CHITRADURGA NEWS | 11 AUGUST 2026
ಚಿತ್ರದುರ್ಗ: ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ವಿರುದ್ಧ ದೇಶಾದ್ಯಂತ ಸೋಮವಾರ ಹಮ್ಮಿಕೊಂಡಿದ್ದ ಚಳುವಳಿಗೆ ಬೆಂಬಲವಾಗಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಗಾಂಧಿ ವೃತ್ತದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಿಂದ ಪ್ರವಾಸಿ ಮಂದಿರದ ಮುಂಭಾಗದಿಂದ ಗಾಂಧಿ ವೃತ್ತದವರೆಗೆ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ, ವಿದೇಶಿ ಕಂಪನಿಗಳು, ಕಾರ್ಪೊರೇಟ್ ಸಂಸ್ಥೆಗಳು ಹಾಗೂ ಬಂಡವಾಳಶಾಹಿಗಳು ದೇಶದ ರೈತರು ಮತ್ತು ಕಾರ್ಮಿಕರ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿದರು.
ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ದೊರೆಯದ ಹಿನ್ನೆಲೆಯಲ್ಲಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಇದರಿಂದ ರೈತರು ಆತ್ಮಹತ್ಯೆಯಂತಹ ದುಸ್ಥಿತಿಗೆ ತಲುಪುತ್ತಿದ್ದಾರೆ. ನರೇಗಾ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿರುವುದರಿಂದ ಗ್ರಾಮೀಣ ಪ್ರದೇಶದ ಬಡವರಿಗೆ ಸಮರ್ಪಕ ಉದ್ಯೋಗ ದೊರೆಯುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತಂದಿರುವುದರಿಂದ ಕಾರ್ಮಿಕರ ಕೆಲಸದ ಅವಧಿ ಹೆಚ್ಚಳವಾಗುವ ಆತಂಕವಿದೆ. ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವಂತಹ ನಿಯಮಗಳು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದರು. ಗುತ್ತಿಗೆ ಪದ್ಧತಿ ಹೆಚ್ಚಳದಿಂದ ಖಾಯಂ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿದ್ದು, ಇದು ಕಾರ್ಮಿಕರಿಗೆ ಮಾರಕವಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಮಹಾತ್ಮ ಗಾಂಧೀಜಿ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳುವಳಿ ನಡೆಸಿದ ರೀತಿಯಲ್ಲಿ, ಇದೀಗ ಕಾರ್ಪೊರೇಟ್ ಕಂಪನಿಗಳ ವಿರುದ್ಧ ಹೋರಾಟ ಆರಂಭವಾಗಿದೆ. ಕೇಂದ್ರ ಸರ್ಕಾರ ಜನವಿರೋಧಿ ಹಾಗೂ ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ರೈತ ಮುಖಂಡ ಆರ್.ಬಿ. ನಿಲಿಂಗಪ್ಪ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಸಾಮಗ್ರಿಗಳು ಕಾಮಗಾರಿ ಸ್ಥಳದಲ್ಲಿ ತುಕ್ಕು ಹಿಡಿಯುತ್ತಿವೆ. ಕೇಂದ್ರ ಸರ್ಕಾರ ₹5,300 ಕೋಟಿ ಘೋಷಿಸಿದ್ದರೂ ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು. ಬರಪೀಡಿತ ಚಿತ್ರದುರ್ಗ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರು, ಕಾರ್ಮಿಕರು ಹಾಗೂ ಬಡವರ ಬದುಕು ಹಸನಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಮಾತನಾಡಿ, ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸಬಾರದು ಎಂದು ಆಗ್ರಹಿಸಿದರು.
ಸಂಯುಕ್ತ ಹೋರಾಟ ಕರ್ನಾಟಕ ಸಂಚಾಲಕ ಕುಮಾರ್ ಸಮತಳ ಮಾತನಾಡಿ, ರೈತರು ಮತ್ತು ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಬಿಡದಿ ಟೌನ್ಶಿಪ್ಗಾಗಿ ಫಲವತ್ತಾದ ರೈತರ ಭೂಮಿಯನ್ನು ವಶಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಬಗರ್ಹುಕುಂ ಸಾಗುವಳಿದಾರರಿಗೆ ಭೂಮಿ ಹಕ್ಕು ನೀಡಬೇಕು ಹಾಗೂ ಮನೆ ಇಲ್ಲದವರಿಗೆ ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಧನಂಜಯ ಹಂಪಯ್ಯನಮಾಳಿಗೆ, ಹೊರಕೇರಪ್ಪ, ಡಿ.ಎಸ್. ಮಲ್ಲಿಕಾರ್ಜುನ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಸುರೇಶ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಸಿಐಟಿಯುನ ಮಲಿಯಪ್ಪ, ತಿಪ್ಪೇಸ್ವಾಮಿ, ಅಖಂಡ ಕರ್ನಾಟಕ ರೈತ ಸಂಘದ ಶಾಂತಮ್ಮ, ಹನುಮಂತಪ್ಪ ಗೋನೂರು, ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ. ಶಫಿವುಲ್ಲಾ ಸೇರಿದಂತೆ ವಿವಿಧ ರೈತ, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

