ಮುಖ್ಯ ಸುದ್ದಿ
ಚಿತ್ರದುರ್ಗ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಮುಹೂರ್ತ ಫಿಕ್ಸ್ | ಅಮೃತ್ ಭಾರತ್ ರೈಲ್ವೆ ಯೋಜನೆಯಡಿ ಕಾಮಗಾರಿ

CHITRADURGA NEWS | 24 FEBRUARY 2024
ಚಿತ್ರದುರ್ಗ: ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಫೆ.26ರಂದು ಬೆಳಿಗ್ಗೆ 10.45ಕ್ಕೆ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರು ವಿಭಾಗದಲ್ಲಿ 12 ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಹಾಗೂ 13 ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ಕಾಮಗಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆ.26ರಂದು ಮಧ್ಯಾಹ್ನ 12.30ಕ್ಕೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು.
ಅಮೃತ್ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ ಚಿತ್ರದುರ್ಗ ನಗರದ ರೈಲ್ವೆ ನಿಲ್ದಾಣ ನವೀಕರಣ ಹಾಗೂ ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವರು ಹಾಗೂ ಸಂಸದ ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಗಣ್ಯರು ನಗರದ ರೈಲ್ವೆ ನಿಲ್ದಾಣದಲ್ಲಿ ಉಪಸ್ಥಿತರಿದ್ದು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸೌತ್ ವೆಸ್ಟರ್ನ್ ರೈಲ್ವೆ ಮೈಸೂರು ವಿಭಾಗದ ಸೀನಿಯರ್ ಡಿವಿಜಿನಲ್ ಕಮರ್ಷಿಯಲ್ ಮ್ಯಾನೇಜರ್ ಜೆ.ಲೋಹಿತೇಶ್ವರ ತಿಳಿಸಿದ್ದಾರೆ.

ಇದನ್ನೂ ಓದಿ: ಪತ್ನಿ ಮೇಲೆ ಬಿತ್ತು ಸ್ವಾಮಿ ಕಣ್ಣು | ಹಾರಿತು ಪ್ರಾಣ ಪಕ್ಷಿ | ಇಬ್ಬರಿಗೆ ಜೀವಾವಧಿ ಶಿಕ್ಷೆ
ಜನವರಿ 8 ರಂದು ಚಿತ್ರದುರ್ಗ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿದ್ದ ಎ.ನಾರಾಯಣಸ್ವಾಮಿ ಅವರು, ಚಿತ್ರದುರ್ಗ, ಚಳ್ಳಕೆರೆ ಹಾಗೂ ಚಿಕ್ಕಜಾಜೂರು ರೈಲ್ವೆ ನಿಲ್ದಾಣಗಳನ್ನು ಅಮೃತ್ ಯೋಜನೆಯಡಿ ಮೇಲ್ದರ್ಜೆಗೇರಿಸಲಾಗುವುದು ತಿಳಿಸಿದ್ದರು. ಜತೆಗೆ ಯೋಜನೆಗೆ ಸಂಬಂಧಪಟ್ಟಂತೆ ನೀಡಿದ ಮಾಹಿತಿ ಮುಂದಿನಂತೆ..

ಅಂದಾಜು 16 ಕೋಟಿ ರೂ. ವೆಚ್ಚಕ್ಕೆ ಟೆಂಡರ್ ಕರೆಯಲಾಗಿದೆ. ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ದಾವಣಗೆರೆ-ತುಮಕೂರು ನೇರ ರೈಲ್ವೇ ಯೋಜನೆಯಲ್ಲಿ ಕಾಮಗಾರಿಗಳನ್ನು ಹೊರತುಪಡಿಸಿ, ಅಮೃತ್ ಯೋಜನೆಯಡಿ ಮೂಲಭೂತ ಸೌಕರ್ಯ ಹಾಗೂ ಆಡಳಿತಾತ್ಮಕ ಕಚೇರಿಯನ್ನು ನಿರ್ಮಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಅಂತರಾಷ್ಟ್ರೀಯ ಮಟ್ಟದ ರೈಲ್ವೇ ನಿಲ್ದಾಣ ನಿರ್ಮಿಸಲಾಗುವುದು. ರೂ. 02.36 ಕೋಟಿ ವೆಚ್ಚದಲ್ಲಿ ಚಳ್ಳಕೆರೆ ರೈಲ್ವೇ ಫ್ಲಾಟ್ ಫಾರಂ ಅಭಿವೃದ್ಧಿ ಪಡಿಸಲಾಗುತ್ತಿದೆ. ಮೈಸೂರಿನಲ್ಲಿ ನಡೆದ ರೈಲ್ವೆ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಜಿಲ್ಲೆಯ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಸುಮಾರು ರೂ.18 ಕೋಟಿ ಬಿಡುಗಡೆಯಾಗಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ | 600 ಜನರ ಮೇಲೆ ದೂರು ದಾಖಲಿಸಿದ ಪೊಲೀಸ್ ಇಲಾಖೆ
ಈ ಭಾಗದ ಜನರ ಬಹುದಿನದ ಬೇಡಿಕೆಯಾದ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆಗೆ ಕೇಂದ್ರ ಸರ್ಕಾರ 1,900 ಕೋಟಿ ರೂ. ಮಂಜೂರು ಮಾಡಿದೆ. ದಾವಣಗೆರೆ-ಚಿತ್ರದುರ್ಗ-ಹಿರಿಯೂರು ಭಾಗದಲ್ಲಿ ಈಗಾಗಲೇ ರೈಲ್ವೇ ಯೋಜನೆಗೆ ಅಗತ್ಯವಾದ ಶೇ.82 ರಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆಗೆ ಹಸ್ತಾಂತರಿಸಲಾಗಿದೆ. ಯೋಜನೆಯ ಟೆಂಡರ್ ಪ್ರಕ್ರಿಯೆ ಆರಂಭಿಸಲು ಶೇ.90 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿರಬೇಕು. ಈ ಹಿನ್ನಲೆಯಲ್ಲಿ ಮುಂದಿನ ವಾರದಲ್ಲಿ ಶೇ.8 ರಷ್ಟು ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ರೈಲ್ವೇ ಇಲಾಖೆಗೆ ನೀಡಲಾಗುವುದು. ಮುಂದಿನ ತಿಂಗಳ ವೇಳೆಗೆ ಯೋಜನೆ ಟೆಂಡರ್ ಪ್ರಕ್ರಿಯೆ ಆರಂಭಗೊಳ್ಳುವುದಾಗಿ ತಿಳಿಸಿದ್ದರು.
ದಾವಣಗೆರೆ-ಭರಮಸಾಗರ ನಡುವಿನ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಈ ಭಾಗದ ಯೋಜನೆಗೆ ಚಾಲನೆ ನೀಡಲಾಗಿದೆ. ಭರಮಸಾಗರ-ಚಿತ್ರದುರ್ಗ ನಡುವಿನ ಭೂ ಸ್ವಾಧೀನ ಪಕ್ರಿಯೆಯೂ ಮುಗಿಯುವ ಹಂತಕ್ಕೆ ಬಂದಿದ್ದು, ಭರಮಸಾಗರ-ಚಿತ್ರದುರ್ಗ ನಡುವಿನ ರೈಲ್ವೇ ಯೋಜನೆಯನ್ನು ಸಹ ಆದಷ್ಟು ಶೀಘ್ರ ಆರಂಭಿಸಲಾಗುತ್ತದೆ.
ಚಿತ್ರದುರ್ಗ ರೈಲ್ವೇ ನಿಲ್ದಾಣವನ್ನು ನೇರ ರೈಲ್ವೇ ಯೋಜನೆಯಡಿ ನೂತನವಾಗಿ ನಿರ್ಮಿಸಲಾಗುವುದು. ಈ ಹಿನ್ನಲೆಯಲ್ಲಿ ನೇರ ರೈಲ್ವೇ ಯೋಜನೆಯ ಕಾಮಗಾರಿಗೆ ಚ್ಯುತಿ ಹಾಗೂ ಅಡಚಣೆ ಉಂಟಾಗದಂತೆ ಅಮೃತ್ ಯೋಜನೆಯಡಿ ಆಡಳಿತ ಕಚೇರಿಯ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯ ಯೋಜನಾ ವ್ಯವಸ್ಥಾಪಕ ಆನಂದ ಭಾರತಿ ಸಚಿವರಿಗೆ ತಿಳಿಸಿದ್ದರು.
ಚಿತ್ರದುರ್ಗ ರೈಲ್ವೇ ನಿಲ್ದಾಣದ ಒಂದನೇ ಪ್ಲಾಟ್ ಫಾರಂನಲ್ಲಿ ಮಾತ್ರ ಪ್ರಯಾಣಿಕ ರೈಲುಗಳು ಕಾರ್ಯಚರಣೆ ನಡೆಸುತ್ತಿವೆ. 2ನೇ ಫ್ಲಾಟ್ ಫಾರಂ ಇಲ್ಲದ ಕಾರಣ ಓವರ್ ಬ್ರಿಡ್ಜ್ ನಿರ್ಮಿಸಿಲ್ಲ. ಮೂರನೇ ರೈಲ್ವೇ ಹಳಿಯಲ್ಲಿ ಗೂಡ್ಸ್‍ರೈಲುಗಳು ಮಾತ್ರ ಕಾರ್ಯಚರಣೆ ನಡೆಸುತ್ತಿವೆ. ನೇರ ರೈಲ್ವೇ ಮಾರ್ಗ ಯೋಜನೆಯಲ್ಲಿ ಸಂಪೂರ್ಣವಾಗಿ ರೈಲ್ವೇ ನಿಲ್ದಾಣವನ್ನು ನಿರ್ಮಾಣ ಮಾಡಲಿದ್ದು, ಆ ಸಂದರ್ಭದಲ್ಲಿ ಎರಡು ಫ್ಲಾಟ್ ಫಾರಂಗಳನ್ನು ನಿರ್ಮಿಸಿ, ಪ್ರಯಾಣಿಕರ ಅನುಕೂಲಕ್ಕೆ ಓವರ್ ಬ್ರಿಡ್ಜ್ ಸೌಲಭ್ಯ ಕಲ್ಪಿಸಲಾಗುವುದು ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಹಳೆಯ ಪಿ.ಬಿ. ರೋಡ್‍ನಲ್ಲಿ ರೈಲ್ವೇ ಗೇಟ್ ಬಳಿ ಬ್ರಿಡ್ಜ್ ನಿರ್ಮಿಸುವ ಕಾಮಗಾರಿಗೆ ಎನ್.ಓ.ಸಿ ನೀಡುವಂತೆ ರೈಲ್ವೇ ಅಧಿಕಾರಿಗಳು ಪತ್ರ ಬರೆದಿದ್ದು, ಶೀಘ್ರವೇ ಎನ್.ಓ.ಸಿ ನೀಡುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅಂದಿನ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅವರಿಗೆ ಕರೆ ಮಾಡಿ ಸೂಚನೆ ನೀಡಿದ್ದರು.
ಈ ವೇಳೆ ರೈಲ್ವೆ ಇಲಾಖೆ ಉಪ ವ್ಯವಸ್ಥಾಪಕ ರಾಮಸುಬ್ಬಯ್ಯ, ಡಿವಿಜಿನಲ್ ಕಮರ್ಷಿಯಲ್ ಮ್ಯಾನೇಜರ್ ಲೋಹಿತಾಶ್ವ, ಬ್ರಿಡ್ಜ್ ಡೆಪ್ಯೂಟಿ ಇಂಜಿನಿಯರ್ ಉನ್ನೀಕೃಷ್ಣನ್, ಸಹಾಯಕ ವಿಭಾಗೀಯ ಅಭಿಯಂತರ ನಿತ್ಯಾನಂದ ಸ್ವಾಮಿ, ಟ್ರಾಪಿಕ್ ಇನ್ಸ್‍ಪೆಕ್ಟರ್ ಬಿ.ಹನುಮಂತು, ಸ್ಟೇಷನ್ ಸೂಪರಿಡೆಂಟ್ ಇ.ಮಂಜುನಾಥ್, ಆರ್‍ಪಿಎಫ್ ಎಸ್‍ಐ ಜಯಣ್ಣ ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಸೇರಿದಂತೆ ರೈಲ್ವೇ ಇಲಾಖೆ ಸಿಬ್ಬಂದಿ ಇದ್ದರು.
ಶೀಘ್ರ ಭೂಸ್ವಾಧೀನ ಪೂರ್ಣ
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕು ವ್ಯಾಪ್ತಿಯ ಒಟ್ಟು 101 ಕಿ.ಮೀ. ಮಾರ್ಗಕ್ಕಾಗಿ 1211.13 ಎಕರೆ ಭೂಮಿಗಾಗಿ ಬೇಡಿಕೆ ಸಲ್ಲಿಸಿದಂತೆ ಈಗಾಗಲೆ 639.09 ಎಕರೆ ಭೂಸ್ವಾಧೀನಕ್ಕಾಗಿ ಪರಿಹಾರ ವಿತರಿಸಲಾಗಿದೆ. ಉಳಿದಂತೆ 572.04 ಎಕರೆ ಭೂಸ್ವಾಧೀನ ವಿವಿಧ ಹಂತದಲ್ಲಿದೆ. ಭರಮಸಾಗರ-ಚೋಳಗಟ್ಟದವರೆಗೆ 36 ಕಿ.ಮೀ. ಪ್ರದೇಶದಲ್ಲಿ 281 ಎಕರೆ ಪ್ರದೇಶವನ್ನು ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ್ದು, ಉಳಿದ 67.24 ಎಕರೆ ಜಮೀನು ಶೀಘ್ರ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ವಿಶೇಷ ಭೂಸ್ವಾಧೀನ ಅಧಿಕಾರಿಗಳು ತಿಳಿಸಿದರು. ಈ ತಿಂಗಳ ಅಂತ್ಯದೊಳಗೆ ಶೇ. 90 ರಷ್ಟು ಭೂಸ್ವಾಧೀನ ಕಾರ್ಯ ಪೂರ್ಣಗೊಳಿಸಿ, ಟೆಂಡರ್ ಪ್ರಕ್ರಿಯೆ ಪ್ರಾರಂಭಿಸುವಂತೆ ಸಚಿವರು ಸೂಚನೆ ನೀಡಿದ್ದರು.
