CHITRADURGA NEWS | 23 JULY 2026
ಚಿತ್ರದುರ್ಗ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜುಲೈ 25 ರಂದು ನಗರದ ಅನುಭವ ಮಂಟಪದಲ್ಲಿ, ಬೆಂಗಳೂರು ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಗುರುವಾರ ಅನುಭವ ಮಂಟಪಕ್ಕೆ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮತ್ತು ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ ಭೇಟಿ ನೀಡಿ ಸಿದ್ದತೆ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಈ ವೇಳೆ ಮಾತನಾಡಿದ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿಗಳು ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಗೆ, ಬೆಂಗಳೂರು ವಿಭಾಗದ 9 ಜಿಲ್ಲೆಗಳ ಸಚಿವರು, ಶಾಸಕರು ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.
ಇದರೊಂದಿಗೆ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳು ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಒಟ್ಟು 350 ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಭಾಗವಹಿಸುತ್ತಿದ್ದು ಎಲ್ಲಾ ಸಿದ್ದತೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ.
ಮುಖ್ಯಮಂತ್ರಿಗಳು ಜುಲೈ 25 ರ ಬೆಳಗ್ಗೆ 11 ಗಂಟೆಗೆ ಹಿರಿಯೂರು ತಾಲೂಕಿನ ಎರಡ್ಮೂರು ಕಡೆಗಳಲ್ಲಿ ಬರ ಪರಿಶೀಲನೆ ನಡೆಸಿ ನಂತರ ಚಿತ್ರದುರ್ಗದ ಸಭೆಗೆ ಸಿಎಂ ಆಗಮಿಸುತ್ತಿದ್ದಾರೆ. ಈ ಸಭೆ ವಿಶೇಷವಾಗಿ ಬರಕ್ಕೆ ಪೂರಕವಾಗಿ ನಡೆಯುತ್ತಿದೆ ಎಂದರು.
ಇದನ್ನೂ ಓದಿ: ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆಗಾಗಿ ಜುಲೈ 25 ಮತ್ತು 26 ರಂದು ಮುಖ್ಯಮಂತ್ರಿಗಳು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಪ್ರವಾಸದ ಅಂಗವಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.
ಜುಲೈ 25 ರಂದು ಬೆಳಿಗ್ಗೆ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಹಿರಿಯೂರು ತಾಲ್ಲೂಕಿಗೆ ಆಗಲಿದ್ದಾರೆ. ಬಳಿಕ ಮಳೆ ಅಭಾವ ಹಾಗೂ ತೀವ್ರ ಬರದ ಹಿನ್ನೆಲೆಯಲ್ಲಿ ಒಣಗಿರುವ ಒಂದೆರಡು ಕೃಷಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಲಿದ್ದಾರೆ. ನಂತರ ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆಯವರೆಗೆ ನಗರದ ಅನುಭವ ಮಂಟಪದಲ್ಲಿ ಬೆಂಗಳೂರು ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಈ ಬೃಹತ್ ಸಭೆಯಲ್ಲಿ ಬೆಂಗಳೂರು ವಿಭಾಗಕ್ಕೆ ಒಳಪಡುವ ಒಂಬತ್ತು ಜಿಲ್ಲೆಗಳ ಸಚಿವರು, ಶಾಸಕರು, ಸಂಸದರು, ಎಂಎಲ್‍ಸಿಗಳು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ: ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಜುಲೈ 25 ರಂದು ಸಭೆ ಹಾಗೂ ವಾಸ್ತವ್ಯದ ನಂತರ, ಜುಲೈ 26 ರಂದು ದಿವಂಗತ ಮಾಜಿ ಸಚಿವ ಡಿ.ಸುಧಾಕರ್ ಅವರ ‘ನುಡಿನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಸಭೆಗೆ ಆಗಮಿಸುವ ಸಚಿವರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಅಧಿಕೃತ ಏಜೆನ್ಸಿಯಾದ ‘ಕೃಪಾದೇವಿ ಟೆಂಟ್ ಹೌಸ್’ ಮೂಲಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಭದ್ರತೆಗೆ 1,000ಕ್ಕೂ ಹೆಚ್ಚು ಪೋಲೀಸರ ನಿಯೋಜನೆ
ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಜುಲೈ 25ರಂದು ನಡೆಯಲಿರುವ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಇದನ್ನೂ ಓದಿ: ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ
ಜುಲೈ 25ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು, ಶಾಸಕರು ಮತ್ತು ಉನ್ನತಾಧಿಕಾರಿಗಳ ಸಮ್ಮುಖದಲ್ಲಿ ಬೆಂಗಳೂರು ಕಂದಾಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಈ ಸಭೆಯ ನಂತರ ಮುಖ್ಯಮಂತ್ರಿಯವರು ನಗರದ ಭೋವಿ ಮಠಕ್ಕೂ ಭೇಟಿ ನೀಡಲಿದ್ದು, ಎರಡೂ ಕಡೆ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗುತ್ತಿದೆ ಎಂದರು.
ಜುಲೈ 26ರಂದು ಹಿರಿಯೂರಿನಲ್ಲಿ ದಿವಂಗತ ಮಾಜಿ ಸಚಿವ ಸುಧಾಕರ್ ಅವರ ನುಡಿನಮನ ಕಾರ್ಯಕ್ರಮ ನಿಗದಿಯಾಗಿದ್ದು, ಅಲ್ಲಿಯೂ ಕೂಡ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು. ಈ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಒಟ್ಟಾರೆಯಾಗಿ 3 ಜನ ಎಸ್ಪಿ, 8 ಜನ ಡಿವೈಎಸ್ಪಿ, 20 ಜನ ಇನ್ಸ್‍ಪೆಕ್ಟರ್‍ಗಳು, 120 ಜನ ಪಿಎಸ್‍ಐಗಳು ಹಾಗೂ 1,000ಕ್ಕೂ ಹೆಚ್ಚು ಹೆಚ್‍ಸಿ/ಪಿಸಿ ದರ್ಜೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ.
ಹೆಚ್ಚುವರಿಯಾಗಿ 8 ಕೆಎಸ್‍ಆರ್‍ಪಿ ಹಾಗೂ 10 ಡಿಎಆರ್ ತುಕಡಿಗಳನ್ನು ನಿಯೋಜಿಸಲು ಯೋಜಿಸಲಾಗಿದೆ ಎಂದರು. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆಯಿಂದ ಸುಗಮ ಸಂಚಾರ ನಿರ್ವಹಣೆ ಮಾಡಲಾಗುವುದು.
ಇದನ್ನೂ ಓದಿ: ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
ಜುಲೈ 25ರ ರಾತ್ರಿ ಮುಖ್ಯಮಂತ್ರಿಯವರ ವಾಸ್ತವ್ಯದ ಕುರಿತು ಅಧಿಕೃತ ಮಾಹಿತಿ ಬರಬೇಕಿದ್ದು, ಅದು ತಲುಪಿದ ತಕ್ಷಣ ಅದಕ್ಕೆ ತಕ್ಕಂತೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ತಹಶೀಲ್ದಾರ್ ಗೋವಿಂದರಾಜು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

