
CHITRADURGA NEWS | 27 NOVEMBER 2025
ಚಿತ್ರದುರ್ಗ: ಕೆಲಸದ ಒತ್ತಡದ ನಡುವೆಯೂ ಕ್ರೀಡಾ ಮನೋಭಾವ ಇರಲಿ. ಕ್ರೀಡೆಯು ಒತ್ತಡ ಮೀರಿ ಬೆಳೆಯಲು ತುಂಬಾ ಸಹಕಾರಿಯಾಗಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ್ ವಾಸುದೇವ್ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 27 | ಹತ್ತಿ ರೇಟ್ ಎಷ್ಟಿದೆ?
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಆಯೋಜಿಸಲಾದ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಹಬ್ಬದ ಸಂಭ್ರಮದೊಂದಿಗೆ ಶಿಸ್ತುಬದ್ಧವಾಗಿ ಆಚರಣೆ ಮಾಡಲಾಗುತ್ತಿದ್ದು, ಶಿಸ್ತು ಬದ್ಧತೆಗೆ ಪೊಲೀಸರು ಎಲ್ಲರಿಗೂ ಮಾದರಿ. ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸಂಪೂರ್ಣವಾಗಿ ನಿಮ್ಮನ್ನು ನೀವು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಕುಟುಂಬ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯ 15ಕ್ಕೂ ಹೆಚ್ಚು ಮಂದಿ ಪೊಲೀಸ್ ಸಿಬ್ಬಂದಿಗಳು ರಾಜ್ಯ ಮತ್ತು ರಾಷ್ಟ್ರದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡಾ ಸಾಧನೆ ತೋರಿ ಎಂದು ಹೇಳಿದರು.
ಇದನ್ನೂ ಓದಿ: ಒಂದು ಲೋಡು ಅನ್ನಭಾಗ್ಯ ಅಕ್ಕಿ ವಶ | ಎಸಿ ಜಿಲಾನಿ ಕಾರ್ಯಾಚರಣೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಬ್ಬ ಹರಿದಿನಗಳಲ್ಲಿ ಕರ್ತವ್ಯದ ಒತ್ತಡ, ಸಾಮಾನ್ಯ ದಿನಗಳಿಗಿಂತಲೂ ಹೆಚ್ಚಾಗಿರುತ್ತದೆ. ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು, ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಆಗುವುದಿಲ್ಲ. ಹಾಗಾಗಿ ಪೊಲೀಷ್ ವಾರ್ಷಿಕ ಕ್ರೀಡಾಕೂಟವನ್ನು ನಾವು ಹಬ್ಬದಂತೆ ಆಚರಣೆ ಮಾಡುತ್ತೇವೆ ಎಂದು ತಿಳಿಸಿದ ಅವರು, ವರ್ಷವಿಡೀ ತಮ್ಮ ಆಸಕ್ತಿಯ ಕ್ರೀಡೆಯಲ್ಲಿ ಪೊಲೀಸರು ತಮ್ಮನ್ನು ತೊಡಗಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಪೊಲೀಸರು ತಮ್ಮ ಒತ್ತಡಗಳನ್ನು ಮರೆತು ಸಹೋದ್ಯೋಗಿಗಳೊಂದಿಗೆ ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗಿಯಾಗಬೇಕು. ಎಲ್ಲರೂ ಆಸಕ್ತಿಯಾಗಿ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದು ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಓಟದ ಸ್ಪರ್ಧೆ, ಗುಂಡು ಎಸೆತ, ಜಾವಲಿನ್ ಥ್ರೋ, ಭರ್ಜಿ ಎಸೆತ, ಕಬ್ಬಡಿ, ವಾಲಿಬಾಲ್, ಹಗ್ಗ ಜಗ್ಗಾಟ ಸ್ಪರ್ಧೆಗಳು ಜರುಗಿದವು.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ, ನೇರಸಾಲ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಆರ್.ಶಿವಕುಮಾರ್, ಡಿವೈಎಸ್ಪಿಗಳಾದ ಪಿ.ಕೆ.ದಿನಕರ್, ಸತ್ಯನಾರಾಯಣ, ಶಿವಕುಮಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
