ಮುಖ್ಯ ಸುದ್ದಿ
POCSO case: ಪೋಕ್ಸೊ ಪ್ರಕರಣ | ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅರ್ಜಿ ವಜಾ
CHITRADURGA NEWS | 14 SEPTEMBER 2024
ಚಿತ್ರದುರ್ಗ: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ಭಾಗವನ್ನು ತೆಗೆದುಹಾಕಲು ನಿರ್ದೇಶಿಸಬೇಕು ಎಂದು ಆರೋಪಿ ಶಿವಮೂರ್ತಿ ಮುರುಘಾ ಶರಣರು ಹೈಕೋರ್ಟ್‌ಗೆ ಕೋರಿದ್ದರು. ಆದರೆ ಶರಣರ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ. ತೀರ್ಪಿನ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 14 | ದೈವಿಕ ಸೇವಾ ಕಾರ್ಯಗಳಲ್ಲಿ ಭಾಗಿ, ವ್ಯಾಪಾರದಲ್ಲಿ ಲಾಭ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಚಿತ್ರದುರ್ಗದ ಜೈಲಿನಲ್ಲಿ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 376 (2) (ಎನ್), 376 (3), 504 ಮತ್ತು ಪೋಕ್ಸೊ ಕಾಯ್ದೆ–2012ರ ಕಲಂ 5 (ಎಲ್) ಮತ್ತು 6ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.