CHITRADURGA NEWS | 20 NOVEMBER 2026
ಚಿತ್ರದುರ್ಗ: ಆರ್ಟಿಇ (ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು 3.5 ಲಕ್ಷ ರೂ.ಗಳಿಂದ 8 ಲಕ್ಷ ರೂ.ಗಳಿಗೆ ಹೆಚ್ಚಿಸಿ ಸರ್ಕಾರ ಹೊರಡಿಸಿರುವ ಆದೇಶದಿಂದ ಬಡ ಮಕ್ಕಳಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಟೀಕಿಸಿದ್ದಾರೆ.
ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳ ನಿರ್ವಹಣೆ ಇನ್ಮುಂದೆ ಗ್ರಾಮ ಸಮಿತಿಗಳ ಕೈಗೆ!
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2009ರಲ್ಲಿ ಅಂದಿನ ಯುಪಿಎ ಸರ್ಕಾರ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಎಲ್ಲ ಜಾತಿಯ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವ ಉದ್ದೇಶದಿಂದ ಆರ್ಟಿಇ ಕಾಯ್ದೆ ಜಾರಿಗೆ ತಂದಿತ್ತು. ಕಾಯ್ದೆಯಡಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಟ್ಟು, ಅವರ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಭರಿಸುವ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಆರಂಭದಲ್ಲಿ ಯಾವುದೇ ವಾರ್ಡ್ ಅಥವಾ ಗ್ರಾಮದ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಪ್ರತಿಷ್ಠಿತ ಶಾಲೆಗಳಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಅವಕಾಶವಿತ್ತು. ಆದರೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದ ಅಂದಿನ ರಾಜ್ಯ ಸರ್ಕಾರ 2019ರಲ್ಲಿ ಕಾಯ್ದೆಗೆ ಮ್ಯಾಪಿಂಗ್ ಪದ್ಧತಿಯ ತಿದ್ದುಪಡಿ ತಂದಿತು. ವಿದ್ಯಾರ್ಥಿ ವಾಸಿಸುವ ವಾರ್ಡ್ ಅಥವಾ ಪಕ್ಕದ ವಾರ್ಡ್ನಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆ ಇದ್ದರೆ ಅಂತಹ ವಿದ್ಯಾರ್ಥಿಗಳು ಆರ್ಟಿಇ ಅಡಿ ಅರ್ಜಿ ಸಲ್ಲಿಸಲು ಸಾಧ್ಯವಾಗದಂತಹ ವ್ಯವಸ್ಥೆ ಜಾರಿಗೆ ತರಲಾಯಿತು ಎಂದು ಆರೋಪಿಸಿದ್ದಾರೆ.
2019ರ ಹಿಂದಿನ ಅವಧಿಯಲ್ಲಿ ರಾಜ್ಯದಲ್ಲಿ ವಾರ್ಷಿಕವಾಗಿ ಸುಮಾರು 1.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಆರ್ಟಿಇ ಸೌಲಭ್ಯ ಪಡೆಯುತ್ತಿದ್ದರು. ಆದರೆ, ಮ್ಯಾಪಿಂಗ್ ಪದ್ಧತಿ ಜಾರಿಯಾದ ನಂತರ ಈ ಸಂಖ್ಯೆ ಗಣನೀಯವಾಗಿ ಕುಸಿದಿದ್ದು, ಕಳೆದ ಎಂಟು ವರ್ಷಗಳಿಂದ ರಾಜ್ಯದಲ್ಲಿ ಕೇವಲ 38 ಸಾವಿರ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯ ಪಡೆಯುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಒಬ್ಬ ವಿದ್ಯಾರ್ಥಿಗೂ ಪ್ರತಿಷ್ಠಿತ ಕಾನ್ವೆಂಟ್ಗಳಲ್ಲಿ ಆರ್ಟಿಇ ಅಡಿ ಪ್ರವೇಶ ದೊರೆತಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹಿರಿಯೂರು ಉಪಚುನಾವಣೆಗೆ ರೈತ ಸಂಘದ ಅಭ್ಯರ್ಥಿ ಕಣಕ್ಕೆ
ಸರ್ಕಾರಿ ಶಾಲೆಗಳು ಇರುವ ವಾರ್ಡ್ ಮತ್ತು ಗ್ರಾಮಗಳ ಬಡ ಮಕ್ಕಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದೆ, ಕೇವಲ ಪೋಷಕರ ಆದಾಯದ ಮಿತಿಯನ್ನು 8 ಲಕ್ಷ ರೂ.ಗಳಿಗೆ ಹೆಚ್ಚಿಸಿರುವುದರಿಂದ ಏನು ಪ್ರಯೋಜನ? ಕಾಯ್ದೆಯ ಮೂಲ ಉದ್ದೇಶವೇ ಈಡೇರದಿರುವಾಗ ಆದಾಯ ಮಿತಿ ಹೆಚ್ಚಳದ ಪ್ರಚಾರದಿಂದ ಬಡ ಕುಟುಂಬಗಳಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರ ನಿಜವಾಗಿಯೂ ಎಲ್ಲ ಜಾತಿಯ ಬಡ ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸುವ ಉದ್ದೇಶ ಹೊಂದಿದ್ದರೆ, ಮೊದಲು 2019ರಲ್ಲಿ ಜಾರಿಗೆ ತಂದಿರುವ ಮ್ಯಾಪಿಂಗ್ ಪದ್ಧತಿಯನ್ನು ರದ್ದುಪಡಿಸಿ, ಈ ಹಿಂದಿನಂತೆ ಎಲ್ಲ ವಿದ್ಯಾರ್ಥಿಗಳಿಗೂ ತಮಗೆ ಇಷ್ಟವಾದ ಶಾಲೆ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ಬಿ.ಪಿ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

