
CHITRADURGA NEWS | 06 JUNE 2026
ಚಿತ್ರದುರ್ಗ: ಆಧುನಿಕ ಜೀವನಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು, ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ. ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.
ಇದನ್ನೂ ಓದಿ: ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಪರಿಸರ ದಿನಾಚರಣೆ‘ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಬಾಟಲಿಗಳನ್ನು ಬಳಸಿ ಎಲ್ಲೆಂದರಲ್ಲಿ ಬಿಸಾಡುವ ಮೂಲಕ ಸ್ವಚ್ಛತೆ ನಿರ್ಲಕ್ಷಿಸುತ್ತಿದ್ದೇವೆ. ಪ್ಲಾಸ್ಟಿಕ್ ಬಳಸಿ ಎಲ್ಲೆಂದರಲ್ಲಿ ಬಿಸಾಡುವುದರಿಂದ, ಮೂಕ ಪ್ರಾಣಿಗಳಾದ ಹಸುಗಳು ಅದನ್ನು ತಿಂದು ಜೀವ ಕಳೆದುಕೊಳ್ಳುತ್ತಿವೆ. ಇಂತಹ ಅಮಾನವೀಯ ವರ್ತನೆಯಿಂದ ನಾವೆಲ್ಲ ಹೊರಬರಬೇಕಾಗಿದೆ. ಮನೆಯ ಅಂಗಳದ ಕಸವನ್ನು ಎಲ್ಲೆಂದರಲ್ಲಿ ಸುಡುವುದು, ಹಸಿ ಕಸ ಮತ್ತು ಒಣ ಕಸ ವಿಂಗಡಿಸದೆ ಬಿಸಾಡುವುದರಿಂದ ಪರಿಸರ ಹಾಳಾಗುತ್ತಿದೆ ಎಂದರು.
ಕಸದ ವೈಜ್ಞಾನಿಕ ವಿಲೇವಾರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ತಂದಿದೆ. ನಗರಸಭೆ ಸಿಬ್ಬಂದಿ ಕಸ ಸಂಗ್ರಹಣೆಗೆ ಬಂದಾಗ ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕೊಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವೆಲ್ಲರೂ ಪರಿಸರ ಸಂರಕ್ಷಣೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸಿರಲು ಸಾಧ್ಯ. ಆದರೆ ವಾಯು ಮಾಲಿನ್ಯದಿಂದಾಗಿ ನಮ್ಮ ಆರೋಗ್ಯ ಕ್ಷೀಣಿಸುತ್ತಿದೆ. ಹಾಗಾಗಿ ಪರಿಸರ ಮಾಲಿನ್ಯ ತಡೆಗೆ ಗಿಡಗಳನ್ನು ಬೆಳೆಸಿ ಆಮ್ಲಜನಕದ ಪ್ರಮಾಣ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೀರಣ್ಣ ಸೋಮಶೇಖರ್ ಮಾತನಾಡಿ, ಪರಿಸರ ಹಾಳು ಮಾಡುವುದರಿಂದ ವಾಯು ಮಾಲಿನ್ಯ, ನೀರಿನ ಸಮಸ್ಯೆ ಮತ್ತು ಮಳೆಯ ಕೊರತೆಯಂತಹ ಅನೇಕ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ. ಇವುಗಳನ್ನು ಹೋಗಲಾಡಿಸಿ, ಪ್ರಕೃತಿಯನ್ನು ಕಾಪಾಡುವ ಉದ್ದೇಶದಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆ, ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಲ್ಲ, ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಪ್ರತಿಯೊಂದು ಹುಟ್ಟುಹಬ್ಬ ಅಥವಾ ವಿಶೇಷ ಕಾರ್ಯಕ್ರಮದ ನೆನಪಿಗೆ ಒಂದು ಸಸಿ ನೆಡುವ ಮೂಲಕ ಅದನ್ನು ಪೋಷಿಸಿ ಬೆಳೆಸಿದರೆ ಪರಿಸರ ಕಾಪಾಡಲು ತುಂಬಾ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಆಲೋಚಿಸಬೇಕಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಜೆ.ಸುದೀನ್ ಕುಮಾರ್ ಮಾತನಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಡಿ.ಮಮತ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ಎಸ್.ಶಕುಂತಲಾ, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ಆರ್.ನಟೇಶ್, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ಕೆ.ಜಿ.ಸತೀಶ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ಪೂಜಾ ಬೆಳಕೆರಿ, 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‍ಸಿ ನಿಖಿತಾ ಎಸ್ ಅಕ್ಕಿ, ವಲಯ ಅರಣ್ಯಾಧಿಕಾರಿ ಆರ್.ವಸಂತ ಕುಮಾರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಿ.ದೇವರಾಜ್, ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್ ಗುಂಡೇರಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

