
CHITRADURGA NEWS | 25 FEBRUARY 2026
ಚಿತ್ರದುರ್ಗ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಿಗೆ ಮುಂದಿನ ಶೈಕ್ಷಣಿಕ ಸಾಲಿಗೆ, 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು, ಪ್ರವೇಶ ಪರೀಕ್ಷೆ ಮಾ.01 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 24 ಫೆಬ್ರವರಿ | ರಾಶಿ ಬೆಲೆಯಲ್ಲಿ ಮತ್ತೆ ತುಸು ಏರಿಕೆ

ವಿವಿಧ ವಸತಿ ಶಾಲೆಗಳಿಗೆ ಮುಂದಿನ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್‍ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಮಾ.01ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಜಿಲ್ಲೆಯ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಒಟ್ಟು 7,202 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ.
ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತ ರೀತಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ, ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ವೇಳೆಯೊಳಗೆ ಆಯಾ ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಯನ್ನು ತಲುಪಿಸಬೇಕು. ಪರೀಕ್ಷೆ ಬಳಿಕ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ನಿಗದಿತ ಸ್ಥಳಕ್ಕೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಬೇಕು.
ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಮ್ಯೂಟೇಶನ್ ವ್ಯವಸ್ಥೆ ಜಾರಿ | ಪಹಣಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು ಡಿಸಿ ಮನವಿ
ಈಗಾಗಲೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪೊಲೀಸ್ ಇಲಾಖೆಯವರು ಪರೀಕ್ಷಾ ದಿನದಂದು ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆಯನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ತಿಮ್ಮಯ್ಯ ಅವರು ಪ್ರವೇಶ ಪರೀಕ್ಷೆ ಕುರಿತು ಮಾಹಿತಿ ನೀಡಿ, ಪ್ರವೇಶ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 21 ಕೇಂದ್ರಗಳನ್ನು ಸ್ಥಾಪಿಸಿದ್ದು, 7,202 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 05 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, 1,966 ವಿದ್ಯಾರ್ಥಿಗಳು, ಚಿತ್ರದುರ್ಗ ತಾಲ್ಲೂಕಿನಲ್ಲಿ 02 ಕೇಂದ್ರಗಳಲ್ಲಿ 952 ವಿದ್ಯಾರ್ಥಿಗಳು, ಹಿರಿಯೂರಿನ 03 ಕೇಂದ್ರಗಳಲ್ಲಿ 1,161 ವಿದ್ಯಾರ್ಥಿಗಳು, ಹೊಳಲ್ಕೆರೆಯ 02 ಕೇಂದ್ರಗಳಲ್ಲಿ 542 ವಿದ್ಯಾರ್ಥಿಗಳು, ಹೊಸದುರ್ಗದ 03 ಕೇಂದ್ರಗಳಲ್ಲಿ 1,268 ವಿದ್ಯಾರ್ಥಿಗಳು ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 03 ಕೇಂದ್ರಗಳಲ್ಲಿ 1,313 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರಿಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಸ್ವೀಕರಿಸಲು ಈಗಾಗಲೆ 08 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಕ್ಯಾಲ್ಕುಲೇಟರ್, ಮೊಬೈಲ್ ಪೋನ್, ಬ್ಲೂಟೂತ್ ಡಿವೈಸ್, ವೈರ್‍ಲೆಸ್ ಸೆಟ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದು ನಿಷೇಧಿಸಲಾಗಿದೆ ಎಂದರು.
ಇದನ್ನೂ ಓದಿ: ಮೊಬೈಲ್ ಕ್ಯಾಂಟಿನ್ | ಸಹಾಯಧನಕ್ಕೆ ಅರ್ಜಿ ಆಹ್ವಾನ
ಸಭೆಯಲ್ಲಿ ಉಪವಿಬಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜು, ಡಿಡಿಪಿಐ ಮಂಜುನಾಥ್, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಶಿಲ್ದಾರರು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಉಪನ್ಯಾಸಕರು, ಪ್ರಾಂಶುಪಾಲರುಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
