CHITRADURGA NEWS | 23 SEPTEMBER 2026
ಸಿರಿಗೆರೆ: ಲಿಂ. ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ 35ನೇ ಶ್ರದ್ಧಾಂಜಲಿ ಸಮಾರಂಭಕ್ಕೆ ಸಿರಿಗೆರೆಯಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ತರಳಬಾಳು ಜಗದ್ಗುರು ಸಂಸ್ಥೆಯ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಗಣ್ಯರು ಲಿಂ. ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಮತ್ತು ಗುರುಶಾಂತೇಶ್ವರ ದೇಶಿಕೇಂದ್ರ ಸ್ವಾಮೀಜಿಯವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗದ ನೂತನ ಎಸ್ಪಿಯಾಗಿ ಕುಶಲ್ ಚೌಕ್ಸೆ ನೇಮಕ
ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ, ಧರ್ಮ ಎಂದರೆ ಸತ್ಯ ಹಾಗೂ ನ್ಯಾಯದ ಪರ ನಿಲ್ಲುವುದಾಗಿದೆ. ಲಿಂ. ಶಿವಕುಮಾರ ಶ್ರೀಗಳು ಜಾತಿ, ಮತ ಭೇದವಿಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳನ್ನು ಆರಂಭಿಸುವ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ನಾಂದಿ ಹಾಡಿದರು. ಅವರ ದೂರದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳಲ್ಲಿ ಅನ್ನದಾಸೋಹ ಹಾಗೂ ಜ್ಞಾನದಾಸೋಹ ನಿರಂತರವಾಗಿ ನಡೆಯುತ್ತಿದೆ ಎಂದರು.
ಸ್ವಾತಂತ್ರ್ಯ ಪೂರ್ವದಲ್ಲಿಯೇ ಪ್ರಸಾದ ನಿಲಯದಲ್ಲಿ ಸಹಪಂಕ್ತಿ ಭೋಜನದ ಮೂಲಕ ಜಾತ್ಯತೀತ ಸಂದೇಶ ಸಾರಿದ ಶ್ರೀಗಳು, ನೀರಾವರಿ ಯೋಜನೆಗಳಿಗೆ ವೇಗ ನೀಡುವ ಮೂಲಕ ರೈತರ ಬದುಕಿಗೆ ಆಶಾಕಿರಣವಾಗಿದ್ದರು. ಕುಂಠಿತಗೊಂಡಿರುವ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವೇಗ ನೀಡಬೇಕು ಎಂದು ಹೇಳಿದರು.

ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಂ.ವಿ. ಧನಂಜಯ ಮಾತನಾಡಿ, ಶರಣ ಪರಂಪರೆಯನ್ನು ಬಿಂಬಿಸುವ ಸಿರಿಗೆರೆಯಂತಹ ಪವಿತ್ರ ನೆಲದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ರಾಜ್ಯದ ಆರು ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಅನುಕೂಲವಾಗುವ ಹಲವು ಸಂಶೋಧನೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿವೆ. ಕೃಷಿ ಕ್ಷೇತ್ರದಲ್ಲಿ ನೂತನ ತಂತ್ರಜ್ಞಾನ ಅಳವಡಿಸುವುದರ ಜತೆಗೆ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿಯನ್ನೂ ಶಿಕ್ಷಣ ಸಂಸ್ಥೆಗಳು ನಿರ್ವಹಿಸುತ್ತಿವೆ ಎಂದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ರೈತರಿಗೆ ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆ, ರೈತ ಸಂಪರ್ಕ ಕೇಂದ್ರಗಳ ಸೇವೆ ಹಾಗೂ ತಾಂತ್ರಿಕ ಮಾರ್ಗದರ್ಶನ ತಲುಪಬೇಕು. ಅಗತ್ಯ ಸಂದರ್ಭದಲ್ಲಿ ಬೆಳೆ ಪರಿಹಾರ ಸೇರಿದಂತೆ ಸೂಕ್ತ ನೆರವು ದೊರೆಯುವಂತೆ ಕೃಷಿ ಸಂಸ್ಥೆಗಳು ಸಹಕರಿಸಬೇಕು ಎಂದು ಹೇಳಿದರು.
ಬೆಂಗಳೂರು ರಾಜ್ಯ ಸಫಾಯಿ ಮತ್ತು ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಮಾತನಾಡಿ, ಧಾರ್ಮಿಕ, ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರಗಳಿಗಿಂತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ಲಿಂ. ಶಿವಕುಮಾರ ಶ್ರೀಗಳು 1946ರಲ್ಲಿ ಸಿರಿಗೆರೆಯಲ್ಲಿ ಪ್ರೌಢಶಾಲೆ ಆರಂಭಿಸುವ ಮೂಲಕ ಗ್ರಾಮೀಣ ಮಕ್ಕಳ ಬದುಕಿಗೆ ಜ್ಞಾನದ ಬೆಳಕು ನೀಡಿದರು. ತಾವು ಕೂಡ ತರಳಬಾಳು ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದು, ಸಂಸ್ಥೆಯಿಂದ ದೊರೆತ ಶಿಕ್ಷಣ ಮತ್ತು ಸಂಸ್ಕಾರ ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿದೆ ಎಂದರು.
ಲಿಂ. ಶಿವಕುಮಾರ ಶ್ರೀಗಳ ಆದರ್ಶ ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ಹಾಗೂ ಸಮಾಜಮುಖಿ ಚಿಂತನೆ ಬೆಳೆಸುವಲ್ಲಿ ತರಳಬಾಳು ವಿದ್ಯಾಸಂಸ್ಥೆಯ ಕೊಡುಗೆ ಅಪಾರವಾಗಿದೆ. ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ರೈತರು ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುವ ಮಹತ್ವದ ಕಾರ್ಯ ಕೈಗೊಂಡಿದ್ದು, ನೀರಾವರಿ ಕ್ಷೇತ್ರದಲ್ಲಿ ಆಧುನಿಕ ಭಗೀರಥರಂತೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ದಾವಣಗೆರೆಯ ವಿಶ್ರಾಂತ ಪ್ರಾಚಾರ್ಯ ನಾ. ಲೋಕೇಶ್ ಒಡೆಯರ್ ಅವರು ‘ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ ಶೈಕ್ಷಣಿಕ ಕ್ರಾಂತಿ’ ಕುರಿತು ವಿಷಯ ಮಂಡಿಸಿದರು.
ಇದನ್ನೂ ಓದಿ: ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ರಂಗಸ್ವಾಮಿ, ಕಲಿಕೇರಿ, ಮಾಜಿ ಸಹಕಾರ ಸಚಿವ ಎಸ್.ಎಸ್. ಪಾಟೀಲ್ ಸೇರಿದಂತೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ನೌಕರರ ವೃಂದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಾವಣಗೆರೆ ಸುಶ್ರಾವ್ಯ ಸಂಗೀತ ವಿದ್ಯಾಲಯದ ಯಶಾ ದಿನೇಶ್ ಅವರಿಂದ ವಚನಗೀತೆ, ತರಳಬಾಳು ಕಲಾ ಸಂಘದ ವಿದ್ಯಾರ್ಥಿಗಳಿಂದ ವೀಣಾ ವಾದನ, ಕಥಕ್, ಕಂಗೀಲು ಹಾಗೂ ಜಡೆಕೋಲಾಟ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ದಾವಣಗೆರೆ ಆರ್ಯಶಂಭು ಅವರಿಂದ ನೃತ್ಯ ಪ್ರದರ್ಶನ, ದಾವಣಗೆರೆ ಕಲ್ಪಕಲಾ ವಿದುಷಿ ಅಶ್ವಿಕಾ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

