CHITRADURGA NEWS | 21 November 2026
ಹೊಳಲ್ಕೆರೆ: ಅಧಿಕಾರವೆಂಬುದು ವೈಯಕ್ತಿಕ ಸ್ವಾರ್ಥಕ್ಕಲ್ಲ, ಸಾರ್ವಜನಿಕರ ಸೇವೆಗಾಗಿ ಎಂಬುದನ್ನು ಅಧಿಕಾರಿಗಳು ಅರಿತುಕೊಳ್ಳಬೇಕು. ಪ್ರಜಾಸೇವಾ ಆಂದೋಲನದ ಮೂಲಕ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಹಿರಿಯೂರು ಅಭಿವೃದ್ಧಿಗೆ ₹2 ಸಾವಿರ ಕೋಟಿಗೂ ಅಧಿಕ ಅನುದಾನ | ಸಿಎಂ ಡಿ.ಕೆ. ಶಿವಕುಮಾರ್
ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ, ಬಳಿಕ ಅಬ್ರದಾಸಿಕಟ್ಟೆ ಗ್ರಾಮದಲ್ಲಿ ₹50 ಲಕ್ಷ ಅನುದಾನದಲ್ಲಿ ಕೈಗೆತ್ತಿಕೊಳ್ಳಲಿರುವ ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜನಸಾಮಾನ್ಯರ ಮನೆ ಬಾಗಿಲಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವಾ ಕಾರ್ಯಕ್ರಮ ಜಾರಿಗೆ ತಂದಿದೆ. ಅಧಿಕಾರಿಗಳು ಪಡೆಯುವ ವೇತನ ಸಾರ್ವಜನಿಕರ ತೆರಿಗೆ ಹಣದಿಂದ ಬರುತ್ತದೆ ಎಂಬುದನ್ನು ಮರೆಯಬಾರದು. ಜನರ ಸಮಸ್ಯೆಗಳು ಏನೇ ಇರಲಿ ಅವುಗಳನ್ನು ಆಲಿಸಿ ಪರಿಹರಿಸಬೇಕು. ವಿನಾಕಾರಣ ಜನರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸದೆ ಅವರ ಕೆಲಸಗಳನ್ನು ಮಾಡಿಕೊಡಬೇಕು ಎಂದು ತಾಕೀತು ಮಾಡಿದರು.
ಕ್ಷೇತ್ರದಲ್ಲಿ ಮಳೆ ನೀರು ವ್ಯರ್ಥವಾಗಿ ಹರಿದು ಹೋಗದಂತೆ ರಾಮಗಿರಿ, ಮಲ್ಲನಕಟ್ಟೆ, ದೊಗ್ಗನಾಳ್ ಹಾಗೂ ಕಾಲ್ಕೆರೆ ಬಳಿ ಚೆಕ್ಡ್ಯಾಂಗಳನ್ನು ನಿರ್ಮಿಸಲಾಗಿದೆ. ತೇಕಲವಟ್ಟಿ ಮತ್ತು ಕೊಳಾಳ್ ಭಾಗದಲ್ಲಿ 17 ಚೆಕ್ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ನಿರ್ಮಿಸಿರುವುದರಿಂದ ರೈತರ ತೋಟಗಳಿಗೆ ಅನುಕೂಲವಾಗಿದೆ. ಕ್ಷೇತ್ರದ ಸಮಸ್ಯೆಗಳನ್ನು ಗುರುತಿಸಿ ಯಾರಿಂದಲೂ ಹೇಳಿಸಿಕೊಳ್ಳದೆ ಅಭಿವೃದ್ಧಿ ಕಾರ್ಯಗಳಿಗೆ ಹಗಲಿರುಳು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
2010ರಲ್ಲಿಯೇ ₹64 ಕೋಟಿ ವೆಚ್ಚದಲ್ಲಿ ಸೂಳೆಕೆರೆಯಿಂದ ಹೊಳಲ್ಕೆರೆಗೆ ನೀರು ತರಲಾಗಿದೆ. ಹಿರಿಯೂರಿನ ವಾಣಿವಿಲಾಸ ಸಾಗರದಲ್ಲಿ ನೀರಿನ ಮಧ್ಯೆ 170 ಅಡಿ ಪಿಲ್ಲರ್ ಅಳವಡಿಸಿ 1,060 ಎಚ್ಪಿ ಸಾಮರ್ಥ್ಯದ ಮೋಟಾರ್ಗಳನ್ನು ಅಳವಡಿಸಲಾಗಿದೆ. ಮುಂದಿನ ಒಂದೂವರೆ ತಿಂಗಳೊಳಗೆ 400 ಹಳ್ಳಿಗಳ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಪೂರೈಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ₹367 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಭದ್ರಾ ಯೋಜನೆಯ ನೀರಿನ ವಿಚಾರದಲ್ಲಿ ಪರಿಹಾರ ಹಂಚಿಕೆಯಲ್ಲಿ ತಾರತಮ್ಯವಾಗಿದೆ ಎಂದು ಅಲ್ಲಿನ ರೈತರು ಆರು ವರ್ಷಗಳ ಹಿಂದೆ ಚಿಕ್ಕಮಗಳೂರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಹೊಳಲ್ಕೆರೆಯಿಂದ ಒಂದು ಸಾವಿರ ರೈತರನ್ನು ಕರೆದುಕೊಂಡು ಹೋಗಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ ಅಲ್ಲಿನ ಜನರ ಮನವೊಲಿಸಿದ ಪರಿಣಾಮ ಪರಿಸ್ಥಿತಿ ತಿಳಿಯಾಗಿದೆ. ಜನವರಿಯೊಳಗೆ ತಾಲ್ಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಗುರಿ ಹೊಂದಿದ್ದೇನೆ ಎಂದು ಭರವಸೆ ನೀಡಿದರು.
ರೈತರಿಗೆ ಸಮರ್ಪಕ ವಿದ್ಯುತ್, ಗುಣಮಟ್ಟದ ರಸ್ತೆಗಳು, ಶಾಲಾ-ಕಾಲೇಜುಗಳು ಹಾಗೂ ಹೈಟೆಕ್ ಆಸ್ಪತ್ರೆಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗಿದೆ. ಸಿರಿಗೆರೆಯ ಗುರುಗಳು ಸಂಚರಿಸುವ ರಸ್ತೆಯೊಂದಕ್ಕೇ ₹100 ಕೋಟಿ ಅನುದಾನ ನೀಡಲಾಗಿದೆ. ದೇಶಾದ್ಯಂತ ಬರಗಾಲದ ಪರಿಸ್ಥಿತಿ ಇದ್ದರೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ಪ್ರತಿದಿನ ಒಂದಲ್ಲ ಒಂದು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಕೋಟ್ಯಂತರ ರೂಪಾಯಿ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಭದ್ರಾ ಜಲಾಶಯದಿಂದ 2 TMC ನೀರು ಹರಿಸಿ | ಸಚಿವ ಟಿ.ರಘುಮೂರ್ತಿ ಮನವಿ
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪಿ. ರಮೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಗಂಗಣ್ಣ, ಶಿವಕುಮಾರ್, ಶರತ್ಕುಮಾರ್, ಗೋವಿಂದಪ್ಪ, ಮಹೇಂದ್ರಯ್ಯ, ಜಯದೇವಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರವಿಕುಮಾರ್, ಎಂಜಿನಿಯರ್ಗಳಾದ ಕೇಶವ್, ಉಮೇಶ್, ರಾಜಪ್ಪ, ಬಸಣ್ಣ ಕೆಂಗುಂಟೆ, ಬಸವರಾಜ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

