕಪುರ ಮತ್ತು ಹಿರಿಯೂರು ನನಗೆ ಒಂದೇ ಎಂದು ಹೇಳಿದ್ದೆ. ಹಿರಿಯೂರು ನನ್ನ ಹಿರಿಯಣ್ಣ, ಹಿತೈಷಿ ಹಾಗೂ ಗೆಳೆಯರಾಗಿದ್ದ ದಿವಂಗತ ಡಿ. ಸುಧಾಕರ್ ಅವರ ಕ್ಷೇತ್ರವಾಗಿದೆ. ಅವರು ಕಂಡ ಅಭಿವೃದ್ಧಿಯ ಕನಸುಗಳು ಅರ್ಧಕ್ಕೆ ನಿಲ್ಲಬಾರದು ಎಂಬ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಭಾವುಕರಾಗಿ ನುಡಿದರು.
ಚಿತ್ರದುರ್ಗದ 2,900 ಅರ್ಜಿಗಳಿಗೆ ಪರಿಹಾರ
ಚಿತ್ರದುರ್ಗ ಜಿಲ್ಲೆಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಪ್ರಜಾಸೇವಾ ಕಾರ್ಯಕ್ರಮದಡಿ 3,737 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈ ಪೈಕಿ 2,900 ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ. ಇದು ಸರ್ಕಾರದ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ. ಪ್ರಜಾಸೇವೆ ಎಂದರೆ ದಾನ-ಧರ್ಮವಲ್ಲ, ಜನರ ಬದುಕಿನ ಹೊಣೆಗಾರಿಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವುದೇ ಶ್ರೇಷ್ಠ ಧರ್ಮ ಎಂದು ಹೇಳಿದರು.
ರೈತರ ಹಲವು ದಶಕಗಳ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಚಿತ್ರದುರ್ಗ ಜಿಲ್ಲೆಯ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಸರ್ಕಾರ ಬದ್ಧವಾಗಿದೆ. ನಿಜಲಿಂಗಪ್ಪನವರು ಕಂಡ ಕನಸನ್ನು ಎಸ್.ಎಂ. ಕೃಷ್ಣ ಅವರು ಕಾರ್ಯರೂಪಕ್ಕೆ ತಂದಿದ್ದು, ಇದೀಗ ಯೋಜನೆಯನ್ನು ಮುಂದುವರಿಸಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
16 ಕೆರೆಗಳ ಭರ್ತಿಗೆ ₹244 ಕೋಟಿ
ವಿಶ್ವೇಶ್ವರಯ್ಯ ಜಲ ನಿಗಮದಡಿ ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ₹1,742 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ನಡೆಯುತ್ತಿದೆ. ಸಣ್ಣ ನೀರಾವರಿ ಇಲಾಖೆಯಡಿ 16 ಕೆರೆಗಳ ಭರ್ತಿಗಾಗಿ ₹244 ಕೋಟಿ ಅನುದಾನ ನೀಡಲಾಗಿದೆ. ಕಳೆದ ತಿಂಗಳು ಐತಿಹಾಸಿಕ ಗೋನೂರು ಕೆರೆಗೆ ನೀರು ತುಂಬಿಸುವ ಮೂಲಕ ನೀಡಿದ ಭರವಸೆಯನ್ನು ಈಡೇರಿಸಲಾಗಿದೆ. ನಾಲ್ಕು ಜಿಲ್ಲೆಗಳ 13 ತಾಲ್ಲೂಕುಗಳ 367 ಕೆರೆಗಳಿಗೆ ಭದ್ರಾ ನೀರು ಹರಿಯಲಿದ್ದು, ಸುಮಾರು 74.26 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
ಇದನ್ನೂ ಓದಿ: ಕುರಿ, ಮೇಕೆ ಸಾಕಾಣಿಕೆಯಲ್ಲಿ ಆಸಕ್ತ ರೈತರಿಗೆ ಎರಡು ದಿನಗಳ ತರಬೇತಿ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಹಿರಿಯೂರು ನಗರದ ದಕ್ಷಿಣ ಭಾಗಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಮೊದಲ ಹಂತದ ₹100 ಕೋಟಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಕಾಲೋನಿಗಳ ಮೂಲಸೌಕರ್ಯ ಅಭಿವೃದ್ಧಿಗೆ ₹50 ಕೋಟಿ ಹಾಗೂ ಪರಿಶಿಷ್ಟ ಪಂಗಡಗಳ ಕಾಲೋನಿಗಳ ಅಭಿವೃದ್ಧಿಗೆ ₹10 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಹಿರಿಯೂರು ಪಟ್ಟಣದಲ್ಲಿ ₹12.65 ಕೋಟಿ ವೆಚ್ಚದಲ್ಲಿ ಡಾ. ಬಾಬು ಜಗಜೀವನರಾಂ, ಛಲವಾದಿ ಹಾಗೂ ಭೋವಿ ಭವನಗಳನ್ನು ನಿರ್ಮಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ₹5 ಕೋಟಿ ವೆಚ್ಚದಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಧರ್ಮಪುರ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಅಭಿವೃದ್ಧಿಗೆ ₹10 ಕೋಟಿ ಅನುದಾನ ನೀಡಲಾಗಿದೆ. 2026-27ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ₹20 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಬೆಸ್ಕಾಂ ನಿರ್ವಹಣಾ ಕಾರ್ಯ | ಚಿತ್ರದುರ್ಗ ಸುತ್ತಮುತ್ತ ವಿದ್ಯುತ್ ಕಡಿತ
ಒಟ್ಟಾರೆ ಹಿರಿಯೂರು ಕ್ಷೇತ್ರದಲ್ಲಿ ವಸತಿ, ನಿವೇಶನ, ನೀರಾವರಿ, ರಸ್ತೆ, ಒಳಚರಂಡಿ ಹಾಗೂ ಸಾಮಾಜಿಕ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದ್ದು, ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

