CHITRADURGA NEWS | 12 MAY 2026
ಚಿತ್ರದುರ್ಗ: ಹೆಣ್ಣು ಮಕ್ಕಳಲ್ಲಿ ಕಾಣಿಸಿಕೊಳ್ಳುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಹೆಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮಾ ವೈರಸ್) ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸುವ ಮೂಲಕ ನಿಗಧಿತ ಸಮಯದೊಳಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಸೂಚನೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?
ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಮಟ್ಟದ ಹೆಚ್‍ಪಿವಿ ಲಸಿಕಾಕರಣದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಚ್‍ಪಿವಿ ಲಸಿಕಾಕರಣದ ಅಭಿಯಾನ ಯಶಸ್ವಿಗೆ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಅರ್ಹ ಫಲಾನುಭವಿಯು ಲಸಿಕೆಯಿಂದ ವಂಚಿತರಾಗಬಾರದು ಎಂದು ತಾಕೀತು ಮಾಡಿದರು.
ಶಿಕ್ಷಕರ ಹಾಗೂ ಪೋಷಕರ ಸಭೆ ನಡೆಸಿ:
ಹೆಚ್‍ಪಿವಿ ಲಸಿಕೆಯ ಮಹತ್ವ ಹಾಗೂ ಜಾಗೃತಿ ಕುರಿತಂತೆ ಇದೇ ಮೇ 25 ರಿಂದ 30 ರವರೆಗೆ ಶಿಕ್ಷಕರು ಹಾಗೂ ಪೋಷಕರ ಸಭೆ ನಡೆಸಬೇಕು ಎಂದು ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಅವರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಜಿಟಿಟಿಸಿ ತರಬೇತಿ ಕೇಂದ್ರಕ್ಕೆ ಪಿ.ರಘು ಭೇಟಿ | ಡಿಪ್ಲೊಮಾ ಕೋರ್ಸ್‍ಗಳಿಂದ ಉಜ್ವಲ ಭವಿಷ್ಯ
14 ವರ್ಷದೊಳಗಿನ ಅರ್ಹ ಹೆಣ್ಣು ಮಕ್ಕಳ ಸಂಖ್ಯೆಯನ್ನು ಗುರುತಿಸಲು ಶಾಲೆಗಳ ಲೈನ್‍ಲಿಸ್ಟ್ ಮಾಡಿಕೊಂಡು, ವಿದ್ಯಾರ್ಥಿನಿಯರ ಪಟ್ಟಿ ಸಿದ್ದಪಡಿಸಿಕೊಳ್ಳಬೇಕು ಹಾಗೂ ಜಿಲ್ಲೆಯ ಎಲ್ಲ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಗಳು ಹಾಗೂ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8 ಮತ್ತು 9ನೇ ತರಗತಿ ವಿದ್ಯಾರ್ಥಿನಿಯರ ಪೋಷಕರು ಹಾಗೂ ಶಿಕ್ಷಕರ ಸಭೆ ನಡೆಸಿ ಜಾಗೃತಿ ಮೂಡಿಸಲು ಸಲಹೆ ನೀಡಿದರು.
ಶಿಕ್ಷಕರು ಹಾಗೂ ಪೋಷಕರ ಸಭೆಗೂ ಮುನ್ನ ಇದೇ ಮೇ 16ರಂದು ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆ ಮುಖ್ಯ ಶಿಕ್ಷಕರಿಗೆ ಓರಿಯಂಟೇಷನ್ ಕಾರ್ಯಾಗಾರ ಆಯೋಜನೆ ಮಾಡುವಂತೆ ತಿಳಿಸಿದರು.
ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ ಮಾತನಾಡಿ, ಹೆಚ್‍ಪಿವಿ ಲಸಿಕಾ ಅಭಿಯಾನ ಈಗಾಗಲೇ ಜಿಲ್ಲೆಯಲ್ಲಿ ಕಳೆದ ಮಾರ್ಚ್ ಮಾಹೆಯಿಂದ ಪ್ರಾರಂಭವಾಗಿದ್ದು, ಪ್ರಸ್ತುತ 14 ವರ್ಷ ಪೂರೈಸಿದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆ ನೀಡಲಾಗುತ್ತಿದೆ.
ಇದನ್ನೂ ಓದಿ: ಸುಧಾಕರ್ ಗುಣಗಾನ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್
ಪ್ರತಿ ಫಲಾನುಭವಿಗೆ 0.5 ಎಂಲ್‍ನಷ್ಟು ಲಸಿಕೆಯನ್ನು ಎಡಗೈ ಮೇಲ್ಭಾಗಕ್ಕೆ ಸ್ನಾಯುಗಳ ಮೂಲಕ ನೀಡಲಾಗುತ್ತಿದೆ. ಲಸಿಕೆಯನ್ನು 2 ರಿಂದ 8 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂರಕ್ಷಿಸಲಾಗುತ್ತಿದೆ. ರಾಜ್ಯ ಮತ್ತು ಪ್ರಾದೇಶಿಕ ಲಸಿಕಾ ಕೇಂದ್ರಗಳ ಮೂಲಕ ಜಿಲ್ಲೆಗೆ ಸರಬರಾಜು ಮಾಡಲಾಗುತ್ತಿದೆ ಎಂದರು.
ಲಸಿಕಾಕರಣದ ಪಾರದರ್ಶಕತೆಗಾಗಿ ಯು-ವಿನ್ ಪೋರ್ಟಲ್ ಮತ್ತು ಇ-ವಿನ್ ತಂತ್ರಜ್ಞಾನ ಬಳಸಲಾಗುತ್ತಿದೆ. ಇದರಿಂದ ಲಸಿಕೆಯ ದಾಸ್ತಾನು ಮತ್ತು ಫಲಾನುಭವಿಗಳ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಮೇಲ್ವಿಚಾರಣೆ ಮಾಡಲು ಸಾಧ್ಯವಾಗುತ್ತಿದೆ. ಜಿಲ್ಲೆಯ ಅಂದಾಜು ಶೇ.1ರಷ್ಟು ಜನಸಂಖ್ಯೆ ಈ ವಯೋಮಿತಿಯಲ್ಲಿದ್ದು, ಅಂದಾಜು 18 ಸಾವಿರ ಫಲಾನುಭವಿಗಳ ಗುರಿ ಹೊಂದಲಾಗಿದೆ. ಪ್ರಸ್ತುತ ಶೇ.43ರಷ್ಟು ಪ್ರಗತಿ ಸಾಧಿಸಲಾಗಿದ್ದು, ರಾಜ್ಯದಲ್ಲಿ ಜಿಲ್ಲೆಯು 15ನೇ ಸ್ಥಾನದಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಬೇಸಿಗೆ ರಜೆಯ ಅವಧಿಯಿಂದಾಗಿ ಹೆಚ್‍ಪಿವಿ ಲಸಿಕಾಕರಣ ಅಭಿಯಾನ ಸ್ವಲ್ಪ ಮಂದಗಿತಿಯಲ್ಲಿ ಸಾಗಿದ್ದು, ಜೂನ್ ಮೊದಲ ವಾರದೊಳಗೆ ಹೆಚ್ಚಿನ ಪ್ರಗತಿ ಸಾಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಸಚಿವ ಸುಧಾಕರ್ ನಿಧನಕ್ಕೆ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ತೀವ್ರ ಸಂತಾಪ
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ರವಿಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಕಾಶೀ, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
