CHITRADURGA NEWS | 05 SEPTEMBER 2026
ಚಿತ್ರದುರ್ಗ: ವಿಧಾನ ಪರಿಷತ್ ಬುದ್ಧಿವಂತರ ಕ್ಷೇತ್ರವಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ವಿವಿಧ ಸಮಸ್ಯೆಗಳ ಕುರಿತು ಕುಲಂಕಷವಾಗಿ ಚರ್ಚಿಸುವ ಪವಿತ್ರ ವೇದಿಕೆಯಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಈ ಹಿಂದೆ ನಡೆದ 10 ಚುನಾವಣೆಗಳಲ್ಲಿ 8 ಬಾರಿ ಬಿಜೆಪಿ ಹಾಗೂ 2 ಬಾರಿ ಜೆಡಿಎಸ್ ಗೆಲುವು ಸಾಧಿಸಿದ್ದು, ಕ್ಷೇತ್ರದಲ್ಲಿ ಎನ್ಡಿಎ ಪರ ಜನಾದೇಶವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಹೇಳಿದರು.
ಇದನ್ನೂ ಓದಿ: ವೀರಶೈವ ಅರ್ಬನ್ ಸೊಸೈಟಿ ವ್ಯಾಪ್ತಿ ಜಿಲ್ಲೆಯ ಐದು ತಾಲೂಕುಗಳಿಗೆ ವಿಸ್ತರಣೆ | ಪಟೇಲ್ ಶಿವಕುಮಾರ್
ನಗರದ ಐಶ್ವರ್ಯ ಫೋರ್ಟ್ನಲ್ಲಿ ಆಯೋಜಿಸಿದ್ದ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣಾ ಉದ್ಘಾಟನಾ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ 30ರಿಂದ 50 ಸಾವಿರದಷ್ಟಿದ್ದ ಮತದಾರರ ಸಂಖ್ಯೆ ಇದೀಗ 1.76 ಲಕ್ಷ ದಾಟಿದ್ದು, ಮುಂದಿನ ದಿನಗಳಲ್ಲಿ 2 ಲಕ್ಷಕ್ಕೆ ಏರುವ ಸಾಧ್ಯತೆಯಿದೆ. ಐದು ಜಿಲ್ಲೆಗಳು, 33 ತಾಲೂಕುಗಳು ಹಾಗೂ ಸುಮಾರು 600 ಕಿ.ಮೀ. ವ್ಯಾಪ್ತಿಯನ್ನು ಹೊಂದಿರುವ ಈ ಕ್ಷೇತ್ರದ ಚುನಾವಣೆ ಕೇವಲ ಅಭ್ಯರ್ಥಿಯ ಚುನಾವಣೆಯಲ್ಲ; ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಚುನಾವಣೆಯಾಗಿದೆ ಎಂದರು.
ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ಸಾಧನೆಗಳನ್ನು ಪದವೀಧರರು, ಶಿಕ್ಷಕರು, ವೈದ್ಯರು, ಎಂಜಿನಿಯರ್ಗಳು, ವಕೀಲರು ಸೇರಿದಂತೆ ಪ್ರಬುದ್ಧ ಮತದಾರರಿಗೆ ತಿಳಿಸಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಜನರ ಮುಂದಿಡುವ ಮೂಲಕ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ, ಕೆಪಿಎಸ್ಸಿ ನೇಮಕಾತಿ ಅಕ್ರಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಾಗೂ ಕಿಟ್ ಹಗರಣಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಆಡಳಿತ ವೈಫಲ್ಯದಿಂದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಬರ ಪರಿಸ್ಥಿತಿಯಲ್ಲಿಯೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಇದನ್ನೂ ಓದಿ: ವೈದ್ಯಕೀಯ ಕಾಲೇಜಿನಲ್ಲಿ PG ಸೀಟುಗಳ ಮಂಜೂರಾತಿಗೆ NMC ತಂಡದಿಂದ ಮೊದಲ ಹಂತದ ಪರಿವೀಕ್ಷಣೆ
ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿ ವಿಶಾಲವಾಗಿದ್ದು, ಅಭ್ಯರ್ಥಿಯು ಪ್ರತಿಯೊಬ್ಬ ಮತದಾರರನ್ನು ವೈಯಕ್ತಿಕವಾಗಿ ತಲುಪುವುದು ಸವಾಲಿನ ಕೆಲಸವಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿರುವ ಪದವೀಧರರು, ಖಾಸಗಿ ಸಂಸ್ಥೆಗಳ ನೌಕರರು, ರೈತರು ಹಾಗೂ ಕೂಲಿಕಾರರಾಗಿರುವ ಪದವೀಧರರನ್ನು ಮತದಾರರ ಪಟ್ಟಿಯ ಆಧಾರದಲ್ಲಿ ಗುರುತಿಸಿ ವೈಯಕ್ತಿಕವಾಗಿ ಸಂಪರ್ಕಿಸಬೇಕು ಎಂದರು.
ರಾಜ್ಯ ಸರ್ಕಾರದ ವೈಫಲ್ಯಗಳು, ಪದವೀಧರರಿಗೆ ನೀಡಿದ್ದ ಭರವಸೆಗಳ ಈಡೇರಿಕೆಯಲ್ಲಿ ಆಗಿರುವ ವಿಫಲತೆ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ದೇಶದ ಆರ್ಥಿಕ ಪ್ರಗತಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸಾಧನೆಗಳನ್ನು ಮತದಾರರಿಗೆ ತಲುಪಿಸಬೇಕು ಎಂದು ಹೇಳಿದರು.
ಚುನಾವಣೆಗೆ ಕೇವಲ ಒಂದು ತಿಂಗಳ ಸಮಯವಿದ್ದು, ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿದಿನ ಕ್ಷೇತ್ರಮಟ್ಟದಲ್ಲಿ ಸಭೆ ನಡೆಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಮೊದಲ ಪ್ರಾಶಸ್ತ್ಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಮೊದಲ ಸುತ್ತಿನಲ್ಲೇ ಭಾರಿ ಅಂತರದ ಗೆಲುವು ಸಾಧಿಸುವ ಗುರಿ ಹೊಂದಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿಗೆ KMERC ಅಡಿ ರೂ.3,574 ಕೋಟಿ ಅನುದಾನ ಅನುಮೋದನೆ
ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಮಾತನಾಡಿ, ಸುಮಾರು 12 ವರ್ಷಗಳ ಬಳಿಕ ಅಖಂಡ ಚಿತ್ರದುರ್ಗ ಜಿಲ್ಲೆಗೆ ಬಿಜೆಪಿ ದೊಡ್ಡ ಅವಕಾಶ ನೀಡಿದೆ. ಯಾವುದೇ ರಾಜಕೀಯ ಕುಟುಂಬದ ಹಿನ್ನೆಲೆಯಿಲ್ಲದೆ 2000ರಲ್ಲಿ ಯುವ ಮೋರ್ಚಾ ಅಧ್ಯಕ್ಷರಾಗಿ ಪಕ್ಷದ ಕೆಲಸ ಆರಂಭಿಸಿದ್ದು, ಕಳೆದ 25-26 ವರ್ಷಗಳಿಂದ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದೇನೆ ಎಂದರು.
ಸಾಮಾನ್ಯ ಕಾರ್ಯಕರ್ತನಿಗೆ ಪಕ್ಷ ಅವಕಾಶ ನೀಡಿರುವುದು ಪ್ರತಿಯೊಬ್ಬ ಕಾರ್ಯಕರ್ತನಿಗೂ ದೊರೆತ ಅವಕಾಶವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಗೆಲುವು ಸಾಧಿಸುವ ಮೂಲಕ ಪಕ್ಷದ ವರಿಷ್ಠರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ. ಜನಪ್ರತಿನಿಧಿಗಳೊಂದಿಗೆ ಕೈಜೋಡಿಸಿ ಚಿತ್ರದುರ್ಗದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಡಿ.ಎಸ್. ಅರುಣ್, ಮಾಜಿ ಸದಸ್ಯ ಡಾ. ಶಿವಯೋಗಿ ಸ್ವಾಮಿ, ಮಾಜಿ ಶಾಸಕರಾದ ಎಸ್.ಕೆ. ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಮಾಜಿ ಅಧ್ಯಕ್ಷರಾದ ಟಿ.ಜಿ. ನರೇಂದ್ರ, ಜಿ.ಎಂ. ಸುರೇಶ್, ಜಿಲ್ಲಾ ಉಪಾಧ್ಯಕ್ಷೆ ಶೈಲಜಾ ರೆಡ್ಡಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಗ್ರಾಮಾಂತರ ಮೋರ್ಚಾ ಅಧ್ಯಕ್ಷ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

