CHITRADURGA NEWS | 05 AUGUST 2026
ಚಿತ್ರದುರ್ಗ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ತಮ್ಮ ಅಮೂಲ್ಯ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದು ಪಿಎಸ್ಐ ವಿಶ್ವನಾಥ್ ಸಾರ್ವಜನಿಕರಿಗೆ ಕರೆ ನೀಡಿದರು.
ಇದನ್ನೂ ಓದಿ: ಚರ್ಮದ ಸೋಂಕುಗಳನ್ನು ತಪ್ಪಿಸಲು, ಮಳೆಗಾಲದಲ್ಲಿ ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ
ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಹೆಲ್ಮೆಟ್ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ರಸ್ತೆ ಅಪಘಾತಗಳಲ್ಲಿ ತಲೆಗೆ ಸಂಭವಿಸುವ ಗಂಭೀರ ಗಾಯಗಳನ್ನು ತಡೆಯುವಲ್ಲಿ ಹೆಲ್ಮೆಟ್ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಬಾರದು ಎಂದು ತಿಳಿಸಿದರು.
ಹೆಲ್ಮೆಟ್ ಧರಿಸದೆ ಸಂಚರಿಸುವ ವಾಹನಗಳನ್ನು ತಡೆದು, ಸವಾರರು ಹೊಸ ಹೆಲ್ಮೆಟ್ ಖರೀದಿಸಿದ ಬಳಿಕವೇ ವಾಹನವನ್ನು ಹಿಂತಿರುಗಿಸಲಾಗುವುದು. ಈ ಕ್ರಮ ದಂಡ ವಿಧಿಸುವ ಉದ್ದೇಶದಿಂದಲ್ಲ, ಸಾರ್ವಜನಿಕರ ಜೀವ ರಕ್ಷಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
“ನಿಮ್ಮ ಸುರಕ್ಷತೆಯೇ ನಿಮ್ಮ ಕುಟುಂಬದ ನೆಮ್ಮದಿ. ನಿಮ್ಮನ್ನು ನಂಬಿ ಕಾಯುತ್ತಿರುವ ಹೆಂಡತಿ, ಮಕ್ಕಳು ಹಾಗೂ ತಂದೆ-ತಾಯಿಯ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕ್ಷಣಿಕ ನಿರ್ಲಕ್ಷ್ಯದಿಂದ ಸಂಭವಿಸುವ ಅಪಘಾತಗಳು ಇಡೀ ಕುಟುಂಬವನ್ನು ಸಂಕಷ್ಟಕ್ಕೆ ತಳ್ಳಬಹುದು. ಆದ್ದರಿಂದ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು” ಎಂದು ಅವರು ಸಲಹೆ ನೀಡಿದರು.
ಇದನ್ನೂ ಓದಿ: ಬರ ವೀಕ್ಷಣೆಗೆ ಸಚಿವ ಟಿ.ರಘುಮೂರ್ತಿ ಗ್ರಾಮಾಂತರ ಪ್ರವಾಸ | ರೈತರ ನೆರವಿಗೆ ಸರ್ಕಾರ ಬದ್ಧ
ಈ ಸಂದರ್ಭದಲ್ಲಿ ಮಾತನಾಡಿದ ಪಿಎಸ್ಐ ಬಸವರಾಜ, ಗ್ರಾಮೀಣ ಪ್ರದೇಶಗಳಿಂದ ಪ್ರತಿದಿನ ಸಾವಿರಾರು ದ್ವಿಚಕ್ರ ವಾಹನಗಳು ನಗರಕ್ಕೆ ಬರುತ್ತಿದ್ದು, ಅವುಗಳಲ್ಲಿ ಶೇ. 90ಕ್ಕೂ ಹೆಚ್ಚು ಸವಾರರು ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಅತಿವೇಗ, ಅಜಾಗರೂಕ ಚಾಲನೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಅನೇಕ ಅಮೂಲ್ಯ ಜೀವಗಳು ಕಳೆದುಹೋಗುತ್ತಿವೆ. ಅಪಘಾತಗಳಲ್ಲಿ ಮೃತಪಟ್ಟ ಅಥವಾ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗಳ ಕುಟುಂಬಗಳು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇಂತಹ ದುರ್ಘಟನೆಗಳನ್ನು ತಡೆಯಲು ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯ ಸರ್ಕಾರವು ಆಗಸ್ಟ್ 1ರಿಂದ ಹೆಲ್ಮೆಟ್ ಕಡ್ಡಾಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡಾತ್ಮಕ ಕ್ರಮದ ಜೊತೆಗೆ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯ ಈ ಅಭಿಯಾನಕ್ಕೆ ಸಹಕರಿಸಿ ತಮ್ಮ ಹಾಗೂ ಇತರರ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ ರೇಟ್ ಎಷ್ಟಿದೆ?
ಅಭಿಯಾನದ ವೇಳೆ ಹೆಲ್ಮೆಟ್ ಧರಿಸದ ಸವಾರರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿ, ಹೆಲ್ಮೆಟ್ ಬಳಕೆಯ ಮಹತ್ವ ಹಾಗೂ ನಿರ್ಲಕ್ಷ್ಯದ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಎಎಸ್ಐಗಳಾದ ಶಿವಶಂಕರ್, ಹೇಮಣ್ಣ, ಬಸವರಾಜ ಹಾಗೂ ಸಿಬ್ಬಂದಿಗಳಾದ ಮನೋಹರ್ ಸಿ.ಎಂ., ಸ್ವಾಮಿ ಎಸ್.ಬಿ., ಚಂದ್ರನಾಯ್ಕ, ಕೋಟಿ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

